ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸೋಲಿಸುವುದೇ ನಮ್ಮ ಗುರಿ: ನಾಡಗೌಡ

ಜೆಡಿಎಸ್-ಕಾಂಗ್ರೆಸ್ ಮುಖಂಡರ ಜಂಟಿ ಪತ್ರಿಕಾಗೋಷ್ಠಿ
Last Updated 30 ಏಪ್ರಿಲ್ 2019, 17:27 IST
ಅಕ್ಷರ ಗಾತ್ರ

ಕೊಪ್ಪಳ: ರಾಜ್ಯ ಮತ್ತು ದೇಶದಲ್ಲಿ ಕೋಮುವಾದಿಯನ್ನು ಬಿಜೆಪಿ ಸೋಲಿಸುವುದೇ ನಮ್ಮ ಗುರಿಯಾಗಿದೆ ಎಂದು ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.

ಸೋಮವಾರ ಇಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷದೊಂದಿಗೆ ಮೃತ್ರಿ ಮಾಡಿಕೊಳ್ಳಲಾಗಿದೆ. ರಾಷ್ಟ್ರೀಯ ನಾಯಕರ ಒಮ್ಮತದಿಂದ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದೆ. ಕಾರ್ಯಕರ್ತರಲ್ಲಿ ಸಣ್ಣಪುಟ್ಟ ಗೊಂದಲಗಳು ಇದ್ದು ಶೀಘ್ರ ಬಗೆಹರಿಸಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಐಟಿ ದಾಳಿ ರಾಜಕೀಯ ಪ್ರೇರಿತ: ರಾಜ್ಯದಲ್ಲಿ ನಡೆದಿರುವ ಐಟಿ ದಾಳಿ ಇದೊಂದು ರಾಜಕೀಯ ಪ್ರೇರಿತ ಹಾಗೂ ದುರುದ್ದೇಶದಿಂದ ಕೂಡಿದೆ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಸೋಲಿನ ಭೀತಿಯಿಂದ ಬಿಜೆಪಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರನ್ನು ಗುರಿಯನ್ನಾಗಿಸಿಕೊಂಡು ಐಟಿ ದಾಳಿ ಮಾಡಿಸುತ್ತಿದ್ದಾರೆಎಂದು ದೂರಿದರು. ಇದರಿಂದ ಏನೂ ಆಗದು, ಯಾವ ಬೆದರಿಕೆಗೆ ನಾವು ಜಗ್ಗುವುದಿಲ್ಲ, ಜನರ ತೀರ್ಮಾನವೇ ಅಂತಿಮಎಂದು ಹೇಳಿದರು.

ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್-ಜೆಡಿಎಸ್ ಮುಖಂಡರು ಜೈಲಿಗೆ ಹೋಗುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳುತ್ತಾರೆ.ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿ ಎಂಬಂತೆ ಅವರಿಗೆ ಎಲ್ಲರೂ ಜೈಲಿನಲ್ಲಿಯೇ ಇದ್ದ ಹಾಗೆ ಕಾಣಿಸುತ್ತದೆ ಎಂದು ಲೇವಡಿ ಮಾಡಿದರು.

ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ಇಲ್ಲ: ಈಶ್ವರಪ್ಪನವರ ಎಲ್ಲ ಹೇಳಿಕೆಗಳಿಗೆ ಉತ್ತರ ನೀಡುವುದಕ್ಕೆ ಆಗುವುದಿಲ್ಲ. ನಮ್ಮ ಮೈತ್ರಿ ಸರ್ಕಾರ ಒಗ್ಗಟ್ಟಾಗಿ ಚರ್ಚೆ ಮಾಡಿ ಕೆಲಸ ಮಾಡುತ್ತಿದ್ದೇವೆ. ಎಲ್ಲ ಜಿಲ್ಲೆಗಳಿಗೆ ಅನುಕೂಲವಾಗುವಂತ ಯೋಜನೆಗಳನ್ನು ಕುಮಾರಸ್ವಾಮಿ ಯಾವುದೇ ತಾರತಮ್ಯ ಮಾಡದೇ ಈ ಭಾಗಕ್ಕೂ ಹೆಚ್ಚು ಅನುದಾನ ನೀಡಿದ್ದಾರೆ. ಇನ್ನು ಹೆಚ್ಚಿನ ಅನುದಾನವನ್ನು ಕೇಳಿದ್ದೇವೆ ಅಂತ ತಿಳಿಸಿದರು.

ಅಭ್ಯರ್ಥಿ ರಾಜಶೇಖರ ಹಿಟ್ನಾಳ ಮಾತನಾಡಿ, ಒಮ್ಮತ ಅಭ್ಯರ್ಥಿಯಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, ನಮ್ಮ ಗೆಲುವು ಶತಃಸಿದ್ಧ ಎಂದು ಭರವಸೆ ವ್ಯಕ್ತಪಡಿಸಿದರು.

ಹಿಂದಿನ ಕಾಂಗ್ರೆಸ್ ಸರ್ಕಾರ ಮತ್ತು ಈಗಿನ ಸಮ್ಮಿಶ್ರ ಸರ್ಕಾರದ ಸಾಧನೆಗಳೇ ನಮ್ಮ ಗೆಲುವಿಗೆ ಮಾನದಂಡವಾಗಲಿದೆ. ವ್ಯಾಪಕವಾಗಿ ಪ್ರಚಾರ ಹಮ್ಮಿಕೊಂಡಿದ್ದು, ನಮ್ಮ ಪರ ಒಲುವು ಇದೆ ಎಂದು ಹೇಳಿಕೊಂಡರು.

ಶಾಸಕ, ಸಂಸದೀಯ ಕಾರ್ಯದರ್ಶಿ ಕೆ.ರಾಘವೇಂದ್ರ ಹಿಟ್ನಾಳ ಮಾತನಾಡಿದರು.ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ,ಕೆಪಿಸಿಸಿ ವೀಕ್ಷಕ ಚಂದ್ರಶೇಖರ್ ಭಟ್, ಜೆಡಿಎಸ್ ಜಿಲ್ಲಾಘಟಕದ ಅಧ್ಯಕ್ಷ ಅಮರೇಗೌಡ ಪಾಟೀಲ, ಕಾರ್ಯಾಧ್ಯಕ್ಷ ವೀರೇಶ ಮಹಾಂತಯ್ಯನಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT