ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಿ, ಮಕ್ಕಳ ಪೌಷ್ಠಿಕತೆ ಹೆಚ್ಚಳಕ್ಕೆ ಆದ್ಯತೆ

100 ಹಾಸಿಗೆಗಳ ಆಸ್ಪತ್ರೆ ಉದ್ಘಾಟಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ
Last Updated 2 ಆಗಸ್ಟ್ 2022, 1:55 IST
ಅಕ್ಷರ ಗಾತ್ರ

ಕೊಪ್ಪಳ: ‘ದೇಶದ ಸಮಗ್ರ ಅಭಿವೃದ್ಧಿಗೆ ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳ ಸಮೃದ್ಧ ಆರೋಗ್ಯ ಪೂರಕವಾಗಿದ್ದು, ಅವರಿಗೆ ಪೌಷ್ಠಿಕತೆ ಒದಗಿಸಲು ಸರ್ಕಾರ ಆದ್ಯತೆ ನೀಡುತ್ತಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿ ನಗರದಲ್ಲಿ ನಿರ್ಮಿಸಲಾದ ತಾಯಿ ಮತ್ತು ಮಕ್ಕಳ 100 ಹಾಸಿಗೆಗಳ ಆಸ್ಪತ್ರೆ, ಗಂಗಾವತಿ, ಕುಷ್ಟಗಿ ತಾಲ್ಲೂಕು ಆಸ್ಪತ್ರೆಗಳ ಐ.ಸಿ.ಯು. ಘಟಕಗಳು, ಕುಷ್ಟಗಿ ತಾಲ್ಲೂಕಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಹನುಮಸಾಗರದ ಆಸ್ಪತ್ರೆ ಕಟ್ಟಡಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

‘ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅಗತ್ಯ ವೈದ್ಯಕೀಯ ಸಿಬ್ಬಂದಿ, ಸಲಕರಣೆಗಳನ್ನು ಒದಗಿಸಲಾಗುವುದು. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಕೆಲ ಜಿಲ್ಲೆಗಳಲ್ಲಿ ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸಲು ಔಷಧ ಕೊಡಲಾಗುತ್ತಿದೆ’ ಎಂದರು.

‘ಜಿಲ್ಲೆಯಲ್ಲಿ ಏತ ನೀರಾವರಿ ಯೋಜನೆ ಮೂಲಕ ಯಲಬುರ್ಗಾ, ಕುಷ್ಟಗಿ ತಾಲ್ಲೂಕುಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಇನ್ನಷ್ಟು ಹಣ ಕೊಡುವೆ. ಸಚಿವ ಹಾಲಪ್ಪ ಅವರು ಮುಂದೆ ನಿಂತು ಕೆಲಸ ಮಾಡಿಸಬೇಕು’ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ ಮಾತನಾಡಿ ‘ರಾಜ್ಯದಲ್ಲಿ ಒಟ್ಟು 100 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸಲು ಅಗತ್ಯ ಸೌಲಭ್ಯ ಒದಗಿಸಲಾಗುವುದು’ ಎಂದು ಹೇಳಿದರು.

ಸಚಿವ ಹಾಲಪ್ಪ ಆಚಾರ್‌ ‘ಯಲಬುರ್ಗಾ, ಕುಷ್ಟಗಿ ತಾಲ್ಲೂಕುಗಳಿಗೆ ನಿರಂತರ ನೀರು ಪೂರೈಕೆಗೆ ಕೃಷ್ಣಾ ನದಿಯಿಂದ ನೀರು ಪಡೆಯಲು ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಗ್ರಾಮೀಣ ಕಿರು ಉದ್ದಿಮೆಗಳ ಸ್ಥಾಪನೆಗೆ ಅಗತ್ಯ ಸಾಲ ಸೌಲಭ್ಯ ಒದಗಿಸುವುದರ ಮೂಲಕ ಗ್ರಾಮೀಣರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಘವೇಂದ್ರ ಹಿಟ್ನಾಳ ‘ಜಿಲ್ಲೆಯ ಏತ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಮುಗಿಸಬೇಕು. ಈಗ ಉದ್ಘಾಟನೆಗೊಂಡ ಆಸ್ಪತ್ರೆಗೆ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ₹20 ಕೋಟಿ ನೀಡಿದ್ದರು’ ಎಂದು ನೆನಪಿಸಿಕೊಂಡರು.

ಸಚಿವರಾದ ಸಿ.ಸಿ.ಪಾಟೀಲ್, ಬೈರತಿ ಬಸವರಾಜ, ಸುಧಾಕರ, ಶಾಸಕರಾದ ಅಮರೇಗೌಡ ಬಯ್ಯಾಪೂರ, ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಶರಣಗೌಡ ಬಯ್ಯಾಪೂರ, ಹೇಮಲತಾ ನಾಯಕ, ಕಾಡಾ ಅಧ್ಯಕ್ಷ ಕೆ.ಶೇಷಗಿರಿ ರಾವ್, ನಗರಸಭೆ ಅಧ್ಯಕ್ಷೆ ಶಿವಗಂಗಾ ಭೂಮಕ್ಕನವರ್, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಾಹಾಂತೇಶ ಎಸ್. ಪಾಟೀಲ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ರಶ್ಮಿ ಮಹೇಶ, ಜಿಲ್ಲಾಧಿಕಾರಿ ಎಂ ಸುಂದರೇಶ ಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಜಿಲ್ಲಾ ಪಂಚಾಯ್ತಿ ಸಿಇಒ ಫೌಜಿಯಾ ತರನ್ನುಮ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

‘ವಿಮಾನ ನಿಲ್ದಾಣಕ್ಕೆ ₹50 ಕೋಟಿ’

ಕೊಪ್ಪಳ: ಸಂಸದ ಸಂಗಣ್ಣ ಕರಡಿ ಮಾತನಾಡಿ ‘ಜಿಲ್ಲೆಗೆ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ₹50 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದೆ. ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಆರಂಭವಾಗಲಿದ್ದು, ಈ ಮೂಲಕ ಜಿಲ್ಲೆಯ ಜನರ ಬಹುದಿನದ ಕನಸು ನನಸಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT