ಅಂಜನಾದ್ರಿ ಅಭಿವೃದ್ಧಿಗೆ ಯೋಜನೆ: ಸಚಿವ ಸಿ.ಪಿ.ಯೋಗೇಶ್ವರ್ ಭೇಟಿ

ಕೊಪ್ಪಳ: ‘ಅಂಜನಾದ್ರಿ ಪರ್ವತ ಪವಿತ್ರ ಧಾರ್ಮಿಕ ಕ್ಷೇತ್ರ. ಇದರ ಸಮಗ್ರ ಅಭಿವೃದ್ಧಿಗೆ ಸರ್ಕಾರ ತೀರ್ಮಾನಿಸಿದೆ ’ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.
ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಪರ್ವತಕ್ಕೆ ಅಧಿಕಾರಿಗಳೊಂದಿಗೆ ಬುಧವಾರ ಭೇಟಿ ನೀಡಿ ಆಂಜನೇಯ ಸ್ವಾಮಿ ದರ್ಶನ ಪಡೆದು ಸ್ಥಳ ಪರಿವೀಕ್ಷಣೆಯ ನಂತರ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಅಂಜನಾದ್ರಿ ಬೆಟ್ಟಕ್ಕೆ ದೇಶದ ವಿವಿಧ ಭಾಗಗಳಿಂದ, ವಿದೇಶಗಳಿಂದ ಹನುಮನ ಭಕ್ತರು ಬರುತ್ತಿದ್ದು, ಇದರ ಅಭಿವೃದ್ಧಿಗೆ ಈ ಭಾಗದ ಸಂಸದರು, ಶಾಸಕರು ನಮಗೆ ಮನವಿ ಮಾಡುತ್ತಿದ್ದಾರೆ. ಅದಕ್ಕಾಗಿ ಈ ಹಿಂದೆ ಕೆ.ಎಸ್.ಈಶ್ವರಪ್ಪ ಅವರ ನೇತೃತ್ವದಲ್ಲಿ ನಾಲ್ವರು ಸಚಿವರು ಇಲ್ಲಿ ಸೇರುವ ಕಾರ್ಯಕ್ರಮವಿತ್ತು. ಆದರೆ ಕೋವಿಡ್ ಕಾರಣದಿಂದ ಅದು ಆಗಲಿಲ್ಲ ಎಂದರು.
ಮುಜರಾಯಿ, ಕಂದಾಯ, ಪ್ರವಾಸೋದ್ಯಮ, ಗಣಿ ಸೇರಿದಂತೆ ವಿವಿಧ ಇಲಾಖೆಗಳ ಅಡಿ ಈ ಪರ್ವತ ಬರುತ್ತಿದ್ದು, ಎಲ್ಲ ಸಚಿವರು ಶೀಘ್ರದಲ್ಲಿ ಸಭೆ ಸೇರಿ ಅಂತರರಾಷ್ಟ್ರೀಯ ಮಟ್ಟದ ಪ್ರವಾಸಿ ಸ್ಥಳವನ್ನಾಗಿ ರೂಪಿಸಲು ಸಂಬಂಧ ಸಮಗ್ರ ಚರ್ಚೆ ನಡೆಸುವುದಾಗಿ ತಿಳಿಸಿದರು.
ನಾನು ಈ ಭಾಗದಲ್ಲಿ ಪ್ರವಾಸ ಮಾಡುತ್ತಿರುವುದರಿಂದ ಇಲ್ಲಿಗೆ ಅಧಿಕಾರಿಗಳೊಂದಿಗೆ ಭೇಟಿ ಕೊಟ್ಟಿದ್ದೇನೆ. ಪ್ರವಾಸೋದ್ಯಮ ಸ್ಥಳಗಳನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಹನುಮ ಜನಿಸಿದ ನಾಡು ಇದೇ ಎನ್ನುವುದಕ್ಕೆ ಹಲವಾರು ದಾಖಲೆಗಳು ಇವೆ. ಪೌರಾಣಿಕ ಹಿನ್ನೆಲೆ ನೋಡಿದರೆ ಇದುವೇ ಹನುಮನ ಮೂಲವಾಗಿರುವುದು ತಿಳಿದು ಬರುತ್ತದೆ ಎಂದು ಹೇಳಿದರು.
ಇದನ್ನು ಅಭಿವೃದ್ಧಿ ಮಾಡಬೇಕಾದರೆ ಸಾವಿರಾರು ಕೋಟಿ ಹಣದ ಮಾಸ್ಟರ್ ಪ್ಲಾನ್ ಬೇಕಾಗುತ್ತದೆ. ಇಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದೆ. ಆ ಮೂಲಕ ಇಲ್ಲಿಯೂ ಉದ್ಯೋಗ ಸೃಷ್ಟಿಗೆ ಅನುಕೂಲವಾಗಲಿದೆ. ಈ ಭಾಗದ ವಿವಿಧ ಕ್ಷೇತ್ರಗಳ ತಜ್ಞರನ್ನು ಭೇಟಿ ಮಾಡಲಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಚರ್ಚೆ ನಡೆಸಲಾಗುತ್ತದೆ ಎಂದು ಅವರು ಹೇಳಿದರು.
ಪ್ರವಾಸೋದ್ಯಮ ಇಲಾಖೆಯ ಆಯುಕ್ತ ಪಂಕಜ್ ಕುಮಾರ ಪಾಂಡೆ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಸಿಂಧು ರೂಪೇಶ್, ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ ವ್ಯವಸ್ಥಾಪಕ ಕುಮಾರ ಪುಷ್ಕರ್, ಕೆ.ಎಸ್.ಟಿ.ಡಿ.ಸಿ. ಎಂ.ಡಿ ವಿಜಯ ಶರ್ಮಾ, ಹೊಸಪೇಟೆ ಉಪ ವಿಭಾಗಾಧಿಕಾರಿ ಸಿದ್ದರಾಮೇಶ್ವರ, ಕೊಪ್ಪಳ ಉಪ ವಿಭಾಗಾಧಿಕಾರಿ ನಾರಾಯಣ ರೆಡ್ಡಿ ಕನಕರೆಡ್ಡಿ, ಪ್ರವಾಸೋದ್ಯಮ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಪ್ರಶಾಂತ ಬಾರಿಗಿಡದ ಮುಂತಾದವರು ಈ ವೇಳೆ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.