ಗುರುವಾರ , ಏಪ್ರಿಲ್ 2, 2020
19 °C

ಉದ್ದಿಮೆ ಸ್ಥಾಪಿಸುವ ಯುವಕರಿಗೆ ಕಡಿಮೆ ಬಡ್ಡಿದರದ ಸಾಲ: ಬಿ.ಎಸ್.ಯಡಿಯೂರಪ್ಪ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಸ್ವಂತ ಉದ್ದಿಮೆ ಸ್ಥಾಪಿಸಲು ಮುಂದೆ ಬರುವ ವಿದ್ಯಾವಂತ ಯುವಕರಿಗೆ ಕಡಿಮೆ ಬಡ್ಡಿ ದರದಲ್ಲಿ ದೊಡ್ಡ ಮೊತ್ತದ ಸಾಲಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.

ಎನ್‍ಇಎಸ್ ಕಾಲೇಜು ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಎರಡು ದಿನಗಳ ಬೃಹತ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾವಂತರ ಸಂಖ್ಯೆಯಲ್ಲಿ ಈಚೆಗೆ ಗಣನೀಯ ಹೆಚ್ಚಳವಾಗಿದೆ. ಜತೆಗೆ, ನಿರುದ್ಯೋಗ ಸಮಸ್ಯೆಯೂ ಬೃಹದಾಕಾರವಾಗಿ ಬೆಳೆಯುತ್ತಿದೆ. ಕೃಷಿ ಮತ್ತು ಕೈಗಾರಿಕಾ ವಲಯಗಳನ್ನು ಸಮಾನಾಂತರವಾಗಿ ಅಭಿವೃದ್ಧಿಪಡಿಸುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಶ್ರಮಿಸಲಾಗುತ್ತಿದೆ. ಉದ್ದಿಮೆ ಸ್ಥಾಪಿಸಲು ಮುಂದೆ ಬರುವವರಿಗೆ ಶೇ 75ರಷ್ಟು ರಿಯಾಯಿತಿ ದರದಲ್ಲಿ ನಿವೇಶನ, ಮೂಲ ಸೌಕರ್ಯ ಒದಗಿಸಲಾಗುವುದು ಎಂದರು.

ಶಿವಮೊಗ್ಗದಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕ ವಾತಾವರಣ ನಿರ್ಮಿಸಲಾಗುವುದು. ಜಿಲ್ಲೆಯನ್ನು ರಾಜ್ಯದಲ್ಲಿಯೇ ಮಾದರಿಯಾಗಿ ರೂಪಿಸಲಾಗುವುದು. ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಬಂಡವಾಳ ತೊಡಗಿಸುವ ಕುರಿತು 42 ಪ್ರಮುಖ ಕೈಗಾರಿಕೋದ್ಯಮಿಗಳ ಜತೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕೈಗೊಂಡ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಶಿವಮೊಗ್ಗ ವಿಮಾನನಿಲ್ದಾಣ ಕಾಮಗಾರಿಗಳಿಗೆ ₹ 220 ಕೋಟಿ ಮಂಜೂರು ಮಾಡಲಾಗಿದೆ. ಮುಂದಿನ 15 ದಿನಗಳ ಒಳಗಾಗಿ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. 8ರಿಂದ 10ತಿಂಗಳ ಒಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ವಿಮಾನಗಳ ಹಾರಾಟ ಆರಂಭವಾದರೆ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿರಂತರ ಉದ್ಯೋಗ ಮೇಳ ಆಯೋಜನೆ: 2009ರಲ್ಲಿ ಉದ್ಯೋಗ ಮೇಳ ಆಯೋಜಿಸುವ ಮೂಲಕ ಯುವ ಜನರಿಗೆ ಉದ್ಯೋಗ ಕಲ್ಪಿಸುವ ಕಾರ್ಯಕ್ಕೆ ನಾಂದಿ ಹಾಡಲಾಗಿತ್ತು. ಶಿವಮೊಗ್ಗದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ 150ಕ್ಕೂ ಅಧಿಕ ಕಂಪನಿಗಳು ಭಾಗವಹಿಸುತ್ತಿವೆ. ಸ್ಥಳದಲ್ಲಿಯೇ ಉದ್ಯೋಗ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ 45 ಪರೀಕ್ಷಾ ಪೂರ್ವ ತರಬೇತಿ ಆಯೋಜಿಸಲಾಗಿದೆ. ಇದುವರೆಗೂ 2,651 ಮಂದಿ ಪ್ರಯೋಜನ ಪಡೆದಿದ್ದಾರೆ. ಜಿಲ್ಲೆಯಲ್ಲಿ ನಡೆದ ಉದ್ಯೋಗ ಮೇಳಗಳಲ್ಲಿ ಒಟ್ಟು 11,500 ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ. ದೀನದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆಯಡಿ 3,609 ಮಂದಿಗೆ ಪೂರ್ಣ ತರಬೇತಿ ನೀಡಲಾಗಿದೆ. 2,600 ಜನರು ಉದ್ಯೋಗ ಪಡೆದುಕೊಂಡಿದ್ದಾರೆ ಎಂದು ವಿವರ ನೀಡಿದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಉದ್ಯಮಗಳನ್ನು ಆರಂಭಿಸುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಶೇ 4ರ ಬಡ್ಡಿದರದಲ್ಲಿ ₹10 ಕೋಟಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಅರಗ ಜ್ಞಾನೇಂದ್ರ, ಆಯನೂರು ಮಂಜುನಾಥ, ಎಸ್‌.ರುದ್ರೇಗೌಡ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯ ಕುಮಾರ್, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್‌, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಉಪಸ್ಥಿತರಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು