ಮಂಗಳವಾರ, ಜೂನ್ 2, 2020
27 °C

ಸುಳ್ಳು ಸುದ್ದಿ ತಂದ ಆತಂಕ: ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಂತೇಬಾಚಹಳ್ಳಿ:  ಸಮೀಪದ ದೊಡ್ಡಹಾರನಹಳ್ಳಿ ಗ್ರಾಮದಲ್ಲಿ 50ಕ್ಕೂ ಹೆಚ್ಚು ಜನರು ಜ್ವರದಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಬುಧವಾರ ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಸಿತ್ತು. ಆದರೆ ಅದು ಸುಳ್ಳು ಸುದ್ದಿ ಎಂದು ತಿಳಿದ ನಂತರ ಜನರು ನಿಟ್ಟುಸಿರು ಬಿಟ್ಟರು.

ದೊಡ್ಡಹಾರನಹಳ್ಳಿ ಗ್ರಾಮಕ್ಕೆ ದುಬೈ, ಮುಂಬೈನಿಂದ ನೂರಾರು ಜನರು ಬಂದಿದ್ದಾರೆ. 50ಕ್ಕೂ ಹೆಚ್ಚು ಜನರು ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಖಾಸಗಿ ವಾಹಿನಿ ಹಾಗೂ ಸಾಮಾಜಿಕ ಜಾಲತಾಣಗಳನ್ನು ಹರಿದಾಡಿತು.

ಜಿಲ್ಲಾಧಿಕಾರಿ ಸೂಚನೆಯ ಮೇರೆಗೆ ತಹಶೀಲ್ದಾರ್‌, ತಾಲ್ಲೂಕು ಆರೋಗ್ಯಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಿದಾಗ ಅದು ಸುಳ್ಳು ಸುದ್ದಿ ಎಂದು ಪತ್ತೆಯಾಯಿತು. ‘ಗ್ರಾಮದಲ್ಲಿ 82 ಮನೆಗಳಿದ್ದು, 434 ಜನಸಂಖ್ಯೆ ಇದೆ. ಯಾರಿಗೂ  ಕೆಮ್ಮು, ಜ್ವರ, ಶೀತ, ನೆಗಡಿ ಇರುವುದಿಲ್ಲ. ಜಾಲತಾಣಗಳಲ್ಲಿ ಹರಿದಾಡಿದ ಸುದ್ದಿ ಸಂಪೂ‌ರ್ಣ ಸುಳ್ಳು’ ಎಂದು ತಹಶೀಲ್ದಾರ್‌ ಶಿವಮೂರ್ತಿ ಸ್ಪಷ್ಟಪಡಿಸಿದರು.

‘ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಮುಂಬೈ, ಬೆಂಗಳೂರಿನಿಂದ ಬಂದಿರುವವರ ಆರೋಗ್ಯ ತಪಾಸಣೆ ಮಾಡಿದ್ದಾರೆ. ಪ್ರತಿದಿನ ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಣೆ ಮಾಡುತ್ತಿದ್ದಾರೆ. ಗ್ರಾಮಸ್ಥರು ಆರೋಗ್ಯದಿಂದ ಇದ್ದಾರೆ’ ಎಂದರು.

ಪ್ರಕರಣ ದಾಖಲಿಸಲು ಸೂಚನೆ: ‘ಸುಳ್ಳು ಸುದ್ದಿ ಹರಡಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದೆ. ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿ ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಇಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಇಂತಹ ಸುದ್ದಿಗಳಿಗೆ ಕಿವಿಗೊಡಬಾರದು’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.