ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಾರಸ್ವಾಮಿ ಆಯ್ಕೆಯಿಂದ ಅಭಿವೃದ್ಧಿ ಪರ್ವ: ಅನ್ನದಾನಿ

Published 11 ಏಪ್ರಿಲ್ 2024, 13:21 IST
Last Updated 11 ಏಪ್ರಿಲ್ 2024, 13:21 IST
ಅಕ್ಷರ ಗಾತ್ರ

ಮಳವಳ್ಳಿ: ಜಿಲ್ಲೆಯಿಂದ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪರ್ಧಿಸಿರುವುದು ಜಿಲ್ಲೆಯ ಭಾಗ್ಯದ ಬಾಗಿಲು ತೆರದಂತಾಗಿದೆ. ಅವರ ಗೆಲುವಿನ ಮೂಲಕ ಅಭಿವೃದ್ಧಿಯ ಹೊಸ ಪರ್ವ ಆರಂಭವಾಗಲಿದೆ ಎಂದು ಜೆಡಿಎಸ್ ಎಸ್ಸಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಕೆ.ಅನ್ನದಾನಿ ಹೇಳಿದರು.

ತಾಲ್ಲೂಕಿನ ಕಂದೇಗಾಲ, ಅಂಚೆದೊಡ್ಡಿ, ನೆಲಮಾಕನಹಳ್ಳಿ, ನಿಡಘಟ್ಟ, ತಳಗವಾದಿ, ದುಗ್ಗನಹಳ್ಳಿ, ಹಿಟ್ಟನಹಳ್ಳಿಕೊಪ್ಪಲು ಸೇರಿದಂತೆ ವಿವಿಧೆಡೆ ಗುರುವಾರ ಲೋಕಸಭೆ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು.

ಕೇಂದ್ರದಲ್ಲಿ ಮತ್ತೊಮ್ಮೆ ಎನ್‌ಡಿಎ ಸರ್ಕಾರ ರಚನೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ಎಚ್.ಡಿ.ಕುಮಾರಸ್ವಾಮಿ ಕೃಷಿ ಸಚಿವರಾಗಿ ಕಾವೇರಿ ನೀರಿನ ಸಮಸ್ಯೆ ಬಗೆಹರಿಸುವುದರ ಜೊತೆಗೆ ಮೇಕೆದಾಟು ಯೋಜನೆಗೆ ಚಾಲನೆ ನೀಡಲಿದ್ದಾರೆ. ರೈತರ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ. ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಮಾಡಿದ್ದ ಅವರನ್ನು ಕಾಂಗ್ರೆಸ್ ಕಾರ್ಯಕರ್ತರೂ  ಬೆಂಬಲಿಸುವ ಮೂಲಕ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ರಾಜ್ಯ ಸರ್ಕಾರ ಕೆಆರ್‌ಎಸ್ ಜಲಾಶಯದಲ್ಲಿ 86 ಅಡಿ ನೀರಿದ್ದರೂ ರೈತರಿಗೆ ನೀರು ಕೊಡದೇ ಮೋಸ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಕಾಂಗ್ರೆಸ್ ಮೋಸ ಮಾಡುತ್ತಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮೋಸ ಮಾಡಿದ ಕಾಂಗ್ರೆಸ್ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಕೇವಲ ನಾಮ್‌ ಕೇ ವಾಸ್ತೆ  ಎಐಸಿಸಿ ಅಧ್ಯಕ್ಷರನ್ನಾಗಿ ಮಾಡಿದೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಬಂದು 11 ತಿಂಗಳು ಕಳೆದರೂ ಕ್ಷೇತ್ರಕ್ಕೆ ಯಾವುದೇ ಯೋಜನೆ ಬಂದಿಲ್ಲ, ಇಲ್ಲಿನ ಶಾಸಕರು ನನ್ನ ಅವಧಿಯಲ್ಲಿ ತಂದಿದ್ದ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಬಿ.ರವಿ ಕಂಸಾಗರ ಮಾತನಾಡಿ, ಎರಡು ಬಾರಿ ಮುಖ್ಯಮಂತ್ರಿಯಾಗಿ ರೈತರ ಸಾಲಮನ್ನಾ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿ ಮಾಡಿದ್ದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜನರು ಗೆಲ್ಲಿಸಬೇಕಿದೆ ಎಂದರು. ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಎಂ.ವಿಶ್ವನಾಥ್ ಮಾತನಾಡಿ, ಗ್ಯಾರಂಟಿ ಯೋಜನೆಗಳು ಉಳ್ಳವರ ಪರವಾಗಿದ್ದು, ಈ ಚುನಾವಣೆಯ ನಂತರ ಯೋಜನೆಗಳು ಸ್ಥಗಿತಗೊಂಡರೂ ಅಚ್ಚರಿ ಇಲ್ಲ ಎಂದು ಹೇಳಿದರು.

ಪಟ್ಟಣದ ಬಹುತೇಕ ವಾರ್ಡ್‌ಗಳಲ್ಲಿ ಬಿಜೆಪಿ ಜೊತೆಗೂಡಿ ಪ್ರಚಾರ ನಡೆಸಿದರು. ಗ್ರಾಮಗಳ ಜೆಡಿಎಸ್-ಬಿಜೆಪಿ ಮುಖಂಡರು ಹಾಗೂ ಪುರಸಭೆ ಸದಸ್ಯರು ಇದ್ದರು.

ಕಾರ್ಯಕರ್ತರ ಸಭೆ

ಎಚ್.ಡಿ.ಕುಮಾರಸ್ವಾಮಿ ಅವರ ಪರವಾಗಿ ಮತಯಾಚಿಸಲು ಏ.13ರಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತಾಲ್ಲೂಕಿಗೆ ಭೇಟಿ ನೀಡಿ ಹೋಬಳಿವಾರು ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಏ.16ರ ಬೆಳಿಗ್ಗೆ 11 ಗಂಟೆಗೆ ಮಳವಳ್ಳಿಯಲ್ಲಿ ಆಯೋಜಿಸಿರುವ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ರಾಜ್ಯ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಕೆ.ಅನ್ನದಾನಿ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT