ಕನಕಗಿರಿ: ನಿಗದಿತ ಕಾಲಮಿತಿಯೊಳಗೆ ವಿವಿಧ ಯೋಜನೆಯ ಪ್ರಗತಿಯನ್ನು ಸಾಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ ಅವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲ್ಲೂಕು ಪಂಚಾಯಿತಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನರೇಗಾ ಯೋಜನೆಯಡಿ ಬರುವ ವಿವಿಧ ಕಾಮಗಾರಿಗಳ ಸಮಗ್ರ ಅನುಷ್ಟಾನವನ್ನು ಪಾರದರ್ಶಕವಾಗಿ, ಕಾಲಮಿತಿಯೊಳಗೆ ಮುಗಿಸಬೇಕು. ಕಾಮಗಾರಿ ಸ್ಥಳದಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ ಕೂಡಲೇ ಪರಿಹರಿಸುವ ಕ್ರಮಕೈಗೊಳ್ಳಬೇಕು ಜತೆಗೆ ಎನ್.ಎಂ.ಎಂ.ಎಸ್ ಹಾಜರಾತಿಯನ್ನು ಕಡ್ಡಾಯವಾಗಿ ಹಾಕಬೇಕೆಂದು ಹೇಳಿದರು.
ಮೇಟ್ ಗಳ ನೋಂದಣಿ ಸೇರಿದಂತೆ ನರೇಗಾ ಯೋಜನೆಯ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಆ. 15ರಂದು ಶಿಶುಪಾಲನಾ ಕೇಂದ್ರಗಳನ್ನು ತೆರೆಯ ಬೇಕಾಗಿರುವುದರಿಂದ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಅಮೃತ ಸರೋವರ ಕೆರೆಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು ಎಂದು ತಿಳಿಸಿದರು.
ನೆರೆ ಸಂತ್ರಸ್ತ ಪುರ್ನವಸತಿ ಯೋಜನೆ, ಪಿಎಂಎವೈಜಿ ವಸತಿ ಯೋಜನೆ, ನಿವೇಶನ ಹಂಚಿಕೆ ಕುರಿತು ಪಿಡಿಒ ಅವರಿಂದ ಮಾಹಿತಿಯನ್ನು ಪಡೆದುಕೊಂಡು ಪ್ರಗತಿ ಸಾಧಿಸಲು ಸೂಚಿಸಿದರು.
ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ, ಸಹಾಯಕ ನಿರ್ದೇಶಕ ವೀರಣ್ಣ ನಕ್ರಳ್ಳಿ, ಸಾಮಾಜಿಕ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾ.ಪಂ ಸಿಬ್ಬಂದಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.