ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ಪೂರ್ಣಗೊಳಿಸಲು ಸೆ 30 ಗಡುವು

ಕುಷ್ಟಗಿ, ಯಲಬುರ್ಗಾ ತಾಲ್ಲೂಕುಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ
Last Updated 15 ಸೆಪ್ಟೆಂಬರ್ 2022, 13:13 IST
ಅಕ್ಷರ ಗಾತ್ರ

ಕೊಪ್ಪಳ: ‘ಜಿಲ್ಲೆಯ ಕುಷ್ಟಗಿ ಹಾಗೂ ಯಲಬುರ್ಗಾ ತಾಲ್ಲೂಕುಗಳಲ್ಲಿ ಬಾಕಿ ಉಳಿದ ಬಹುಗ್ರಾಮ ಕುಡಿಯುವ ನೀರು ಹಾಗೂ ಇತರ ಯೋಜನೆ ಕಾಮಗಾರಿಗಳನ್ನು ಸೆ. 30ರ ಒಳಗೆ ಮುಗಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಬಿ.ಫೌಜಿಯಾ ತರನ್ನುಮ್ ಹೇಳಿದರು.

ನೀರು ಮತ್ತು ನೈರ್ಮಲ್ಯ ಇಲಾಖೆಯ ಅಡಿಯಲ್ಲಿ ಬರುವ ಡಿ.ಬಿ.ಒ.ಟಿ., ಜೆ.ಜೆ.ಎಂ., ಎಂ.ವಿ.ಎಸ್., ಜೆಜೆಎಂ ಕಾಮಗಾರಿಗಳ ಕುರಿತು ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ‘ಡಿ.ಬಿ.ಒ.ಟಿ. ಆಧಾರಿತ ಕುಷ್ಟಗಿ ಹಾಗೂ ಯಲಬುರ್ಗಾ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ 331 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಎಲ್ಲಾ ಗ್ರಾಮಗಳಿಗೆ ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಸರಬರಾಜು ಮಾಡುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಪೂರ್ಣಗೊಳಿಸಲು ಎಲ್‌ ಅಂಡ್ ಟಿ ಸಂಸ್ಥೆಗೆ ಹಿಂದಿನ ಸಭೆಗಳಲ್ಲಿ ಸೂಚಿಸಿದ್ದರೂ ಪ್ರಯೋಜನವಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಎಲ್ಲಾ ಕಾಮಗಾರಿಗಳು ಪೂರ್ಣಗೊಂಡು ಅಕ್ಟೋಬರ್ 2ರಿಂದ ಯೋಜನೆ ಸಾರ್ವಜನಿಕರ ಸೇವೆಗೆ ಸಿಗಬೇಕು.ಸೆ.30ರಒಳಗೆ ಸಂಸ್ಥೆ ಕಾಮಗಾರಿ ಪೂರ್ಣಗೊಳಿಸದೇ ಇದ್ದರೆ ಎಲ್‌ ಅಂಡ್‌ ಟಿ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು’ ಎಂದರು.

‘ಡಿ.ಬಿ.ಒ.ಟಿ ನೀರು ಪೂರೈಕೆ ಆಗಿರುವ ಗ್ರಾಮಗಳಲ್ಲಿ ಒ.ಎಚ್.ಟಿ.ಗಳಿಂದ ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ನೀರು ವಿತರಣೆ ಕೊಳವೆ ಜೋಡಣೆ ಕುರಿತಂತೆ ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನೂ ಪೂರ್ಣಗೊಳಿಸಬೇಕು. ಜೆಜೆಎಂ.ಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಮೀರ್ ಮುಲ್ಲಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕೊಪ್ಪಳ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಎರಡೂ ತಾಲ್ಲೂಕುಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT