ಸೋಮವಾರ, ಆಗಸ್ಟ್ 8, 2022
24 °C

ಶಿಕ್ಷಕರಿಗೆ ಹಿಂಬಡ್ತಿ ನೀಡಬೇಡಿ: ಶಿಕ್ಷಕರ ಸಂಘದ ತಾಲ್ಲೂಕು ಘಟಕದಿಂದ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ಬಿ.ಇಡಿ ಪದವಿ ಪಡೆದಿರುವ ತಾಲ್ಲೂಕಿನ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಪ್ರೌಢ ಶಾಲೆಗಳಿಗೆ ವಿಷಯವಾರು ಬಡ್ತಿ ನೀಡುವುದು ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಶಿಕ್ಷಕರ ಸಂಘದವರು ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಹಲಗೇರಿ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸನಗೌಡ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಶಂಶಾದಬೇಗ್ಂ, ಶಿಕ್ಷಕರ ಸಂಘದ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಮಂಜುಳಾ ಶ್ಯಾವಿ ಮಾತನಾಡಿ,‘ಬಿ.ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇತರ ಜಿಲ್ಲೆಗಳಲ್ಲಿ ಪ್ರೌಢ ಶಾಲೆಗಳಿಗೆ ಬಡ್ತಿ ನೀಡಿರುವ ಪ್ರಕ್ರಿಯೆ ಕೊಪ್ಪಳ ಜಿಲ್ಲೆಯಲ್ಲಿ ಇಲ್ಲಿವರೆಗೆ ಆರಂಭಿಸಿಲ್ಲ. ಆಕಾಂಕ್ಷಿ ಶಿಕ್ಷಕರು ಬಡ್ತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಅರ್ಹ ಶಿಕ್ಷಕರಿಗೆ ಕೌನ್ಸಲಿಂಗ್ ನಡೆಸಿ ಬಡ್ತಿ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಈಗಾಗಲೇ ಬಡ್ತಿ ಪಡೆದು ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಯಾವುದೇ ಕಾರಣಕ್ಕೂ ಹಿಂಬಡ್ತಿ ನೀಡದೆ ಹುದ್ದೆಯಲ್ಲಿ ಮುಂದುವರಿಸಬೇಕು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರ ವೃಂದದಲ್ಲಿ ವಿಲೀನಗೊಳಿಸಬೇಕು ಎಂದು ಆಗ್ರಹಿಸಿದರು.

ನನೆಗುದಿಗೆ ಬಿದ್ದಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ತ್ವರಿತ ಗತಿಯಲ್ಲಿ ಆರಂಭಿಸಿ ಅರ್ಹ ಶಿಕ್ಷಕರಿಗೆ ಅನುಕೂಲ ಮಾಡಿಕೊಡಬೇಕು ಹಾಗೂ ತಡೆ ಹಿಡಿದಿರುವ ಡಿ.ಎ ಬಿಲ್ ಬಿಡುಗಡೆಗೊಳಿಸುವುದು ಮತ್ತು ಕೋವಿಡ್ ಕಾರಣ ಶಿಕ್ಷಕರಿಗೆ ನೀಡಿರುವ ರಜೆಯನ್ನು ಮತ್ತಷ್ಟು ದಿನಗಳ ಕಾಲ ವಿಸ್ತರಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಮಾತನಾಡಿ,‘ಪ್ರೌಢಶಾಲೆಗಳಿಗೆ ಬಡ್ತಿ ನೀಡುವ ವಿಷಯ ಕುರಿತಂತೆ ಅಧಿಕಾರಿಗಳ ಜತೆಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು. ರಜೆ ವಿಸ್ತರಣೆ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಮನವಿ ಪತ್ರ ಸಲ್ಲಿಸಲಾಗಿದೆ’ ಎಂದರು.

ವರ್ಗಾವಣೆ ಪ್ರಕ್ರಿಯೆ ತ್ವರಿತಗತಿಯಲ್ಲಿ ಆರಂಭಿಸಲಾಗುತ್ತಿದೆ. ಶಿಕ್ಷಕರು ಆತಂಕ ಪಡುವ ಅಗತ್ಯ ಇಲ್ಲ ಎಂದರು.

ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸನಗೌಡ ಮಾತನಾಡಿದರು.

ಶಿಕ್ಷಕರ ಸಂಘದ ಕೊಪ್ಪಳ ಜಿಲ್ಲಾ ನಿರ್ದೇಶಕ ಬಾಳಪ್ಪ ಕಾಳೆ ಹಾಗೂ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು