ಮಂಗಳವಾರ, ಅಕ್ಟೋಬರ್ 19, 2021
22 °C
ಕಾರಟಗಿ: ಶಾಸಕ ಬಸವರಾಜ ದಢೇಸುಗೂರ ಸಲಹೆ

ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರಟಗಿ: ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಹೊಂದಲು ಅಧಿಕಾರಿಗಳು, ಜನಪ್ರತಿನಿಧಿಗಳು ಪಕ್ಷಬೇಧವಿಲ್ಲದೇ ಕೆಲಸ ಮಾಡಬೇಕು. ಸರ್ಕಾರದ ಯೋಜನೆಗಳ ಲಾಭ ಜನಸಾಮಾನ್ಯರಿಗೆ ತಲುಪಿಸಿದಾಗಲೇ ನೈಜ ಅಭಿವೃದ್ದಿ ಯಾಗುತ್ತದೆ ಎಂದು ಶಾಸಕ ಬಸವರಾಜ ದಢೇಸುಗೂರ ಹೇಳಿದರು.

ಪಟ್ಟಣದಲ್ಲಿ ಸೋಮವಾರ ನಡೆದ ಗ್ರಾಮೀಣ ಅಭಿವೃದ್ಧಿ ಯೋಜನೆಗಳ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳಿಗೆ ನಡೆದ ಕಾರ್ಯಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಅಧಿಕಾರಿಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿ ಕೆಲಸಕ್ಕೆ ಮುಂದಾಗಬೇಕು. ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ಸಲಹೆ ಪಡೆದು ಗ್ರಾಮಗಳ ಅಭಿವೃದ್ಧಿಗಾಗಿ ಚಿಂತಿಸಬೇಕು. ಸ್ಥಳೀಯ ಸಂಸ್ಥೆಗಳು ಸಮರ್ಥವಾಗಿ ಕೆಲಸ ಮಾಡಿದರೆ, ಶಾಸಕರಾದವರು ಕೆಲಸ ಮಾಡಲು ಸಾಧ್ಯ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಫೌಜೀಯಾ ತರುನ್ನಮ್‌ ಮಾತನಾಡಿ, ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಹೊಸ ಯೋಜನೆಗಳಿವೆ. ಮಾಹಿತಿ ಪಡೆದು ಯೋಜನೆ ಗಳ ಸದ್ವಿನಿಯೋಗಕ್ಕೆ ಎಲ್ಲರೂ ಮುಂದಾಗಬೇಕು ಎಂದರು.

ಸರ್ಕಾರಿ ಶಾಲೆ ಹಾಗೂ ಅಂಗನವಾಡಿ, ಶೌಚಾಲಯ, ಆಟದ ಮೈದಾನ ಸಹಿತ ಅನೇಕ ವಿನೂತನ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು. ಹೊಸ ಕೆರೆ, ಕಲ್ಯಾಣಿಗಳ ಅಭಿವೃದ್ಧಿ ಪಡಿಸುವ ಕಾರ್ಯ ಮಾಡಬೇಕು. ಜಲ ಜೀವನ್ ಮಿಷನ್ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲನೆ ಮಾಡಿ ಕಳಪೆ ಕಾಮಗಾರಿಗಳನ್ನು ಮಾಡುವರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ತಮ್ಮ ಗ್ರಾಮಗಳಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಕಾಮಗಾರಿಗಳ ಬಗ್ಗೆ ತಿಳಿಸಿ, ಸಂದೇಹಗಳನ್ನು ಜಿಲ್ಲಾ ಪಂಚಾಯಿತಿ ಸಿಇಒ ಅವರಿಂದ ನಿವಾರಿಸಿಕೊಂಡರು.

ಜಿಲ್ಲಾ ಪಂಚಾಯಿತಿ ಅಪರ ಕಾರ್ಯದರ್ಶಿ ಶರಣಬಸವರಾಜ್, ಅಮಿನಸಾಬ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ, ಕಾವ್ಯರಾಣಿ, ಡಿ. ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ, ಗಂಗಾವತಿ, ಕನಕಗಿರಿ, ಕಾರಟಗಿ ತಾಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.