ಮಂಗಳವಾರ, ಜನವರಿ 18, 2022
27 °C
15 ರಿಂದ 18 ವರ್ಷದ ಮಕ್ಕಳ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ

84 ಸಾವಿರ ಮಕ್ಕಳಿಗೆ ಲಸಿಕೆ ನೀಡುವ ಗುರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ಕೋವಿಡ್ ಲಸಿಕಾ ಕಾರ್ಯಕ್ರಮದಡಿ 15 ರಿಂದ 18 ವರ್ಷದೊಳಗಿನ ಜಿಲ್ಲೆಯ 84 ಸಾವಿರಕ್ಕೂ ಅಧಿಕ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಬಸಪ್ಪ ಆಚಾರ ಹೇಳಿದರು.

ಅವರು ಸೋಮವಾರ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಕೋವಿಡ್ ಲಸಿಕಾ ಕಾರ್ಯಕ್ರಮದ ಮೊದಲ ಹಂತವು ಜಿಲ್ಲೆಯಲ್ಲಿ  2021ರ ಜ.16 ರಂದು ಪ್ರಾರಂಭಿಸಲಾಗಿದ್ದು, ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ 9 ಲಕ್ಷದ 84 ಸಾವಿರ ವಯಸ್ಕರಿಗೆ ಲಸಿಕಾಕರಣದ ಗುರಿ ಹೊಂದಲಾಗಿತ್ತು. ಇಲ್ಲಿಯರೆಗೆ ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಮೊದಲ ಹಂತದಲ್ಲಿ 9,62,979 ಜನಕ್ಕೆ ಲಸಿಕೆ ನೀಡುವ ಮೂಲಕ ಶೇ 98 ರಷ್ಟು ಹಾಗೂ 2ನೇ ಹಂತದಲ್ಲಿ 7,25,620 ಡೋಸ್ ನೀಡಿದ್ದು, ಶೇ 74 ರಷ್ಟು ಗುರಿ ಸಾಧಿಸುವ ಮೂಲಕ ಒಟ್ಟು 16,88,599 ಜನರು ಲಸಿಕೆ ಪಡೆದಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಕೋವಿಡ್-19 ಲಸಿಕಾ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ 15 ರಿಂದ 18 ವರ್ಷದೊಳಗಿನ ಒಟ್ಟು 84,516 ಮಕ್ಕಳಿಗೆ ಲಸಿಕೆ ನೀಡುವ ಗುರಿ ನಿಗದಿಪಡಿಸಲಾಗಿದ್ದು, ಜಿಲ್ಲೆಯಾದ್ಯಂತ ಜ. 3 ರಿಂದ 15-18 ವರ್ಷದವರಿಗೆ ಕೋವ್ಯಾಕ್ಸಿನ್ ಲಸಿಕಾಕರಣವನ್ನು ಹಮ್ಮಿಕೊಂಡು ಮೊದಲ ದಿನವಾದ ಇಂದು ಜಿಲ್ಲೆಯಾದ್ಯಂತ 80 ಲಸಿಕಾ ಕೇಂದ್ರಗಳಲ್ಲಿ 164 ಲಸಿಕಾ ತಂಡಗಳಿಂದ ಸುಮಾರು 23,500 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು.

2007 ಮತ್ತು ಅದಕ್ಕೂ ಮೊದಲು ಜನಿಸಿದ ಮಕ್ಕಳು ಲಸಿಕೆ ಪಡೆಯಲು ಅರ್ಹರಾಗಿದ್ದು, ಶಾಲಾ ಕಾಲೇಜುಗಳಲ್ಲಿ ಅಥವಾ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆಯಬಹುದಾಗಿದೆ. ಮಕ್ಕಳ ತಂದೆ-ತಾಯಿ ಅಥವಾ ಪೋಷಕರು, ಶಾಲಾ ಶಿಕ್ಷಕರು ಅಥವಾ ಮುಖ್ಯ ಶಿಕ್ಷಕರು ಮೊಬೈಲ್ ಸಂಖ್ಯೆ ಹಾಗೂ ಮಕ್ಕಳ ಆಧಾರ್ ಕಾರ್ಡ್, ಶಾಲಾ ಐಡಿ ಕಾರ್ಡ್ ಬಳಸಿ ಲಸಿಕೆ ಪಡೆಯಲು ನೋಂದಾಯಿಸಬಹುದಾಗಿದೆ ಎಂದರು.

ಸಂಸದ ಕರಡಿ ಸಂಗಣ್ಣ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಫೌಜಿಯಾ ತರನ್ನುಮ್, ಎಸ್‌ಪಿ ಟಿ.ಶ್ರೀಧರ್, ಡಿಎಚ್‌ಒ ಡಾ. ಟಿ.ಲಿಂಗರಾಜು, ಜಿಲ್ಲಾ ಆರ್.ಸಿ.ಎಚ್‌ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವಿಂದ್ರನಾಥ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಜಿ ರವಿಕುಮಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೆರೆ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಾಂಜನೇಯ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.