ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕೆ ಕುರಿತು ಜಾಗೃತಿ ಮೂಡಿಸಿ

ಸ್ಕೌಟ್ಸ್-– ಗೈಡ್ಸ್ ಜಿಲ್ಲಾ ಸಂಸ್ಥೆಯ ಕೌನ್ಸಿಲ್ ಮಹಾಸಭೆಯಲ್ಲಿ ಜಿಲ್ಲಾಧಿಕಾರಿ ವಿಕಾಸ್ ಸುರಳ್ಕರ್ ಸಲಹೆ
Last Updated 14 ಸೆಪ್ಟೆಂಬರ್ 2021, 7:16 IST
ಅಕ್ಷರ ಗಾತ್ರ

ಕೊಪ್ಪಳ: ಕೋವಿಡ್ ಲಸಿಕೆ ಪಡೆಯಲು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿನ ಜನರು ಹಿಂದೇಟು ಹಾಕುತ್ತಿದ್ದು, ಅವರ ಆರೋಗ್ಯದ ಹಿತದೃಷ್ಟಿಯಿಂದ ಲಸಿಕೆ ಪಡೆಯುವುದು ಎಷ್ಟು ಮುಖ್ಯ ಎಂಬುದರ ಕುರಿತು ಅಂತಹ ಗ್ರಾಮಗಳಲ್ಲಿನ ಸಾರ್ವಜನಿಕರಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಅಧ್ಯಕ್ಷ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ 2021-22ನೇ ಸಾಲಿನ ಜಿಲ್ಲಾ ಕೌನ್ಸಿಲ್ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡಲು ವಿಶೇಷ ಅಭಿಯಾನ, ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆದಾಗ್ಯೂ ಸಾರ್ವಜನಿಕರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಮುಖ್ಯವಾಗಿ ಕೆಲವು ಗ್ರಾಮಗಳಲ್ಲಿ ಗ್ರಾಮಸ್ಥರು ಲಸಿಕೆ ಪಡೆಯಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಂತಹ ಗ್ರಾಮಗಳನ್ನು ಗುರುತಿಸಿ ಸ್ಕೌಟ್ಸ್ ಮತ್ತು ಗೈಡ್ಸ್ ತಂಡದಿಂದ ಅಲ್ಲಿನ ಜನರಿಗೆ ಲಸಿಕೆ ಬಗ್ಗೆ ಜಾಗೃತಿ ಮೂಡಿಸಿ, ಲಸಿಕೆ ಪಡೆಯುವಂತೆ ಮನವೊಲಿಸಬೇಕು ಎಂದು ತಿಳಿಸಿದರು.

ಕೋವಿಡ್ 1ನೇ ಮತ್ತು 2ನೇ ಅಲೆಯ ಸಂದರ್ಭದಲ್ಲಿ ಕೋವಿಡ್ ಪರೀಕ್ಷೆಗೆ ಮಾಡಿಸಲು ಹಾಗೂ ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಮುಂತಾದ ಆರೋಗ್ಯಕ್ಕೆ ಪೂರಕವಾದ ಮಾಹಿತಿಗಳನ್ನು ಸಾರ್ವಜನಿಕರಿಗೆ ನೀಡುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ತಂಡ ಉತ್ತಮ ಕಾರ್ಯ ನಿರ್ವಹಿಸಿದೆ. ಅದರಂತೆ ಲಸಿಕೆ ಕುರಿತು ಜಾಗೃತಿ ಮೂಡಿಸಲು ಸಹ ಕ್ರಿಯಾತ್ಮಕ ಯೋಜನೆಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಸಂಸ್ಥೆಗೆ ಹಂಚಿಕೆ ಮಾಡಿರುವ ನಿವೇಶನದಲ್ಲಿ ಈಗಾಗಲೇ ತರಬೇತಿ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಅದರ ಉದ್ಘಾಟನೆಗೆ ದಿನಾಂಕ ನಿಗದಿಪಡಿಸಿ ಶೀಘ್ರದಲ್ಲಿಯೇ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಿ. ಕಟ್ಟಡಕ್ಕೆ ಬೇಕಾದ ಅಗತ್ಯ ಮೂಲಸೌಕರ್ಯಗಳು, ಹೆಚ್ಚಿನ ಸ್ಥಳಾವಕಾಶ ಮುಂತಾದವುಗಳ ಬಗ್ಗೆ ಸೂಕ್ತ ಕಾರಣಗಳೊಂದಿಗೆ ವಿವರವಾದ ಮಾಹಿತಿಯನ್ನು ನೀಡಿ. ಮಾಹಿತಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ನಗರದ ಶಾಸಕರ ಮಾದರಿ ಶಾಲಾ ಕಟ್ಟಡದಲ್ಲಿ ಜಿಲ್ಲಾ ಸಂಸ್ಥೆಯ ಕಚೇರಿಗೆ ಮೀಸಲಿರಿಸಿದ್ದ ಕೊಠಡಿಯನ್ನು ತಾಂತ್ರಿಕ ಕಾರಣಕ್ಕಾಗಿ ನೆಲಸಮಗೊಳಿಸಿದ್ದು, ಪ್ರಸ್ತುತ ಶಾಲಾ ಕಟ್ಟಡದಲ್ಲಿ ಸುಸ್ಥಿತಿಯಲ್ಲಿರುವ ಶಾಲಾ ಕೊಠಡಿಯನ್ನು ಸಂಸ್ಥೆಯ ಕಚೇರಿ ನಿರ್ವಹಣೆಗೆ ನೀಡಿ ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತರಾದ ಎಚ್.ಎಂ.ಸಿದ್ಧರಾಮಸ್ವಾಮಿ ಮಾತನಾಡಿ, ಜಿಲ್ಲೆಯಾದ್ಯಂತ 600 ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ಘಟಕದಲ್ಲಿ 32 ವಿದ್ಯಾರ್ಥಿಗಳು ಹಾಗೂ ಒಟ್ಟು 1200 ಶಿಕ್ಷಕರು ಸಂಸ್ಥೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ. 300ಕ್ಕೂ ಹೆಚ್ಚು ಶಿಕ್ಷಕರು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಂದರ್ಭದಲ್ಲಿ ಉತ್ತಮ ಕಾರ್ಯ ನಿರ್ವಹಿಸಿ, ಸುಗಮ ಪರೀಕ್ಷೆಗ ಸಹಕರಿಸಿದ್ದಾರೆ ಎಂದರು.

ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಹೇಮಂತ್ ಕುಮಾರ್ ಎನ್.,ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ, ಸಮಿತಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬಳ್ಳೊಳ್ಳಿ, ರಾಘವೇಂದ್ರ ಪಾನಗಂಟಿ, ಜಿಲ್ಲಾ ಸ್ಕೌಟ್ ಆಯುಕ್ತ ಮಲ್ಲಿಕಾರ್ಜುನ್ ಚೌಕಿಮಠ, ಜಿಲ್ಲಾ ಗೈಡ್ ಆಯುಕ್ತ ಅರುಣ ಕುಮಾರಿ ವಸ್ತ್ರದ, ಮಲ್ಲೇಶ್ವರಿ ಜುಜಾರೆ, ಮಾರುತಿ ಆರೇರ್, ಪ್ರಭಾಕರ್ ದಾಸರ, ಶ್ರೀಕಾಂತ ಮಾಸಗಟ್ಟಿ, ದ್ರಾಕ್ಷಾಯಿಣಿ ಕೆ. ಬಂಡಿ, ಗಿರೀಶ್ ಬಿಪಿ, ಮಮತಾ ಕುದರಿಮೋತಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಕಾರ್ಯದರ್ಶಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT