ಗುರುವಾರ , ಜೂನ್ 30, 2022
20 °C
ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ

ಕಳಪೆ ಬಿತ್ತನೆ ಬೀಜದಿಂದ ರೈತರ ನಾಶ: ಕೃಷಿ ಸಚಿವ ಬಿ.ಸಿ.ಪಾಟೀಲ ಅಭಿಮತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ‘ರೈತರಿಗೆ ಬಿತ್ತನೆ ಬೀಜ ವಿತರಣೆ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳು ಬಹಳ ಎಚ್ಚರಿಕೆ ವಹಿಸಬೇಕು. ಕಳಪೆ ಬಿತ್ತನೆ ಬೀಜ ವಿತರಣೆಯಾದರೆ ರೈತರು ನಾಶವಾಗುತ್ತಾರೆ.  ಬಿತ್ತನೆ ಬೀಜದ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಸೂಚನೆ ನೀಡಿದರು.

ಜಿ.ಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಮಳೆ ಸುರಿದ ನಂತರ ರೈತರು ಅಪಾರ ಸಂಖ್ಯೆಯಲ್ಲಿ ಗೊಬ್ಬರದ ಅಂಗಡಿ ಮುಂದೆ ಸಾಲಿನಲ್ಲಿ ನಿಲ್ಲುತ್ತಾರೆ. ಅಂತಹ ಸಂದರ್ಭದಲ್ಲಿ ಅಂಗಡಿ ಮಾಲೀಕರು ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವ ಸಾಧ್ಯತೆ ಇರುತ್ತದೆ. ಅಧಿಕಾರಿಗಳು ನಿಗಾ ವಹಿಸಿ ಅಂತಹ ಮಾಲೀಕರ ಲೈಸೆನ್ಸ್‌ ರದ್ದು ಮಾಡಬೇಕು’ ಎಂದು ಹೇಳಿದರು.

‘ಕೃಷಿ ಇಲಾಖೆ ಇತಿಹಾಸದಲ್ಲಿ ಕಳೆದ ವರ್ಷ ಅತೀ ಹೆಚ್ಚು ₹ 20 ಕೋಟಿ ಮೌಲ್ಯದ ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕ ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ವಿಭಾಗವೊಂದರಲ್ಲೇ ₹ 14 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜ್ಯದಾದ್ಯಂತ ಒಟ್ಟಾರೆ 144 ರಸಗೊಬ್ಬರ ಅಂಗಡಿ ಮಾಲೀಕರ ಲೈಸೆನ್ಸ್‌ ರದ್ದು ಮಾಡಲಾಗಿದೆ. ಅಧಿಕಾರಿಗಳ ನಿರಂತರವಾಗಿ ದಾಳಿ ನಡೆಸಿ ಅಕ್ರಮ ದಾಸ್ತಾನಿಗೆ ಕಡಿವಾಣ ಹಾಕಬೇಕು. ಜೊತೆಗೆ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡದಂತೆ ನೋಡಿಕೊಳ್ಳಬೇಕು’ ಎಂದರು.

‘2019–20ನೇ ಸಾಲಿನಲ್ಲಿ ಮಂಡ್ಯ ಜಿಲ್ಲೆಗೆ 15,838 ಟಾರ್‌ಪಾಲ್‌ ವಿತರಣೆ ಮಾಡಲಾಗಿದೆ. ಈ ವರ್ಷ 21,744 ಟಾರ್‌ಪಾಲ್‌ ವಿತರಣೆ ಮಾಡಲಾಗಿದೆ. ಫಲಾನುಭವಿಗಳು ಇವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಕೃಷಿ ಯಂತ್ರೋಪಕರಣ ವಿತರಣೆಯಲ್ಲಿ 9,691 ಫಲಾನುಭವಿಗಳಿಗೆ ಅನುಕೂಲವಾಗಿದೆ. ₹ 15 ಕೋಟಿ ಸಹಾಯಧನ ವಿತರಣೆ ಮಾಡಲಾಗಿದೆ’ ಎಂದರು.

‘ಕೃಷಿ ಯಂತ್ರೋಪಕರಣ ಬ್ಯಾಂಕ್‌ ಯೋಜನೆಯಡಿ ಸಹಕಾರಿ ತತ್ವದಡಿ ಕೃಷಿ ಯಂತ್ರೋಪಕರಣ ವಿತರಣೆ ಮಾಡಲಾಗಿದೆ. ಒಬ್ಬ ರೈತರಿಗೆ ಮಾತ್ರ ಯಂತ್ರ ನೀಡದಂತೆ 20 ರೈತ ಕುಟುಂಬಗಳಿಗೆ ಅನುಕೂಲವಾಗುವಂತೆ ವಿತರಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಕಳೆದ ವರ್ಷ 5 ಟ್ರ್ಯಾಕ್ಟರ್‌ ವಿತರಣೆ ಮಾಡಲಾಗಿದೆ’ ಎಂದು ಹೇಳಿದರು.

‘ಮುಂಗಾರು ಪ್ರಾರಂಭವಾಗುತ್ತಿರುವ ಕಾರಣ ನಾನೇ ಪ್ರತಿ ಜಿಲ್ಲೆಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮಾಡುತ್ತಿದ್ದೇನೆ. ಆಯಾ ಜಿಲ್ಲೆಗಳಿಗೆ ಭೇಟಿ ನೀಡಿದರೆ ಮಾತ್ರ ಅಲ್ಲಿಯ ಮಣ್ಣಿನ ಗುಣ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಕಳೆದ ವರ್ಷವೂ ಕೋವಿಡ್‌ ಲಾಕ್‌ಡೌನ್‌ ವೇಳೆ ಜಿಲ್ಲಾ ಪ್ರವಾಸ ಕೈಗೊಂಡಿದ್ದೆ. ಈ ಬಾರಿಯೂ ಅದೇ ಸಂಪ್ರದಾಯ ಮುಂದುವರಿಸಿದ್ದೇನೆ. ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ಶಾಸಕರು ಗಮನ ಸೆಳೆದಿದ್ದಾರೆ. ಅವುಗಳನ್ನು ಆದ್ಯತೆಯ ಮೇರೆಗೆ ಪರಿಹಾರ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದರು.

ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ ‘ಕೃಷಿ ಸಚಿವರು 2 ನೇ ಬಾರಿಗೆ ಜಿಲ್ಲೆಗೆ ಬಂದಿರುವುದು ಸಂತಸ ತಂದಿದ್ದು, ಈ ಮೂಲಕ ಕೃಷಿಗೆ ಪೂರಕವಾದ ಸೌಲಭ್ಯಗಳನ್ನು ಒದಗಿಸಲಿದ್ದಾರೆ. ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಮುಖ ಆದ್ಯತೆ ನೀಡಲಾಗುವುದು. ಈ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು’ ಎಂದರು.

ಸಭೆಯಲ್ಲಿ ಶಾಸಕರಾದ ಡಿ.ಸಿ ತಮ್ಮಣ್ಣ, ಎಂ ಶ್ರೀನಿವಾಸ್, ಕೆ.ಅನ್ನದಾನಿ, ಸುರೇಶ್ ಗೌಡ, ಕೆ.ಟಿ ಶ್ರೀಕಂಠೇಗೌಡ, ಅಪ್ಪಾಜಿಗೌಡ, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ ಸಿಇಒ ದಿವ್ಯಾಪ್ರಭು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಎಸ್.ಚಂದ್ರಶೇಖರ್‌ ಇದ್ದರು.

********

ರಾಷ್ಟ್ರದ ಗಮನ ಸೆಳೆದ ಬೆಳೆ ಸಮೀಕ್ಷೆ

‘ರಾಜ್ಯದಲ್ಲಿ ರೈತರೇ ನಡೆಸಿದ ಬೆಳೆ ಸಮೀಕ್ಷೆ ರಾಷ್ಟ್ರದ ಗಮನ ಸೆಳೆದಿದೆ. ರೈತರೇ ಬೆಳೆ ಸಮೀಕ್ಷೆ ನಡೆಸಲಿದ್ದಾರೆ ಎಂದಾಗ ಕೆಲವು ತಮಾಷೆ ಮಾಡಿದ್ದರು. ಆದರೆ ಇದು ಯಶಸ್ವಿಯಾಗಿದ್ದು ಕೇಂದ್ರ ಸರ್ಕಾರದ ಮೆಚ್ಚುಗೆಗೆ ಪಾತ್ರವಾಗಿದೆ. ಇತರ ರಾಜ್ಯಗಳಲ್ಲೂ ಇದೇ ಮಾದರಿ ಅನುಸರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ 60 ಲಕ್ಷ ರೈತರು ತಮ್ಮ ಪ್ಲಾಟ್‌ಗಳ ಬಗ್ಗೆ ಸಮೀಕ್ಷೆ ನಡೆಸಿದ್ದಾರೆ’ ಎಂದು ಬಿ.ಸಿ.ಪಾಟೀಲ ಹೇಳಿದರು.

‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಸಾಧನೆಯೂ ಕೇಂದ್ರ ಸರ್ಕಾರದ ಮೆಚ್ಚುಗೆಗೆ ಪಾತ್ರವಾಗಿದೆ. ವಿಮೆ ಮೊಕದ್ದಮೆಗಳನ್ನು ಆದ್ಯತೆಯ ಮೇರೆ ಪರಿಹಾರ ಮಾಡಲಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು