ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ, ಸಾಮಾಜಿಕ ನ್ಯಾಯದ ಹರಿಕಾರ ‘ಅರಸು’: ಎನ್.ಚಲುವರಾಯಸ್ವಾಮಿ

Published 20 ಆಗಸ್ಟ್ 2023, 12:31 IST
Last Updated 20 ಆಗಸ್ಟ್ 2023, 12:31 IST
ಅಕ್ಷರ ಗಾತ್ರ

ಮಂಡ್ಯ: ‘ಶೋಷಿತರ ದನಿಯಾಗಿದ್ದ ಡಿ.ದೇವರಾಜ ಅರಸು ತಮ್ಮ ಅಧಿಕಾರಾವಧಿಯಲ್ಲಿ ಹಿಂದುಳಿದವರ, ದಲಿತರ, ಅಲ್ಪಸಂಖ್ಯಾತರ ಹಾಗೂ ಎಲ್ಲ ಸಮುದಾಯದ ಕೃಷಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದರು’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸ್ಮರಿಸಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಮತ್ತು ಎಲ್ಲ ಸಮುದಾಯದ ಕೃಷಿಕರ ಶ್ರೇಯೋಭಿವೃದ್ಧಿಗೆ ಸಾಮಾಜಿಕ ಪರಿವರ್ತನೆಯ ಹರಿಕಾರ ಡಿ.ದೇವರಾಜ ಅರಸು ತಮ್ಮ ಅಧಿಕಾರಾವಧಿಯಲ್ಲಿ ಶ್ರಮಿಸಿದ್ದರು, ಇವರ ಆಡಳಿತದ ಮಾದರಿಯಲ್ಲೇ ನಮ್ಮ ಕಾಂಗ್ರೆಸ್‌ ಸರ್ಕಾರವು ಕಾರ್ಯೋನ್ಮುಖವಾಗಿದೆ’ ಎಂದರು.

‘ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ಎರಡು ಬಾರಿ ನೀಡಿದ ಜನಪರ ಆಡಳಿತ ಮಾದರಿಯಾಗಿದೆ. ಇವರು ಶೋಷಿತರ ಧ್ವನಿಯಾಗಿದ್ದರು, ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡುವ ಮೂಲಕ ಕನ್ನಡದ ಬದ್ಧತೆ ಮೆರೆದರು. ಕನ್ನಡ ಭಾಷೆಯನ್ನು ಸಹ ಆಡಳಿತ ಭಾಷೆಯಾಗಿ ಮಾಡಿದರು. ನಿರುದ್ಯೋಗ ಭತ್ಯೆ, ಜೀತ ಪದ್ಧತಿ ನಿರ್ಮೂಲನೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ಹಲವು ಕಾರ್ಯಕ್ರಮಗಳು ಅರಸು ಅವರ ಸಾಮಾಜಿಕ ಬದ್ಧತೆ ತೋರುತ್ತದೆ’ ಎಂದು ವಿವರಿಸಿದರು.

ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆ.ಎನ್.ಲಿಂಗಪ್ಪ ಉಪನ್ಯಾಸ ನೀಡಿ, ‘ಎಲ್.ಜೆ.ಹಾವನೂರು ವರದಿಯ ಮೂಲಕ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ನೀಡಿದವರು ಡಿ.ದೇವರಾಜು ಅರಸು, ‌ರಾಜಕೀಯವಾಗಿ ಅತೀ ಹಿಂದುಳಿದ ಸಮುದಾಯಗಳಿಗೆ ಶಕ್ತಿ ನೀಡುವ ಕೆಲಸವನ್ನು ಮಾಡಿದ ಕೀರ್ತಿ ಇವರಿಗೆ ಸಲ್ಲಬೇಕು. ಎಲ್ಲಾ ಜಾತಿಯ ಬಡವರ ಶ್ರೋಯೋಭಿವೃದ್ಧಿಗಾಗಿ 20 ಅಂಶಗಳ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದರು’ ಎಂದು ಶ್ಲಾಘಿಸಿದರು.

ಎಸ್ಸೆಸ್ಸೆಲ್ಸಿ ಹಾಗೂ ಪದವಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಡಿ.ದೇವರಾಜ ಅರಸು ಅವರ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿಯಿಂದ ಅಂಬೇಡ್ಕರ್ ಭವನದವರೆಗೆ ವಿವಿಧ ಕಲಾತಂಡಗಳೊಡನೆ ಅರಸು ಭಾವಚಿತ್ರವನ್ನು ಬೆಳ್ಳಿ ರಥದಲ್ಲಿರಿಸಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಶಾಸಕ ಪಿ.ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿ.ಪಂ.ಸಿಇಒ ಶೇಖ್ ತನ್ವೀರ್ ಆಸಿಫ್, ಉಪವಿಭಾಗಾಧಿಕಾರಿ ಶಿವಮೂರ್ತಿ, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀನಿವಾಸ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆಯ ಅಧ್ಯಕ್ಷ ಎಲ್.ಸಂದೇಶ್, ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್, ಮುಖಂಡರಾದ ಸಿ.ಸಿದ್ದಶೆಟ್ಟಿ, ಪ್ರತಾಪ್, ಡಿ.ರಮೇಶ್, ರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT