ಮಂಡ್ಯ: ‘ಜಲಜೀವನ ಮಿಷನ್ ಯೋಜನೆಯಡಿ ಜಿಲ್ಲೆಯಾದ್ಯಂತ ಕೈಗೊಂಡಿರುವ ಕಾಮಗಾರಿಗಳನ್ನು ಅಧಿಕಾರಿಗಳು ಆದಷ್ಟು ಬೇಗ ಪೂರ್ಣಗೊಳಿಸಬೇಕು’ ಎಂದು ಸಂಸದೆ ಸುಮಲತಾ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ‘ದಿಶಾ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಜಲಜೀವನ್ ಮಿಷನ್ ಯೋಜನೆಯಡಿ 3 ಹಂತದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಕೆಲವು ಕಾಮಗಾರಿಗಳನ್ನು ಗುತ್ತಿಗೆದಾರರು ಪೂರ್ಣಗೊಳಿಸದೇ ಅರ್ಧಕ್ಕೆ ಬಿಟ್ಟಿರುವವರನ್ನು ಕಪ್ಪು ಪಟ್ಟಿಗೆ ಸೇರಿಸಬೇಕ’ ಎಂದು ಸೂಚಿಸಿದರು.
‘ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತವಾಗುತ್ತಿದ್ದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸುರಕ್ಷತೆಗೆ ಆದ್ಯತೆ ನೀಡಬೇಕು. ರಸ್ತೆ ದೀಪಗಳು, ಸೂಚನಾ ಪಲಕಗಳು ಹೆಚ್ಚಿಸುವ ಕುರಿತು ಈಗಾಗಲೇ ಸೂಚನೆ ನೀಡಲಾಗಿದೆ. ಕೂಡಲೇ ಅವುಗಳನ್ನು ಅನುಷ್ಠಾನವಾಗಬೇಕು’ ಎಂದು ಹೇಳಿದರು.
‘ಹೆದ್ದಾರಿ ಕುರಿತಂತೆ ಜನರಿಂದ ಟೋಲ್ ಸಂಗ್ರಹಣೆ ಮಾಡಲಾಗುತ್ತಿತ್ತು, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಒಪ್ಪಿಕೊಂಡಿರುವ ಎಲ್ಲಾ ಕಾಮಗಾರಿಗಳು ಹಾಗೂ ಸೌಲಭ್ಯಗಳನ್ನು ಒದಗಿಸಬೇಕು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕುರಿತಂತೆ ಚರ್ಚಿಸಲಾಗಿರುವ ವಿಷಯಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡಬೇಕು’ ಎಂದು ಸೂಚಿಸಿದರು.
‘ಬೆಳೆದು ನಿಂತಿರುವ ಬೆಳೆಗಳಿಗೆ ಕೆಆರ್‌ಎಸ್ ಜಲಾಶಯದಿಂದ ನೀರು ಹರಿಸಲು ಸಾಧ್ಯವೇ’ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳನ್ನು ಸಂಸದರು ಪ್ರಶ್ನಿಸಿದುರ.
ಕಾವೇರಿ ನೀರಾವರಿ ನಿಗಮ ನಿಯಮಿತದ ಅಧೀಕ್ಷಕ ಎಂಜಿನಿಯರ್ ಮಾತನಾಡಿ ‘ಪರಿಸ್ಥಿತಿಯಲ್ಲಿ ಮಳೆಯ ಅಭಾವ ಉಂಟಾದರೆ ಜುಲೈ ಅಂತ್ಯದವರೆಗೆ ಮಾತ್ರ ಬೆಳೆಗಳಿಗೆ ನೀರು ಒದಗಿಸಲು ಸಾಧ್ಯ. ನೀರಾವರಿ ಸಲಹಾ ಸಮಿತಿಗೆ ಮಾಹಿತಿ ನೀಡಲು ಕೃಷಿ, ನೀರಾವರಿ ಹಾಗೂ ಕಂದಾಯ ಇಲಾಖೆ ಒಟ್ಟಿಗೆ ಸಮೀಕ್ಷೆ ನಡೆಸಿ ವರದಿ ನೀಡಲಿದೆ’ ಎಂದರು.
ಸಭೆಯಲ್ಲಿ ಮಂಡ್ಯ ಶಾಸಕ ಗಣಿಗ ಪಿ ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಅರಣ್ಯ ಅಧಿಕಾರಿ ರುದ್ರನ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.