ಶನಿವಾರ, ಡಿಸೆಂಬರ್ 3, 2022
26 °C
ಕರ್ನಾಟಕ ನಕ್ಷೆ ಆಕಾರದ ಬೃಹತ್ ಮಾನವ ಸರಪಳಿ ಮೂಲಕ ಜಾಗೃತಿ

ಯುವಕರು ಮತದಾನದಿಂದ ಹೊರಗುಳಿಯದಿರಲಿ: ಎಂ. ಸುಂದರೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ‘ಅರ್ಹ ಮತದಾರರು ಕಡ್ಡಾಯವಾಗಿ ಮತದಾರರ ಕಾರ್ಡ್ ಪಡೆದುಕೊಳ್ಳಬೇಕು. ಜಿಲ್ಲೆಯ ಯುವ ಮತದಾರರು ಮತದಾನದಿಂದ ಹೊರಗುಳಿಯಬಾರದು’ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಹೇಳಿದರು.

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023ರ ಅಂಗವಾಗಿ ಅರ್ಹ ಯುವ ಮತದಾರರನ್ನು ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಪೋಸ್ಟರ್‌ ಬಿಡುಗಡೆ ಮಾಡಿದರು.

‘ಪ್ರತಿ ವರ್ಷ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ಮತದಾರರ ಪರಿಷ್ಕರಣೆ ನಡೆಯುತ್ತದೆ. ಕಾಲೇಜು ವಿದ್ಯಾರ್ಥಿಗಳು ತಮ್ಮ ಮನೆಯ ಸದಸ್ಯರಿಗೆ ಹಾಗೂ ಸ್ನೇಹಿತರಗೆ ಮಾಹಿತಿ ನೀಡಬೇಕು‘

ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷೆ ಬಿ.ಫೌಜಿಯಾ ತರನ್ನುಮ್ ಮಾತನಾಡಿ ‘ಮತದಾರರು ಮುಕ್ತವಾಗಿ ಮತ್ತು ನ್ಯಾಯಸಮ್ಮತವಾಗಿ ಮತದಾನ ಮಾಡುವುದೇ ಕಾರ್ಯಕ್ರಮ ಉದ್ದೇಶವಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು, ತೆಗೆದು ಹಾಕಲು, ತಿದ್ದುಪಡಿ ಮತ್ತು ವರ್ಗಾವಣೆಗಾಗಿ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗದ ಮೊಬೈಲ್ ಆ್ಯಪ್ `ವೋಟರ್ ಹೆಲ್ಪ್‌ ಲೈನ್‌’ ಮೂಲಕ ಅಥವಾ ವೆಬ್‌ಸೈಟ್ www.nvsp.in ಮೂಲಕ ಸಹ ಅರ್ಜಿ ಸಲ್ಲಿಸಬಹುದು’ ಎಂದರು.

ಜಾಗೃತಿ: ಈ ಬಾರಿ ‘ಭಾಗವಹಿಸುವ ಚುನಾವಣೆಗಾಗಿ ನಡೆಯೋಣ’ ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಡಿ ಜಿಲ್ಲೆಯ ಯುವ ಮತದಾರರು ಮತದಾನದಿಂದ ಹೊರಗುಳಿಯದಂತೆ ನೋಡಿಕೊಳ್ಳೋಣ ಎಂದರು ಸಿಇಒ ಹೇಳಿದರು.

ಅಧಿಕಾರಿಗಳು, ಶಿಕ್ಷಕರು ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ನಗರದ ಪ್ರಮುಖ ರಸ್ತೆಯಲ್ಲಿ ಕಾಲ್ನಡಿಗೆ ಮೂಲಕ ಫಲಕಗಳನ್ನು ಪ್ರದರ್ಶಿಸಿ ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ ಪ್ರತಿಜ್ಞಾ ವಿಧಿ ಬೋಧಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಂ. ಆರ್. ರೆಡ್ಡೇರ್, ಕೊಪ್ಪಳ ತಹಶೀಲ್ದಾರ್ ಅಮರೇಶ್ ಬಿರಾದರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಆಕರ್ಷಿಸಿದ ನಕ್ಷೆ

ಕೊಪ್ಪಳ: ಜಾಗೃತಿ ಮೂಡಿಸುವ ಸಲುವಾಗಿ ಕೊಪ್ಪಳದ ತಾಲ್ಲೂಕು ಕ್ರೀಡಾಂಗಣದಲ್ಲಿ 200X120 ಅಡಿ ಉದ್ದಗಲದಲ್ಲಿ ಕರ್ನಾಟಕದ ಬೃಹತ್ ನಕ್ಷೆಯನ್ನು ರಚಿಸಿದ್ದು, ತಾಲ್ಲೂಕಿನ ಪದವಿಪೂರ್ವ ಮತ್ತು ಪದವಿ ಕಾಲೇಜುಗಳ ಸುಮಾರು 4,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ಈ ನಕ್ಷೆಯ ಆಕಾರದ ರೇಖೆಯ ಮೇಲೆ ಜೊತೆಯಾಗಿ ನಿಂತು ಮಾನವ ಸರಪಳಿ ನಿರ್ಮಿಸಿದ್ದರು.

ಜೊತೆಗೆ ‘ಸ್ವೀಪ್ ಕೊಪ್ಪಳ’ ಎನ್ನುವ ವಾಕ್ಯ ರಚಿಸಿ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿದ್ದರು. ಇದ ಎಲ್ಲರನ್ನೂ ಆಕರ್ಷಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು