ಶುಕ್ರವಾರ, ಆಗಸ್ಟ್ 6, 2021
22 °C
ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ತೊಗರಿ ಕಿರು ಚೀಲ ವಿತರಣೆ: ಪ್ರಚಾರ ವಾಹನಗಳಿಗೆ ಚಾಲನೆ

ಕೊಪ್ಪಳ ಜಿಲ್ಲೆಯಲ್ಲಿ ಮಿಶ್ರ ಬೆಳೆ ಬೆಳೆಯಲು ಉತ್ತೇಜನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ‘ಜಿಲ್ಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ರೈತರಿಗೆ 22,500 ತೊಗರಿ ಕೀರು ಚೀಲಗಳನ್ನು ಉಚಿತವಾಗಿ ವಿತರಿಸಲಾಗುತ್ತಿದ್ದು, 9 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮಿಶ್ರ ಬೆಳೆ ಬೆಳೆಯಲು ಉತ್ತೇಜನ ನೀಡಲಾಗುತ್ತಿದೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತೊಗರಿ ಬೀಜದ ಕಿರುಚೀಲಗಳ ವಿತರಣೆ, ಕೃಷಿ ಅಭಿಯಾನ ಹಾಗೂ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಪ್ರಚಾರ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಫಸಲ್ ಬಿಮಾ ಯೋಜನೆ ಜಾರಿಯಲ್ಲಿದ್ದು, ಮಳೆಯಾಶ್ರಿತ ಮತ್ತು ಹತ್ತಿ ನೀರಾವರಿ ಬೆಳೆಗಳಿಗೆ ಜು.15 ಬೆಳೆ ವಿಮೆಗೆ ನೋಂದಾಯಿಸಲು ಕೊನೆಯ ದಿನವಾಗಿದೆ. ಉಳಿದೆಲ್ಲಾ ಅಧಿಸೂಚಿತ ಬೆಳೆಗಳಿಗೆ ವಿಮೆ ನೋಂದಾಯಿಸಲು ಜು.31 ಕೊನೆಯ ದಿನವಾಗಿದೆ. ಎಲ್ಲ ರೈತರು ತಮ್ಮ ಉತ್ಪನ್ನವನ್ನು ವಿಮೆ ಅಡಿ ನೋಂದಾಯಿಸಿಕೊಂಡು, ವಿಕೋಪ ಸಂಭವಿಸಿ ಬೆಳೆ ಹಾಳಾದಾಗ ಪರಿಹಾರ ಪಡೆಯಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮವು ಈಗಾಗಲೇ ಎಲ್ಲ ತಾಲ್ಲೂಕುಗಳಲ್ಲಿ ಚಾಲನೆಗೊಂಡಿದ್ದು, ಕೃಷಿ ಸಂಜೀವಿನಿ ವಾಹನಗಳ ಮೂಲಕ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಕೃಷಿಗೆ ಸಂಬಂಧಿಸಿದ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತಿ ಹಳ್ಳಿಗಳಿಗೆ ಭೇಟಿ ನೀಡಿ ಕೃಷಿ ಸಂಬಂಧಿತ ಯೋಜನೆಗಳ ತಾಂತ್ರಿಕ ಮಾಹಿತಿ, ಸವಲತ್ತುಗಳು, ಬೆಳೆ ವಿಮೆ ಮಾಹಿತಿ ನೀಡಲಾಗುತ್ತಿದೆ. ಕೃಷಿ ಇಲಾಖೆ ಮತ್ತು ಇತರೆ ಇಲಾಖೆಯ ಯೋಜನೆಗಳ ಸವಲತ್ತುಗಳನ್ನು ರೈತರಿಗೆ ಮನವರಿಕೆ ಮಾಡಿ, ಕೃಷಿ ವಿಜ್ಞಾನಿಗಳೊಂದಿಗೆ ನೇರ ಸಂವಾದ ಕಾರ್ಯಕ್ರಮ ಏರ್ಪಡಿಸಿ ರೈತರ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಅಮರೇಗೌಡ ಬಯ್ಯಾಪುರ, ಹಾಲಪ್ಪ ಆಚಾರ್, ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯಿತಿ ಸಿಇಒ ರಘುನಂದನ್ ಮೂರ್ತಿ, ಎಸ್‌ಪಿ ಟಿ.ಶ್ರೀಧರ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು