ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮುಖಂಡರ ಪ್ರತಿಭಟನೆ

ಹಾಥರಸ್‌ ಜಿಲ್ಲೆಯಲ್ಲಿ ನಡೆದ ಘಟನೆ, ಡಿಕೆಶಿ ಮನೆ ಮೇಲೆ ಸಿಬಿಐ ದಾಳಿಗೆ ಖಂಡನೆ
Last Updated 6 ಅಕ್ಟೋಬರ್ 2020, 11:09 IST
ಅಕ್ಷರ ಗಾತ್ರ

ಮಂಡ್ಯ: ಉತ್ತರ ಪ್ರದೇಶದ ಹಾಥರಸ್‌ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಕಚೇರಿಯಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ಅಂಬೇಡ್ಕರ್‌ ಪ್ರತಿಮೆ ಮುಂದೆ ಜಮಾಯಿಸಿದರು. ಉತ್ತರ ಪ್ರದೇಶ, ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಪ್ರದೇಶ ಸರ್ಕಾರ ಅತ್ಯಾಚಾರ, ಕೊಲೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಸಂತ್ರಸ್ತೆಯ ಕುಟುಂಬದವರ ಮೇಲೆಯೇ ದಬ್ಬಾಳಿಕೆ, ದೌರ್ಜನ್ಯ ನಡೆಸಿದ್ದಾರೆ. ಆರೋಪಿಗಳ ರಕ್ಷಣೆಯಲ್ಲಿ ಸರ್ಕಾರವೇ ಪ್ರಮುಖ ಪಾತ್ರ ವಹಿಸಿದ್ದು, ಕೂಡಲೇ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು. ಕುಟುಂಬದವರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಉಪ ಚುನಾವಣೆಯಲ್ಲಿ ಸೋಲುವ ಭಯದಿಂದ ಬಿಜೆಪಿ ಸರ್ಕಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮನೆಯ ಮೇಲೆ ಸಿಬಿಐ ದಾಳಿ ನಡೆಸುವ ಮೂಲಕ ದ್ವೇಷ ರಾಜಕಾರಣ ಮಾಡಲಾಗುತ್ತಿದೆ. ಸರ್ಕಾರಿ ಇಲಾಖೆಗಳನ್ನು ದುರುಪಯೋಗ ಪಡಿಸಿಕೊಂಡು ಹೆದರಿಸುವ ತಂತ್ರ ರೂಪಿಸುತ್ತಿದ್ದಾರೆ. ಈ ಹಿಂದೆ ಯಾವ ಸರ್ಕಾರಗಳು ಈ ರೀತಿ ಸರ್ಕಾರಿ ಅಧಿಕಾರಿಗಳನ್ನು ದುರುಪಯೋಗ ಮಾಡಿರಲಿಲ್ಲ ಎಂದು ಆರೋಪಿಸಿದರು.

ನಮ್ಮ ಪಕ್ಷದ ಕಾರ್ಯಕರ್ತರು ಅಧ್ಯಕ್ಷರೊಂದಿಗೆ ಇದ್ದು, ಅವರು ಯಾವುದಕ್ಕೂ ಅಂಜುವುದಿಲ್ಲ. ಕೊರೊನಾ ನಿಯಂತ್ರಣ ಸೇರಿದಂತೆ ವಿವಿಧ ವಿಷಯಗಳಲ್ಲಿ ಸಚಿವರುಗಳು ಸಂಪೂರ್ಣ ವಿಫಲವಾಗಿದ್ದು, ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಈ ಬಾರಿಯ ಉಪಚುನಾವಣೆಯಲ್ಲಿ ಖಂಡಿತವಾಗಿ ಜನರು ಸೋಲಿಸಲಿದ್ದಾರೆ. ಇದಕ್ಕೆಲ್ಲಾ ತಕ್ಕ ಉತ್ತರ ನೀಡಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್‌, ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್‌, ಮುಖಂಡರಾದ ಸಿದ್ದರಾಮೇಗೌಡ, ವಿಜಯಲಕ್ಷ್ಮಿ ರಘುನಂದನ್‌, ಪಲ್ಲವಿ, ರಾಮಲಿಂಗಯ್ಯ, ಶ್ರೀಧರ್‌, ಸಿ.ಎಂ.ದ್ಯಾವಪ್ಪ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಭಿಮಾನಿಗಳ ಪ್ರತಿಭಟನೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಸದಸ್ಯರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಮುಖಂಡರಾದ ಚಿದಂಬರ್, ಕಿರಣ್, ಪ್ರಶಾಂತ್, ಶಿವರಾಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT