ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಸೆಸ್‌ ವರ್ಗಾವಣೆ, ಕಟ್ಟಡ ಕಾರ್ಮಿಕರ ಪ್ರತಿಭಟನೆ

Last Updated 23 ಸೆಪ್ಟೆಂಬರ್ 2022, 14:01 IST
ಅಕ್ಷರ ಗಾತ್ರ

ಮಂಡ್ಯ: ಕೊಳಚೆ ನಿರ್ಮೂಲನಾ ಮಂಡಳಿಗೆ ಕಾರ್ಮಿಕರ ಕಲ್ಯಾಣ ಮಂಡಳಿ ಸೆಸ್‌ ಹಣವನ್ನು ವರ್ಗಾಹಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ ಕಾರ್ಯಕರ್ತರು ನಗರದ ಜಿಲ್ಲಾ ಕಾರ್ಮಿಕ ಇಲಾಖೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಕಾರ್ಮಿಕ ಇಲಾಖೆ ಎದುರು ಜಮಾಯಿಸಿದ ಕಾರ್ಯಕರ್ತರು ಬೇಡಿಕೆ ಈಡೇರಿಕೆಗೆ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಸತಿ ಯೋಜನೆಗಳ ಲಾಭ ಕಾರ್ಮಿಕರಿಗೆ ಸಮರ್ಪಕವಾಗಿ ಸಿಗಬೇಕು. ಕೊಳಚೆ ನಿರ್ಮೂಲನಾ ಮಂಡಳಿ ಸೇರಿ ಇತರೆ ವಸತಿ ಯೋಜನೆಗಳ ಫಲಾನುಭವಿಗಳನ್ನು ಕರ್ನಾಟಕ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಗೆ ಫಲಾನುಭವಿಗಳನ್ನಾಗಿ ನೋಂದಾಯಿಸುವ ಕ್ರಮವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಕೊಳಚೆ ನಿರ್ಮೂಲನಾ ಮಂಡಳಿಗೆ ಪಾವತಿಸಲಾದ ₹76 ಸಾವಿರ ಕೋಟಿ ಹಣವನ್ನು ಕೂಡಲೇ ಮಂಡಳಿ ಖಾತೆಗೆ ವಾಪಸ್‌ ಪಡೆಯಲು ಅಗತ್ಯ ಕ್ರಮ ವಹಿಸಬೇಕು. ಮಂಡಳಿಯಿಂದ ಜಾರಿಯಲ್ಲಿರುವ ಸಿಜಿಎಚ್‌ ಆಧಾರಿತ ವೈದ್ಯಕೀಯ ಮರುಪಾವತಿ ಯೋಜನೆ ರದ್ದು ಮಾಡಿ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ ಕುಟುಂಬದವರಿಗೆ ರಾಜ್ಯ ಸರ್ಕಾರದ ‘ಆರೋಗ್ಯ ಸಂಜೀವಿನಿ’ ನಗದು ರಹಿತ ಸಹಿತ ಸೇವೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಮಂಡಳಿಯಲ್ಲಿ ನೈಜ ಕಾರ್ಮಿಕರಿಗೆ ಪ್ರಾತಿನಿಧ್ಯ ಸಿಗಬೇಕು. 1996ರ ಕಟ್ಟಡ ಕಾರ್ಮಿಕ ಕಾನೂನು ಜಾರಿ, ಮಂಡಳಿ ರಚನೆ ಮತ್ತು ಸೆಸ್‌ ಸಂಗ್ರಹ, ಕಾರ್ಮಿಕ ನೋಂದಣಿ ಸೇರಿದಂತೆ ಇತರೆ ವಿಷಯಗಳ ಕುರಿತು ಕಾರ್ಮಿಕರಲ್ಲಿ ಜಾಗೃತಿ ಮೂಡಿಸಬೇಕು. ವಿವಿಧ ಸಹಾಯ ಧನಕ್ಕಾಗಿ ಕೋರಿ ಸಲ್ಲಿಕೆಯಾಗುತ್ತಿರುವ ಅರ್ಜಿಗಳ ವಿಲೇವಾರಿ ವಿಳಂಬ ಆಗುತ್ತಿರುವುದನ್ನು ಸರಿಪಡಿಸಬೇಕು ಎಂದು ಆಗ್ರಹ ಪಡಿಸಿದರು.

ಮುಖಂಡರಾದ ಸಿ.ಕುಮಾರಿ, ಶ್ರೀನಿವಾಸ್, ಶಿವಕುಮಾರ್, ನಿಂಗರಾಜು, ಉಮೇಶ್, ಗಂಗರಾಜು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT