ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಇಲಾಖೆಯಿಂದ ನೆರವು: ಸಚಿವ ಹಾಲಪ್ಪ

Last Updated 24 ಜುಲೈ 2022, 7:38 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯ ಭಾನಾಪುರ ಬಳಿ ಶನಿವಾರ ರಾತ್ರಿ ನಡೆದ ಅಪಘಾತದಲ್ಲಿ ಪಾರವ್ವ ಎಂಬುವರು ಮೃತಪಟ್ಟಿದ್ದು, ಇವರ ಮೂವರೂ ಮಕ್ಕಳು ಅನಾಥರಾಗಿದ್ದಾರೆ. ಅವರಿಗೆ ನಮ್ಮ ಇಲಾಖೆಯಿಂದ ಸಂಪೂರ್ಣ ನೆರವು ಕೊಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಸಚಿವ ಹಾಲಪ್ಪ ಆಚಾರ್‌ ತಿಳಿಸಿದರು.

ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳನ್ನು ಭಾನುವಾರ ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ‘ಕುಕನೂರು ತಾಲ್ಲೂಕಿನ ಬಿನ್ನಾಳ ಗ್ರಾಮದ ಪಾರವ್ವ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರ ಪತಿ ಬೀರಪ್ಪ ಹಲಗೇರಿ ವರ್ಷದ ಹಿಂದೆ ತೀರಿಕೊಂಡಿದ್ದರು’ ಎಂದು ಹೇಳಿದರು.

ಪಾರವ್ವ–ಬೀರಪ್ಪ ದಂಪತಿಯ ಮೂವರು ಮಕ್ಕಳ ಪೈಕಿ ಬಸವರಾಜ ಸುರಕ್ಷಿತವಾಗಿದ್ದಾರೆ. ಪುಟ್ಟರಾಜು ಹಾಗೂ ಪಲ್ಲವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಯಾರೇ ವಾಹನ ಚಲಾಯಿಸಿದರೂ ಹೆಚ್ಚು ಎಚ್ಚರಿಕೆ ವಹಿಸಬೇಕು. ಸ್ವಲ್ಪ ಮೈ ಮರೆತರೂ ಪೂರ್ಣ ಕುಟುಂಬದವರನ್ನೇ ಕಳೆದುಕೊಳ್ಳಬೇಕಾಗುತ್ತದೆ. ನೋವಿನಲ್ಲಿರುವ ಈ ಕುಟುಂಬಕ್ಕೆ ಯಾವ ರೀತಿ ಧೈರ್ಯ ಹೇಳಬೇಕು ಎನ್ನುವುದೇ ಗೊತ್ತಾಗುತ್ತಿಲ್ಲ’ ಎಂದರು.

’ಘಟನೆ ಹೇಗೆ ನಡೆದಿದೆ, ಯಾರ ತಪ್ಪು ಎನ್ನುವುದು ಪೊಲೀಸ್‌ ತನಿಖೆಯಿಂದ ಗೊತ್ತಾಗಬೇಕಿದೆ. ನಗರ ಪ್ರದೇಶದಲ್ಲಿ ಭಾರಿ ಗಾತ್ರದ ವಾಹನಗಳು ವೇಗದ ಮಿತಿ ಮೀರಿ ಓಡಾಡುತ್ತಿವೆ. ಇದನ್ನು ಪೊಲೀಸರು ಮತ್ತು ಆರ್‌ಟಿಒ ಅಧಿಕಾರಿಗಳು ತಡೆಯುತ್ತಿದ್ದಾರೆ. ಸರ್ಕಾರದ ಪ್ರಯತ್ನದ ಜೊತೆಗೆ ಸಾರ್ವಜನಿಕರ ಸಾಮಾಜಿಕ ಜವಾಬ್ದಾರಿಯೂ ಮುಖ್ಯ’ ಎಂದು ಹೇಳಿದರು.

ಹುಬ್ಬಳ್ಳಿ ಹೊರವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದ ಅಗ್ನಿ ದುರಂತದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ‘ಅನುಮತಿ ಪಡೆಯದೇ ಕಾರ್ಖಾನೆ ನಡೆಸಲಾಗುತ್ತಿತ್ತು ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ. ಈ ಕುರಿತು ತನಿಖೆ ನಡೆಸಲಾಗುತ್ತದೆ. ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.ವಿಧಾನ ಪರಿಷತ್‌ ಸದಸ್ಯೆ ಹೇಮಲತಾ ನಾಯಕ ಇದ್ದರು.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT