ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾರಂಟಿ ಸಮಾವೇಶ: 10ರಂದು ಮಂಡ್ಯಕ್ಕೆ ಸಿಎಂ

ಮಂಡ್ಯ ವಿವಿ ಆವರಣದದಲ್ಲಿ ಕಾರ್ಯಕ್ರಮ; ಅಗತ್ಯ ಸಿದ್ಧತೆಗೆ ಸಚಿವ ಚಲುವರಾಯಸ್ವಾಮಿ ಸೂಚನೆ
Published 4 ಮಾರ್ಚ್ 2024, 13:59 IST
Last Updated 4 ಮಾರ್ಚ್ 2024, 13:59 IST
ಅಕ್ಷರ ಗಾತ್ರ

ಮಂಡ್ಯ: ‘ನಗರದ ಮಂಡ್ಯ ವಿವಿ ಆವರಣದಲ್ಲಿ ಮಾರ್ಚ್‌ 10ರಂದು ಗ್ಯಾರಂಟಿ ಯೋಜನೆಗಳ ಬೃಹತ್‌ ಜಾಗೃತಿ ಸಮಾವೇಶ ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಅವರು ನಗರಕ್ಕೆ ಬಂದು ಹೋಗಲು ಅಧಿಕಾರಿಗಳು ಅಗತ್ಯ ಬಸ್‌ ವ್ಯವಸ್ಥೆ ಮಾಡಬೇಕು. ಎಲ್ಲಾ ತಹಶೀಲ್ದಾರ್‌ಗಳು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಸಭೆ ನಡೆಸಿ ಕಾರ್ಯಸೂಚಿ ರೂಪಿಸಿಕೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಬೇಕು. ಸ್ಥಳೀಯ ಅಧಿಕಾರಿಗಳಿಗೆ ವಿವಿಧ ಜವಾಬ್ದಾರಿ ನೀಡಬೇಕು’ ಎಂದು ಹೇಳಿದರು.

‘ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು, ಬೇಸಿಗೆ ತಾಪ ಹೆಚ್ಚಿದ್ದು, ಕುಡಿಯುವ ನೀರು ಹಾಗೂ ನೆರಳಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು. ತಾತ್ಕಾಲಿಕ ಶೌಚಾಲಯದ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮ ಮುಗಿದ ನಂತರ ಯಾವುದೇ ನೂಕು ನುಗ್ಗಲು ಉಂಟಾಗದಂತೆ ಸೂಕ್ತ ರೀತಿಯಲ್ಲಿ ಊಟದ ವ್ಯವಸ್ಥೆ ಮಾಡಬೇಕು. ಇದಕ್ಕೆ 100 ಅಥವಾ ಅವಶ್ಯಕತೆ ಇರುವಷ್ಟು ಕೌಂಟರ್ ತೆರೆದು ಊಟ ವಿತರಣೆ ಮಾಡಬೇಕು’ ಎಂದರು.

‘ಕಾರ್ಯಕ್ರಮದ ವೀಕ್ಷಣೆಗೆ ಅಲ್ಲಲ್ಲಿ ಎಲ್‌ಇಡಿ ಪರದೆಗಳನ್ನು ಅಳವಡಿಸಬೇಕು, ಧ್ವನಿ ವರ್ಧಕಗಳು ಉತ್ತಮವಾಗಿರಬೇಕು. ಯಾವುದೇ ತೊಂದರೆ ಉಂಟಾಗದಂತೆ ಧ್ವನಿವರ್ಧಕಗಳನ್ನು ಮೊದಲೇ ಪರೀಕ್ಷೆ ಮಾಡಿಕೊಂಡು ಸಿದ್ಧಪಡಿಸಿಕೊಳ್ಳಬೇಕು. ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು’ ಎಂದರು.

ಜಿಲ್ಲಾಧಿಕಾರಿ ಕುಮಾರ ಮಾತನಾಡಿ ‘ಮುಖ್ಯಮಂತ್ರಿ ಭಾಗವಹಿಸುತ್ತಿರುವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲು ಉತ್ತಮ ವೇದಿಕೆ ಸಿದ್ಧಪಡಿಸಲಾಗುವುದು. ಆಹಾರ, ಸಾರಿಗೆ ಹಾಗೂ ಫಲಾನುಭವಿಗಳ ಕರೆತರುವ ಸಂಬಂಧ ಪ್ರತ್ಯೇಕ ಸಮಿತಿ ರಚಿಸಲಾಗಿದೆ. ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಲು ತಾಲ್ಲೂಕಿಗೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ’ ಎಂದರು.

ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಅಧ್ಯಕ್ಷ, ಶಾಸಕ ರಮೇಶ್ ಬಂಡಿಸಿದ್ದೇಗೌಡ, ಶಾಸಕ ಪಿ.ರವಿಕುಮಾರ್, ಪಿ.ಎಂ.ನರೇಂದ್ರಸ್ವಾಮಿ, ಕೆ.ಎಂ.ಉದಯ್, ದರ್ಶನ್ ಪುಟ್ಟಣ್ಣಯ್ಯ, ಮೈಷುಗರ್‌ ಅಧ್ಯಕ್ಷ ಸಿ.ಡಿ.ಗಂಗಾಧರ್‌ ಇದ್ದರು.

ಬರ; ವರದಿ ಸಲ್ಲಿಸಲು ಸೂಚನೆ

‘ಬರ ಪರಿಸ್ಥಿತಿ ಕುರಿತಂತೆ ಶಾಸಕರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಟಾಸ್ಕ್ ಫೋರ್ಸ್‌ ಸಮಿತಿ ಸಭೆ ನಡೆಸಿ ಮಾರ್ಚ್‌ 10ರೊಳಗೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಬೇಕು’ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು.

‘ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ನಂತರ ಸಭೆ ನಡೆಸಲು ಸಾಧ್ಯವಾಗುವುದಿಲ್ಲ. ಅಧಿಕಾರಿಗಳು ಏಪ್ರಿಲ್ ಮೇ ತಿಂಗಳಲ್ಲಿ ಉಂಟಾಗುವ ಬರ ಪರಿಸ್ಥಿತಿ ಕುರಿತಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕೊಳವೆ ಬಾವಿ ಕೊರೆಯುವ ಮೊದಲು ಅಗತ್ಯ ಇರುವ ಸ್ಥಳ ಗುರುತಿಸಬೇಕು. ಅನಗತ್ಯವಾಗಿ ಹಣ ಪೋಲು ಮಾಡಬಾರದು’ ಎಂದರು.

‘ಲಭ್ಯವಿರುವ ಕೊಳವೆಬಾವಿಗಳಲ್ಲಿ ನೀರು ದೊರೆಯದ ಸಂದರ್ಭದಲ್ಲಿ ಖಾಸಗಿ ಕೊಳವೆಬಾವಿಗಳಿಂದ ನೀರು ಪಡೆಯಬೇಕು. ತೀವ್ರ ಕೊರತೆ ಇರುವ ಸಂದರ್ಭಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಬೇಕು. ಬಿಡುಗಡೆಯಾಗಿರುವ ಅನುದಾನವನ್ನು ಮಾರ್ಚ್‌15 ರೊಳಗೆ ವೆಚ್ಚ ಮಾಡಿ ಶೇ 100ರಷ್ಟು ಸಾಧನೆ ಮಾಡಬೇಕು ಜಿ.ಪಂ ಸಿಇಒ ನಿಗಾವಹಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT