ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳವಳ್ಳಿ | ದೇವಸ್ಥಾನ ಜಾಗ ವಿವಾದ; 144 ಸೆಕ್ಷನ್ ಜಾರಿ

Published 24 ಡಿಸೆಂಬರ್ 2023, 13:54 IST
Last Updated 24 ಡಿಸೆಂಬರ್ 2023, 13:54 IST
ಅಕ್ಷರ ಗಾತ್ರ

ಮಳವಳ್ಳಿ: ಪಟ್ಟಣದ ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಆಂಜನೇಯಸ್ವಾಮಿ ದೇವಸ್ಥಾನದ ಜಾಗದ ವಿವಾದ ಟ್ರಸ್ಟ್ ಹಾಗೂ ತಾಲ್ಲೂಕು ಆಡಳಿತ ನಡುವೆ ತಾರಕಕ್ಕೇರಿದ್ದು, ಸ್ಥಳದಲ್ಲಿ 144 ಸೆಕ್ಷನ್ ಜಾರಿ ಮಾಡಿ ತಹಶೀಲ್ದಾರ್ ಕೆ.ಎನ್.ಲೋಕೇಶ್ ಆದೇಶ ಹೊರಡಿಸಿದ್ದಾರೆ.

ದೇವಸ್ಥಾನಕ್ಕೆ ಸೇರಿದೆ ಎನ್ನಲಾದ ಜಾಗದಲ್ಲಿ ರಾಮಾಂಜನೇಯ ಸೇವಾ ಸಮಿತಿ ಟ್ರಸ್ಟ್‌ನಿಂದ ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ಮುಂದಾಗಿತ್ತು. ಆದರೆ ಜಾಗವು ಸರ್ಕಾರಕ್ಕೆ ಸೇರಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಹಾಗೂ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳು ಮಳಿಗೆಗಳ ನಿರ್ಮಾಣ ಕಾಮಗಾರಿಗೆ ತಡೆ ನೀಡಿ ‘ಈ ಜಾಗ ಸರ್ಕಾರದ ಆಸ್ತಿ’ ಎಂದು ನಾಮಫಲಕ ಅಳವಡಿಸಿದ್ದರು.

‘ಇದು ಮುಜರಾಯಿ ಇಲಾಖೆಗೆ ಸೇರಿಲ್ಲ. ಟ್ರಸ್ಟ್ ಹೆಸರಿನಲ್ಲಿ ಇ-ಸ್ವತ್ತು ಆಗಿದ್ದು, ಕಾಮಗಾರಿ ಮುಂದುವರಿಸಲು ಅನುಮತಿ ನೀಡಬೇಕು’ ಎಂದು ಆಗ್ರಹಿಸಿ ರಾಮಾಂಜನೇಯ ಸೇವಾ ಸಮಿತಿಯ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಈ ವಿವಾದ ನ್ಯಾಯಾಲಯದ ಮೇಟ್ಟಿಲೇರಿ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನ್ಯಾಯಾಲಯ ಆದೇಶ ಹೊರಡಿಸಿದೆ ಎನ್ನಲಾಗಿದೆ.

ರಾಮಾಂಜನೇಯ ಸೇವಾ ಸಮಿತಿಯ ಸದಸ್ಯರು ಭಾನುವಾರ ಕಾಮಗಾರಿಯ ಮುಂದುವರಿಸುತ್ತಿದ್ದನ್ನು ಗಮನಿಸಿದ ಅಧಿಕಾರಿಗಳು ತಹಶೀಲ್ದಾರ್ ಕೆ.ಎನ್.ಲೋಕೇಶ್ ಹಾಗೂ ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ನೇತೃತ್ವದಲ್ಲಿ ಸ್ಥಳಕ್ಕೆ ತೆರಳಿ ಕಾಮಗಾರಿ ನಿಲ್ಲಿಸುವಂತೆ ಸೂಚಿಸಿದರು. ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಸ್ಥಳದಲ್ಲಿದ್ದ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋದರು.

ಕಾಮಗಾರಿ ಸ್ಥಳದಲ್ಲಿ ಹನುಮ ಜಯಂತಿ ಆಚರಣೆಗೆ ಸಿದ್ಧತೆ ನಡೆಸುತ್ತಿದ್ದ ಕಂಡು ಅಧಿಕಾರಿಗಳು ತಡೆ ನೀಡಿದರು.

‘ಜಾಗಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಾಲಯ ಆದೇಶ ನೀಡಿದೆ. ಆದೇಶ ಉಲ್ಲಂಘಿಸಿ ಕಾಮಗಾರಿ ನಡೆಸುತ್ತಿದ್ದರಿಂದ ಪೊಲೀಸರಿಗೆ ದೂರು ನೀಡಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 144 ಸೆಕ್ಷನ್ ಜಾರಿ ಮಾಡಲಾಗಿದೆ’ ಎಂದು ತಹಶೀಲ್ದಾರ್ ಕೆ.ಎನ್.ಲೋಕೇಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT