ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಮುಂಗಾರಿನ ಸವಾಲಿಗೆ ಸಜ್ಜಾಗಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ, ಮಳೆ ಕೊರತೆ
Published 3 ಜೂನ್ 2023, 13:49 IST
Last Updated 3 ಜೂನ್ 2023, 13:49 IST
ಅಕ್ಷರ ಗಾತ್ರ

ಕೊಪ್ಪಳ: ಮುಂಗಾರು ಹಂಗಾಮು ಆರಂಭವಾಗುತ್ತಿದ್ದು, ಮಳೆಯ ಸವಾಲು, ಕೃಷಿ ಚಟುವಟಿಕೆಗೆ ಸಕಾಲದಲ್ಲಿ ಬಿತ್ತನೆ ಬೀಜಗಳ ಪೂರೈಕೆ ಸೇರಿ ಈ ಅವಧಿಯ ಸವಾಲುಗಳನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿದ ಅವರು ‘ಮುಂಗಾರಿನಲ್ಲಿ ಮುಖ್ಯವಾಗಿ ಬೆಳೆಯಲಾಗುವ ಹಾಗೂ ರೈತರಿಗೆ ಅಗತ್ಯವಾಗಿ ಬೇಕಾಗುವ ಬೆಳೆಗಳ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಕೃಷಿ ಅಧಿಕಾರಿಗಳು ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳು ಹಾಗೂ ಬಿತ್ತನೆ ಬೀಜ ವಿತರಣಾ ಕೇಂದ್ರಗಳಿಗೆ ಭೇಟಿ ನೀಡಿ ತ್ವರಿತ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಕೃಷಿ ಹಾಗು ತೋಟಗಾರಿಕಾ ಬೆಳೆ ಹಾನಿಗೆ ಕಾಲಮಿತಿಯೊಳಗೆ ಪರಿಹಾರ ವಿತರಣೆಗೆ ಕ್ರಮ ವಹಿಸಬೇಕು. ಪ್ರಕೃತಿ ವಿಕೋಪದಿಂದ ಜಾನುವಾರು ಪ್ರಾಣಹಾನಿಯ ಪ್ರಕರಣಗಳಿಗೆ ಪರಿಹಾರ ವಿತರಣೆಗೆ ಕ್ರಮ ವಹಿಸಬೇಕು. ಜಾನುವಾರುಗಳಿಗೆ ವಿತರಿಸಲು ಸಾಕಾಗುವಷ್ಟು ಮೇವಿನ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕು. ಮಳೆ ಗಾಳಿಗೆ ವಿದ್ಯುತ್ ಕಂಬಗಳು ಬಾಗಿ, ವಿದ್ಯುತ್ ತಂತಿಗಳು ಹಾಳಾದಲ್ಲಿ ಅಂತಹ ಕಡೆಗೆ ಬದಲಿ ವ್ಯವಸ್ಥೆ ತುರ್ತಾಗಿ ಮಾಡಿ ಜನರಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

ಪರಿಹಾರ ವಿತರಣೆಗೆ ಕ್ರಮ: ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಮಾತನಾಡಿ,‘2023-24ನೇ ಸಾಲಿನ ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಜೀವಹಾನಿಯ 7 ಪ್ರಕರಣಗಳಿಗೆ ಒಟ್ಟು ₹35 ಲಕ್ಷ, 28 ಜಾನುವಾರು ಪ್ರಾಣಹಾನಿ ಪ್ರಕರಣಗಳಿಗೆ ₹6,14 ಲಕ್ಷ ಮತ್ತು 47 ಮನೆಗಳಿಗೆ ಹಾನಿಯಾಗಿದ್ದು ₹11.10 ಲಕ್ಷ ಪರಿಹಾರ ಒದಗಿಸಲಾಗಿದೆ’ ಎಂದರು.

ಬೀಜ ವಿತರಣೆಗೆ ಕ್ರಮ: ಒಟ್ಟಾರೆ ಜಿಲ್ಲೆಯಲ್ಲಿ ವಾಡಿಕೆ ಮಳೆ ಇದುವರೆಗೆ 7.9 ಸೆಂ.ಮೀ. ಇದ್ದು 6.7 ಸೆಂ.ಮೀ. ಆಗಿದ್ದು, ಶೇ. 15ರಷ್ಟು ಕೊರತೆಯಾಗಿದೆ. ರೈತರು ಆತಂಕಕ್ಕೆ ಒಳಗಾಗದ ಹಾಗೆ ಬಿತ್ತನೆ ಬೀಜಗಳ ವಿತರಣೆಗೆ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೃಷಿ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್. ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಉಪ ವಿಭಾಗಾಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯಾರಾಣಿ ಕೆ.ವಿ., ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.

ಮುಂಗಾರು ಪೂರ್ವದಲ್ಲಿ ನಡೆದ ಜೀವಹಾನಿಗಳಿಗೆ ಪರಿಹಾರ ವಿತರಣೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ವಹಿಸಲು ಸೂಚನೆ ಬಿತ್ತನೆ ಬೀಜ ಪೂರೈಕೆಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲು ನಿರ್ದೇಶನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT