ಮಂಡ್ಯ: ‘ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ನೀಡಿರುವುದು ಆಘಾತ ತಂದಿದೆ. ಸರ್ಕಾರ ಈ ವಿಚಾರದಲ್ಲಿ ದಿಟ್ಟ ಕ್ರಮ ಕೈಗೊಳ್ಳಬೇಕು, ಮತ್ತೆ ನೀರು ಬಿಡುಗಡೆ ಮಾಡಿದರೆ ಮಂಡ್ಯ ಜಿಲ್ಲೆ ಬಂದ್ ಮಾಡಲಾಗುವುದು’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಬುಧವಾರ ಎಚ್ಚರಿಕೆ ನೀಡಿದರು.
ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಈಗಿನ ಹೋರಾಟಗಳು ಪರಿಣಾಮಕಾರಿಯಾಗಿಲ್ಲ. ಹೋರಾಟದ ಸ್ವರೂಪವೇ ಬದಲಾಗಬೇಕು. ರೈತರ ಹಿತಕ್ಕಾಗಿ, ಕುಡಿಯುವ ನೀರಿಗಾಗಿ ದೊಡ್ಡ ಮಟ್ಟದ ಚಳವಳಿ ರೂಪಿಸಲು ಜಿಲ್ಲೆಯ ಎಲ್ಲಾ ಸಂಘಟನೆಗಳೊಂದಿಗೆ ಸಭೆ ನಡೆಸಲಾಗುವುದು’ ಎಂದರು.
‘ಅಣೆಕಟ್ಟೆಯಲ್ಲಿ ಸಂಗ್ರಹವಿರುವ ನೀರು, ಈಗಿನ ವಸ್ತುಸ್ಥಿತಿಯನ್ನು ಮನವರಿಕೆ ಮಾಡುವಲ್ಲಿ ನಾವು ವಿಫಲರಾಗಿದ್ದೇವೆ. ಸಮಿತಿ ಯಾವ ಆಧಾರದಲ್ಲಿ ಮತ್ತೆ ನೀರು ಬಿಡಲು ಶಿಫಾರಸು ಮಾಡಿದೆ ಎಂಬುದೇ ಸೋಜಿಗ. ಕುಡಿಯುವ ನೀರಿಗೆ ಮೊದಲ ಆದ್ಯತೆ ಕೊಡಬೇಕು ಎಂದು ಸುಪ್ರೀಂ ಕೋರ್ಟ್ ಹಲವು ಬಾರಿ ಆದೇಶಿಸಿದೆ. ಇಷ್ಟಾದರೂ ಸಮಿತಿ ಹೇಗೆ ಶಿಫಾರಸು ಮಾಡುತ್ತದೆ’ ಎಂದು ಪ್ರಶ್ನಿಸಿದರು.
ಹೋರಾಟ ಮುಂದುವರಿಕೆ: ‘ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿಲ್ಲ. ಹೀಗಾಗಿ ಕಾವೇರಿ ಹೋರಾಟ ಮುಂದುವರಿಸಲಾಗುವುದು’ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರು ತಿಳಿಸಿದ್ದಾರೆ.
‘ಕಾನೂನು ತಜ್ಞರೊಡನೆ ಮಾತನಾಡಿ ಕ್ರಮ ಕೈಗೊಳ್ಳುತ್ತೇವೆ ಎಂದಷ್ಟೇ ಮುಖ್ಯಮಂತ್ರಿಗಳು ಹೇಳಿದ್ದಾರೆ. ಮುಂದೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇದೆ. ಸೆ.21ರಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ಎಲ್ಲಾ ವಿಚಾರ ಪರಿಗಣಿಸಿ ಹೋರಾಟ ಮುಂದುವರಿಸಲಾಗುವುದು’ ಎಂದು ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ ತಿಳಿಸಿದರು.
ಸಮಿತಿಯ ಶಿಫಾರಸು ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು. ಜೆ.ಸಿ.ವೃತ್ತದಲ್ಲಿ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಗಡಿ ಬಂದ್ ಚಳವಳಿ
ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸು ಖಂಡಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ತಾಲ್ಲೂಕಿನ ಪುಣಜನೂರಿನಲ್ಲಿ ಬುಧವಾರ ಗಡಿ ಬಂದ್ ಚಳವಳಿ ನಡೆಸಿದರು.
‘ರಾಜ್ಯ ಸರ್ಕಾರ ತಮಿಳುನಾಡಿನ ಒತ್ತಡಕ್ಕೆ ಮಣಿಯಬಾರದು ಸಮಿತಿಯ ಶಿಫಾರಸು ಪಾಲಿಸಬಾರದು’ ಎಂದು ಆಗ್ರಹಿಸಿದರು.
ಅಂತರರಾಜ್ಯ ಹೆದ್ದಾರಿಯಲ್ಲಿ ಸಂಚಾರ ತಡೆದು ಪ್ರತಿಭಟಿಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದರು.
ಬೀಗ ಹಾಕಿ: ‘ತಮಿಳುನಾಡಿಗೆ ನೀರು ಹರಿಸಲು ಶಿಫಾರಸು ಮಾಡಿರುವ ಕಾವೇರಿ ನೀರು ನಿಯಂತ್ರಣ ಸಮಿತಿಯ ಕಚೇರಿಗೆ ಬೀಗ ಹಾಕಬೇಕು’ ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಸದಸ್ಯರು ಮೈಸೂರಿನಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.