ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ದೊಡ್ಡ ಪ್ರಜಾಪ್ರಭುತ್ವ ದೇಶ: ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್‌

ಕೊಪ್ಪಳ: 71ನೇ ಗಣರಾಜ್ಯೋತ್ಸವ ಕಾರ್ಯಕ್ರಮ
Last Updated 27 ಜನವರಿ 2020, 11:20 IST
ಅಕ್ಷರ ಗಾತ್ರ

ಕೊಪ್ಪಳ: ‘ಭಾರತ ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶ’ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಹೇಳಿದರು.

ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ 71ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಅನೇಕ ಮಹನೀಯರು ತ್ಯಾಗ, ಬಲಿದಾನ ಮಾಡಿದರು ಎಂದು ಹೇಳಿದರು.

ಭಾರತದ ಆಡಳಿತಕ್ಕೆ ಸಂವಿಧಾನ ಕೈಗನ್ನಡಿ. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಅವಿರತವಾಗಿ ಶ್ರಮಿಸಿದರ ಫಲವಾಗಿ ಸಂವಿಧಾನ ಜಾರಿಗೆ ಬಂದಿತು. ಈ ದಿನವನ್ನು ನಾವು ಗಣರಾಜ್ಯ ದಿನವನ್ನಾಗಿ ಆಚರಿಸುತ್ತಿದ್ದೇವೆ
ಎಂದರು.

ನಮ್ಮ ದೇಶವನ್ನು ಸರ್ವ ಸ್ವತಂತ್ರ ಸಮಾಜವಾದಿ, ಜಾತ್ಯಾತೀತ ಗಣರಾಜ್ಯವನ್ನಾಗಿ ರೂಪಿಸುವುದಾಗಿ ಘೋಷಿಸಿದ್ದೇವೆ. ಇದಕ್ಕೆ ಪೂರಕವಾಗಿ ಸ್ವಾತಂತ್ರ್ಯ, ಸಮಾನತೆ ಹಾಗೂ ನ್ಯಾಯವನ್ನು ರಕ್ಷಿಸುವುದಾಗಿ ಸಂವಿಧಾನದ ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.

ಸಂವಿಧಾನ 448 ವಿಧಿಗಳು, 12 ಪರಿಚ್ಛೇದಗಳು, 103 ಕ್ಕೂ ಹೆಚ್ಚು ತಿದ್ದುಪಡಿಗಳನ್ನು ಒಳಗೊಂಡಿದೆ. ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳು ರಾಷ್ಟ್ರದ ಪ್ರತಿಯೊಬ್ಬ ಪ್ರಜೆಗೆ ಸಂರಕ್ಷಣೆ ನೀಡಿದೆ. ನಮ್ಮ ಸಂವಿಧಾನ ಸಂಸದೀಯ ಮಾದರಿಯದ್ದಾಗಿದೆ. ಪ್ರತಿಯೊಂದು ಕಾನೂನನ್ನು ಪ್ರಜಾಸತ್ತಾತ್ಮಕವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸತ್ತಿನ ಮೂಲಕವೇ ಎಲ್ಲ ಶಾಸನಗಳನ್ನು ರೂಪಿಸುವ ಜನತಾಂತ್ರಿಕ ವ್ಯವಸ್ಥೆ ನಮ್ಮದಾಗಿದೆ ಎಂದರು.

ನಮ್ಮ ಹಿರಿಯರು ತ್ಯಾಗ ಬಲಿದಾನಗಳಿಂದ ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಮತ್ತು ಪವಿತ್ರ ಸಂವಿಧಾನವನ್ನು ಕಾಪಾಡಿ
ಕೊಳ್ಳಬೇಕಾದ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ರಾಷ್ಟ್ರೀಯ ಭಾವೈಕ್ಯತೆ, ಸಹಬಾಳ್ವೆ ಮತ್ತು ಸೌಹಾರ್ದತೆ ನಮ್ಮೆಲ್ಲರ ಉಸಿರಾಗಬೇಕಿದೆ. ನಮ್ಮ ದೇಶದ ಜನಸಂಖ್ಯೆಯಲ್ಲಿ ಯುವಕರ ಪಾಲು ಹೆಚ್ಚಾಗಿದೆ. ಈ ಅಪಾರ ಯುವಶಕ್ತಿಯ ಸದ್ಬಳಕೆಗಾಗಿ ಇಂದು ಅವಕಾಶಗಳನ್ನು ಒದಗಿಸುವುದು ಅಗತ್ಯವಾಗಿದೆ. ಯುವಜನಾಂಗ ತಮ್ಮ ಹೊಣೆ ಅರಿತು ದುಶ್ಚಟಗಳಿಗೆ ಬಲಿಯಾಗದೆ, ದುಡಿಮೆಯಲ್ಲಿ ನಿರತರಾಗಬೇಕಿದೆ ಎಂದು ಕರೆ ನೀಡಿದರು.

ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ನಾವೆಲ್ಲರೂ ಕೂಡಿ ಬಾಳೋಣ. ಅದೇ ರೀತಿ ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಇಲ್ಲಿ ಹಿಂದೂ, ಕ್ರೈಸ್ತ, ಮುಸಲ್ಮಾನ, ಪಾರಸಿಕ, ಜೈನರು ಸೇರಿದಂತೆ ಎಲ್ಲ ಧರ್ಮ, ಜಾತಿ ಜನಾಂಗದವರು ಸಹೋದರರಂತೆ ಬಾಳುತ್ತಿದ್ದೇವೆ. ಈ ಮೂಲಕ ವಿವಿಧತೆಯಲ್ಲಿ ಏಕತೆಯನ್ನು ಇಡೀ ವಿಶ್ವಕ್ಕೆ ಸಾರಿದ ದೇಶ ನಮ್ಮದಾಗಿದೆ. ಈ ಆಶಯವನ್ನು ಎಲ್ಲರೂ ಸೇರಿ ಮುನ್ನಡೆಸೋಣ ಎಂದು ಕರೆ ನೀಡಿದರು.

ಶಾಸಕ ಕೆ.ರಾಘವೇಂದ್ರ ಹಿಟ್ನಾಳ್‌ ಅಧ್ಯಕ್ಷತೆ ವಹಿಸಿದ್ದರು.

ಸಂಸದ ಕರಡಿ ಸಂಗಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಉಪ ವಿಭಾಗಾಧಿಕಾರಿ ಸಿ.ಡಿ.ಗೀತಾ, ತಹಶೀಲ್ದಾರ್ ಜೆ.ಬಿ.ಮಜ್ಜಿಗಿ
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT