ಶುಕ್ರವಾರ, ಆಗಸ್ಟ್ 12, 2022
27 °C
ಎಸ್‌ಒಪಿ ಕಡ್ಡಾಯ

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಹಿರಿಯ ಸಿಬ್ಬಂದಿಗೆ ಪರೀಕ್ಷೆ ಕರ್ತವ್ಯ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ಕೋವಿಡ್ ಹಿನ್ನೆಲೆಯಲ್ಲಿ ಸೆ.21 ರಿಂದ 28 ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳಲ್ಲಿ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್ಒಪಿ) ಪಾಲನೆ ಕಡ್ಡಾಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಕುರಿತಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ರೋಗ ಲಕ್ಷಣಗಳಿರುವ ಮತ್ತು 55 ವರ್ಷ ಮೇಲ್ಪಟ್ಟ ಶಿಕ್ಷಕರನ್ನು, ಸಿಬ್ಬಂದಿಯನ್ನು ಪರೀಕ್ಷಾ ಕರ್ತವ್ಯದಿಂದ ಕೈಬಿಡಬೇಕು. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಬೆಳಿಗ್ಗೆ 8.30 ಗಂಟೆಗೆ ಹಾಜರಿದ್ದು, ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಮತ್ತು ಅಧಿಕಾರಿ, ಸಿಬ್ಬಂದಿಗೆ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಜೇಷನ್ ಮತ್ತು ಮಾಸ್ಕ್ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಬೇರೆ ಊರುಗಳಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳು ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ತಮ್ಮ ಪ್ರವೇಶಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ಈ ಕುರಿತು 
ಸಾರಿಗೆ ಅಧಿಕಾರಿಗಳಿಗೆ ಪತ್ರ ಬರೆದು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗೆ ರೋಗಲಕ್ಷಣಗಳು ಕಂಡುಬಂದಲ್ಲಿ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ
ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು. ಒಂದು ವೇಳೆ ಕೋವಿಡ್ ದೃಢಪಟ್ಟ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಯಸಿದಲ್ಲಿ ಅವರಿಗೆ ಆಯಾ ತಾಲ್ಲೂಕಿನಲ್ಲಿರುವ ಹತ್ತಿರದ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಪರೀಕ್ಷಾ ಕರ್ತವ್ಯದಲ್ಲಿರುವ ಎಲ್ಲ ಅಧಿಕಾರಿ, ಸಿಬ್ಬಂದಿ ಮತ್ತು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯಗಳ ಸ್ವಚ್ಛತೆಗೆ ಆದ್ಯತೆ ನೀಡಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರೀಕ್ಷೆ ವೇಳೆ ಉಂಟಾಗುವ ಗೊಂದಲ ಹಾಗೂ ಅಕ್ರಮಗಳನ್ನು ಇದರಿಂದ ತಡೆಯಬಹುದು. ವಿದ್ಯಾರ್ಥಿಗಳು ಯಾವುದೇ ರೀತಿಯ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗದಂತೆ ಕೊಠಡಿ ಮೇಲ್ವಿಚಾರಕರು ಕ್ರಮ ಕೈಗೊಳ್ಳಬೇಕು. ಎಸ್ಸೆಸ್ಸೆಲ್ಸಿ  ಪರೀಕ್ಷೆಗಳ ಕುರಿತಂತೆ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಂಗಳ ನಿರ್ವಹಣೆ, ಕರೆಗಳ ಸ್ವೀಕಾರಕ್ಕೆ ಕಡ್ಡಾಯವಾಗಿ ಮಾಹಿತಿಯಿರುವ ಸಿಬ್ಬಂದಿ ನಿಯೋಜಿಸಿ ಎಂದರು.

ಡಿಡಿಪಿಐ  ದೊಡ್ಡಬಸಪ್ಪ ನೀರಲಕೇರಿ ಅವರು ಮಾತನಾಡಿ,  ಕೊಪ್ಪಳದಲ್ಲಿ 6, ಗಂಗಾವತಿ 8, ಕುಷ್ಟಗಿ 2 ಹಾಗೂ ಯಲಬುರ್ಗಾದಲ್ಲಿ 4 ಸೇರಿದಂತೆ ಒಟ್ಟು 20 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಒಟ್ಟು 5,702 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು. 

ಪರೀಕ್ಷಾ ಕರ್ತವ್ಯಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್ ಸೇರಿದಂತೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಹಾಗೂ ವ್ಯವಸ್ಥಿತ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

 ಮುನಿರಾಬಾದ್ ಡಯಟ್‍ನ ಪ್ರಾಚಾರ್ಯರು, ಎಲ್ಲ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಸ್ಟೊಡಿಯನ್‍ಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು