ಮಂಗಳವಾರ, ಡಿಸೆಂಬರ್ 10, 2019
19 °C

ಕೆರೆ ಸಂರಕ್ಷಣೆ ನಿರ್ಲಕ್ಷ್ಯ: ಕ್ರಿಮಿನಲ್ ಪ್ರಕರಣದ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೆರೆ ಸಂರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಎಚ್ಚರಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ತಾಲ್ಲೂಕುಮಟ್ಟದ ಅಧಿಕಾರಿಗಳ ಜತೆ ನಡೆಸಿದ ವೀಡಿಯೊ ಸಂಚಾದದಲ್ಲಿ ಅವರು ಮಾತನಾಡಿದರು.

ಕೆರೆ ಒತ್ತುವರಿ ವರದಿ ಸಲ್ಲಿಸಲು ಸೂಚನೆ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ಸರ್ವೆ ಕಾರ್ಯ ನಡೆಸಬೇಕು. ವರದಿ ಸಲ್ಲಿಸಲು ಸೂಚಿಸಿದ್ದರೂ ಹಲವು ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಂಡಿಲ್ಲ. ಮುಂದಿನ 15 ದಿನಗಳ ಒಳಗೆ ಸರ್ವೆ ಕಾರ್ಯ ಪೂರ್ಣಗೊಳಿಸಬೇಕು. ಹದ್ದುಬಸ್ತು ಮಾಡಬೇಕು. ಕೆರೆಗಳ ಸುತ್ತ ಗಡಿ ಗುರುತಿಸಬೇಕು ಎಂದು ತಾಕೀತು ಮಾಡಿದರು.

ಅತಿವೃಷ್ಟಿಯಿಂದ ಹಾನಿಯಾದ ಮನೆಗಳಿಗೆ ನೀಡುತ್ತಿರುವ ಪರಿಹಾರ ಕಾರ್ಯ ಚುರುಕುಗೊಳಿಸಬೇಕು. 770 ಪ್ರಕರಣಗಳಲ್ಲಿ ಪರಿಹಾರ ವಿತರಣೆ ಕಾರ್ಯ ಆಗಬೇಕಿದೆ. ಗ್ರಾಮೀಣ ಪ್ರದೇಶದ 86 ಪ್ರಕರಣಗಳಲ್ಲಿ ಜಿಪಿಎಸ್ ಮಾಡಬೇಕಾಗಿದೆ. ತಹಶೀಲ್ದಾರ್‌ಗಳು ತಕ್ಷಣ ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು. ಅನಧಿಕೃತವಾಗಿ ನಿರ್ಮಿಸಿರುವ ಮನೆಗಳ ಪಟ್ಟಿ ಸಲ್ಲಿಸಬೇಕು ಎಂದು ಸೂಚಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಉತ್ತಮ ರೀತಿಯಲ್ಲಿ ನಡೆದಿದೆ. ಇನ್ನೂ ಕೆಲವು ಕಡೆ ಪರಿಷ್ಕರಣೆಯಾಗಬೇಕಿದೆ. ಗೈರು ಹಾಜರಾಗಿರುವ ಮತದಾರರ ಹೆಸರು ಪರಿಷ್ಕರಿಸುವ ಕಾರ್ಯ ಪೂರ್ಣಗೊಳಿಸಬೇಕು. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈ ಕಾರ್ಯ ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು ಎಂದರು.

ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಅನುರಾಧಾ, ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)