ಸೋಮವಾರ, ಜೂನ್ 1, 2020
27 °C

ಕೋವಿಡ್‌-19: ಖಾಸಗಿ ಆಸ್ಪತ್ರೆ, ಕ್ಲಿನಿಕ್‌ ತೆರೆಯುವಂತೆ ಶ್ರೀರಾಮುಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ‘ಕೊರೊನಾ ಸೋಂಕಿನ ಭೀತಿಯಿಂದ ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳು ಬಂದ್‌ ಆಗಿವೆ. ಇದರಿಂದ ಸರ್ಕಾರಿ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಾಗಿದೆ. ಪರಿಸ್ಥಿತಿಯನ್ನು ಅರಿತು ಖಾಸಗಿ ವೈದ್ಯರು ತಮ್ಮ ಆಸ್ಪತ್ರೆ, ಕ್ಲಿನಿಕ್‌ ತೆರೆದು ಸೇವೆ ನೀಡಬೇಕು’ ಎಂದು ಆರೋಗ್ಯ ಸಚಿವ ಶ್ರೀರಾಮುಲು ಶನಿವಾರ ಮನವಿ ಮಾಡಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ರಾಜ್ಯದಲ್ಲಿ ಕೋವಿಡ್‌– 19 ರೋಗಿಗಳ ಸಂಖ್ಯೆ 75ಕ್ಕೆ ಏರಿಕೆಯಾಗಿದ್ದು ಪರಿಸ್ಥಿತಿ ಆತಂಕಕಾರಿಯಾಗಿದೆ. ಸೋಂಕು 3ನೇ ಹಂತಕ್ಕೆ ತಲುಪದಂತೆ ಕಡಿವಾಣ ಹಾಕಬೇಕಾಗಿದೆ. ಎಲ್ಲಾ ಜಿಲ್ಲಾಸ್ಪತ್ರೆಗಳನ್ನು ಕೋವಿಡ್‌ –19 ಆಸ್ಪತ್ರೆಗಳನ್ನಾಗಿ ಮಾರ್ಪಾಡು ಮಾಡಲು ಸಿದ್ಧತೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳ ಒತ್ತಡ ತಪ್ಪಿಸಲು ಖಾಸಗಿ ಆಸ್ಪತ್ರೆ ವೈದ್ಯರು ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ನೀಡಬೇಕು’ ಎಂದು ಒತ್ತಾಯಿಸಿದರು.

‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಈಗಾಗಲೇ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರೊಂದಿಗೆ ಮಾತನಾಡಿ ಖಾಸಗಿ ಆಸ್ಪತ್ರೆ ತೆರೆಯುವಂತೆ ಮನವಿ ಮಾಡಿದ್ದಾರೆ. ಖಾಸಗಿ ವೈದ್ಯರ ಸುರಕ್ಷತೆಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ. ಕೂಡಲೇ ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಬೇಕು, ಕೊರೊನಾ ಸೋಂಕಿನ ಶಂಕೆ ಕಂಡುಬಂದರೆ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕಳುಹಿಸಬೇಕು’ ಎಂದು ಹೇಳಿದರು.

‘ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸೈನಿಕರ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ತಮ್ಮ ಪ್ರಾಣ ಒತ್ತೆ ಇಟ್ಟು ಸಾರ್ವಜನಿಕರ ಪ್ರಾಣ ಉಳಿಸುವ ಕೆಲಸ ಮಾಡುತ್ತಿದ್ದಾರೆ. ಜನರು ಅವರಿಗೆ ಯಾವುದೇ ತೊಂದರೆ ನೀಡಬಾರದು. ವೈದ್ಯರು, ನರ್ಸ್‌ಗಳನ್ನು ಬಾಡಿಗೆ ಮನೆಯಿಂದ ಖಾಲಿ ಮಾಡಿಸಬಾರದು. ಪೊಲೀಸರ ಮೇಲೆ ಹಲ್ಲೆ ಮಾಡಬಾರದು’ ಎಂದು ಮನವಿ ಮಾಡಿದರು.

ದೇವರಲ್ಲಿ ಪ್ರಾರ್ಥನೆ ಮಾಡಿದ ಸಚಿವ

ಕೈಮುಗಿಯುತ್ತಾ ಮಾತನಾಡಿದ ಸಚಿವ ಶ್ರೀರಾಮುಲು ‘ದೇವರ ದಯೆಯಿಂದ ಕೊರೊನಾ ಸೋಂಕು 3ನೇ ಹಂತ ತಲುಪದಿರಲಿ. ನಮಗೆ ಮುಂದಿನ ಎರಡು ವಾರ ಕಷ್ಟದ ಪರಿಸ್ಥಿತಿ ಇದೆ. ಜನರು ಲಕ್ಷ್ಮಣ ರೇಖೆ ದಾಟದೆ ಮನೆಯೊಳಗೆ ಇರಬೇಕು’ ಎಂದು ಮನವಿ ಮಾಡಿದರು.

ಶ್ರೀರಾಮುಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಕಚೇರಿ ಪ್ರವೇಶಿಸುವ ಮುನ್ನ ಸ್ಯಾನಿಟೈಸರ್‌ ಬಳಸಿದರು. ಸಾಮಾಜಿಕ ಅಂತರ ಕಾಯ್ದುಕೊಂಡು ಅಧಿಕಾರಿಗಳ ಸಭೆ ನಡೆಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು