ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ | ಅತಿಥಿ ಉಪನ್ಯಾಸಕರ ಪ್ರತಿಭಟನೆ

ಶಿಕ್ಷಣ ಸಚಿವ ಬಿ.ಸಿ.ನಾಗೇಶ ಪ್ರತಿಕೃತಿ ದಹಿಸಿ ಆಕ್ರೋಶ
Last Updated 6 ಜನವರಿ 2022, 10:52 IST
ಅಕ್ಷರ ಗಾತ್ರ
ಕುಷ್ಟಗಿ: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರವನ್ನು ಒತ್ತಾಯಿಸಲು ಅತಿಥಿ ಉಪನ್ಯಾಸಕರ ಒಕ್ಕೂಟದ ವತಿಯಿಂದ ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಉಪನ್ಯಾಸಕರು ಬಸವೇಶ್ವರ ವೃತ್ತದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರ ಭಾವಚಿತ್ರವನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕುಷ್ಟಗಿ, ಯಲಬುರ್ಗಾ ತಾಲ್ಲೂಕುಗಳ ಅನೇಕ ಕಾಲೇಜುಗಳ ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು. ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ಮುಖ್ಯಮಂತ್ರಿಗೆ ಬರೆದ ಮನವಿಯನ್ನು ತಹಶೀಲ್ದಾರ್‌ ಮೂಲಕ ಸಲ್ಲಿಸಲಾಯಿತು.

ಪ್ರಾರಂಭದಲ್ಲಿ ಕಾರ್ಗಿಲ್‌ ಯೋಧ ಮಲ್ಲಯ್ಯ ವೃತ್ತದಲ್ಲಿ ಪ್ರತಿಭಟನೆಗೆ ಚಾಲನೆ ನೀಡಿ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಮದ್ದಾನೇಶ್ವರ ಮಠದ ಕರಿಬಸವ ಸ್ವಾಮೀಜಿ, ಸರ್ಕಾರ ಉಪನ್ಯಾಸಕರ ಸಮಸ್ಯೆಗೆ ಸ್ಪಂದಿಸುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಹಾಳಾಗದಂತೆ ನೋಡಿಕೊಳ್ಳುವಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕುಟದ ಪ್ರಮುಖರು, ರಾಜ್ಯದಲ್ಲಿ ಸುಮಾರು 15,000ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು ಯುಜಿಸಿ ನಿಯಮಗಳ ಪ್ರಕಾರ ಅಗತ್ಯ ವಿದ್ಯಾರ್ಹತೆ ಹೊಂದಿದ್ದು ದಶಕದಿಂದಲೂ ಅತಿ ಕಡಿಮೆ ಗೌರವಧನದಲ್ಲಿ ಕೆಲಸ ಮಾಡುತ್ತ ಬಂದಿದ್ದೇವೆ. ವಿವಿಧ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಕಾಯಂಗೊಳಿಸಲಾಗಿದೆ. ಅಂಥ ಕ್ರಮಕ್ಕೆ ಕರ್ನಾಟಕ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಅತಿಥಿ ಉಪನ್ಯಾಸಕರ ಒಕ್ಕೂಟದ ಪ್ರಮುಖರಾದ ಶಂಕರ ಕರಪಡಿ, ಶಂಕರಪ್ಪ ಶಿಡ್ಲಭಾವಿ, ಯಮನಪ್ಪ ಮೇಗೂರು, ಯಲಬುರ್ಗಾ ತಾಲ್ಲೂಕಿನ ಉಮಾಶಂಕರ ಹಿರೇಮಠ, ಶೇಖರಪ್ಪ ಕುಂಬಾರ, ಶರಣಪ್ಪ ಚಲುವಾದಿ ಸೇರಿದಂತೆ ಹಿರೇವಂಕಲಕುಂಟಾ, ತಾವರಗೇರಾ, ಹನುಮಸಾಗರ ಭಾಗದ ಅತಿಥಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕರವೇ ಜಿಲ್ಲಾ ಯುವ ಘಟಕ ಅಧ್ಯಕ್ಷರು ಮಾರುತಿ ಡಿ ಭೋವಿ ಇತರೆ ಸಂಘಟನೆಗಳು ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT