ಸೋಮವಾರ, ಸೆಪ್ಟೆಂಬರ್ 27, 2021
22 °C
ಕೊಲ್ಲಿ ಸರ್ಕಲ್, ಹೊಳೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕೋಳಿ ತ್ಯಾಜ್ಯದ ರಾಶಿ

ಕೋಳಿ ತ್ಯಾಜ್ಯ ಎಸೆಯುವ ಪುರಸಭೆ ಸಿಬ್ಬಂದಿ

ಎಂ.ಆರ್‌.ಅಶೋಕ್‌ ಕುಮಾರ್‌ Updated:

ಅಕ್ಷರ ಗಾತ್ರ : | |

Prajavani

ಮದ್ದೂರು: ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕಿದ್ದ ಪುರಸಭೆ ಸಿಬ್ಬಂದಿಯೇ ಕೋಳಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುತ್ತಿದ್ದಾರೆ. ಈ ತ್ಯಾಜ್ಯ ಕೊಳೆತು ದುರ್ವಾಸನೆ ಬೀರುತ್ತಿದ್ದು, ಈ ಭಾಗದಲ್ಲಿ ಜನರು ಸಂಚರಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ಕೋಳಿ ಅಂಗಡಿಗಳ ತ್ಯಾಜ್ಯವನ್ನು ಪುರಸಭೆ ಸಿಬ್ಬಂದಿ ಸಂಗ್ರಹಿಸುತ್ತಾರೆ. ಇದಕ್ಕೆಂದೇ ಪ್ರತ್ಯೇಕ ವಾಹನವೂ ಇದೆ. ಸಂಗ್ರಹಿಸಿದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಆದರೆ, ಪುರಸಭೆ ಸಿಬ್ಬಂದಿಯು ಕೋಳಿ ತ್ಯಾಜ್ಯವನ್ನು ಪಟ್ಟಣದ ಮೈಸೂರು– ಬೆಂಗಳೂರು ಹೆದ್ದಾರಿಯ ಕೊಲ್ಲಿ ಸರ್ಕಲ್ ಬಳಿ ಹಾಗೂ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗುವ ರಸ್ತೆಯ ಖಾಲಿ ಜಾಗಗಳಲ್ಲಿ ಸುರಿಯುತ್ತಿದ್ದಾರೆ.

ನಾಯಿಗಳ ಹಾವಳಿ: ಅನೇಕ ವರ್ಷಗಳಿಂದ ಕೋಳಿ ತ್ಯಾಜ್ಯವನ್ನು ಸುರಿಯಲಾಗುತ್ತಿದೆ. ಕೋಳಿ ಕಾಲುಗಳು, ಕರುಳು ಸೇರಿದಂತೆ ಅನೇಕ ತ್ಯಾಜ್ಯವನ್ನು ಹಾಕುತ್ತಿದ್ದಾರೆ. ಇದನ್ನು ತಿನ್ನಲು ನಾಯಿಗಳು ಮುಗಿಬೀಳುತ್ತವೆ. ಮಾಂಸದ ರುಚಿ ನೋಡಿರುವ ನಾಯಿ ಗಳು ಜಾನುವಾರು, ಜನರ ಮೇಲೆ ದಾಳಿ ಮಾಡುತ್ತವೆ. ಕುರಿಗಳ ಮೇಲೆ ದಾಳಿ ನಡೆಸಿ ಕೊಂದಿರುವ ಉದಾಹರಣೆ ಇದೆ.

ಪಟ್ಟಣದಲ್ಲಿ ಕಸ ಸಂಗ್ರಹ ಹಾಗೂ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿದೆ. ಪ್ರತಿ ಬಡಾವಣೆಯಲ್ಲೂ ವಾಹನದಲ್ಲಿ ಬಂದು ಕಸ ಸಂಗ್ರಹ ಮಾಡಿಕೊಂಡು ಹೋಗುತ್ತಿದ್ದಾರೆ. ಆದರೆ, ಕೋಳಿ ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ಪುರಸಭೆ ಎಡವಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಹ ಪರಿಸ್ಥಿತಿ ಪುರಸಭೆಗೆ ಬಂದಿದೆ. ಈ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದಿದ್ದರೆ ಪರಿಸರ ಹಾಗೂ ಜನರಿಗೆ ತೀವ್ರ ತೊಂದರೆ ಉಂಟಾಗುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಸ್ಥಳೀಯ ನಿವಾಸಿ ವೆಂಕಟೇಶ್ ಪೂಜಾರಿ ಆಗ್ರಹಿಸಿದ್ದಾರೆ.

ಕೆ.ಜಿ.ಗಟ್ಟಲೆ ಕೋಳಿ ತ್ಯಾಜ್ಯವನ್ನು ಸುರಿಯಲಾಗುತ್ತಿದೆ. ಕೊಳೆತು ನಾರುತ್ತಿರುವುದರಿಂದ ಈ ರಸ್ತೆಗಳಲ್ಲಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕಿ.ಮೀ. ದೂರದವರೆಗೆ ವಾಸನೆ ಬರುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಶಾಶ್ವತ ಪರಿಹಾರಕ್ಕೆ ಕ್ರಮ

ಪಟ್ಟಣದ ಕೆಲವೆಡೆ ಕೋಳಿ ತ್ಯಾಜ್ಯ ಎಸೆಯುತ್ತಿರುವ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದಾರೆ. ಕೋಳಿ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡ ಬೇಕಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗು ವುದು. ಈಗ ಎಸೆದಿರುವ ತ್ಯಾಜ್ಯವನ್ನು ತಾತ್ಕಾಲಿಕವಾಗಿ ತೆರವುಗೊಳಿಸಲು ಕ್ರಮ ಕೈಗೊಳ್ಳುತ್ತೇನೆ’ ಎಂದು ಪುರಸಭೆ ಮುಖ್ಯಾಧಿಕಾರಿ ನಟರಾಜ್‌ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು