ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರೂಣಹತ್ಯೆ ತಡೆಗೆ ತಂಡ ರಚನೆ: ಎನ್‌.ಚಲುವರಾಯಸ್ವಾಮಿ

ಅಧಿಕಾರಿಗಳ ಸಭೆಯಲ್ಲಿ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ
Published 30 ನವೆಂಬರ್ 2023, 16:04 IST
Last Updated 30 ನವೆಂಬರ್ 2023, 16:04 IST
ಅಕ್ಷರ ಗಾತ್ರ

ಮಂಡ್ಯ: ‌‘ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟಲು ತಾಲ್ಲೂಕು ಮಟ್ಟದಲ್ಲಿ ಜಾಗೃತ ತಂಡಗಳಿವೆ. ಜೊತೆಗೆ ತಹಶೀಲ್ದಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ, ಸರ್ಕಲ್ ಇನ್‌ಸ್ಪೆಕ್ಟರ್‌ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಯನ್ನೊಳಗೊಂಡ ನಾಲ್ಕು ಮಂದಿಯ ತಂಡವನ್ನು ರಚಿಸಿ ನಿಗಾ ವಹಿಸುವಂತೆ ಸೂಚಿಸಲಾಗಿದೆ’ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

ನಗರದಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತವು ಗ್ರಾಮ ಮಟ್ಟದಲ್ಲಿ ಪಿಡಿಒ, ಸಮುದಾಯ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯನ್ನೊಳಗೊಂಡ ಏಳು ಮಂದಿಯ ತಂಡವನ್ನು ರಚಿಸಿ ನಿಗಾ ವಹಿಸಲು ಸೂಚಿಸಿದೆ’ ಎಂದರು.

‘ಜಿಲ್ಲಾ ಪಂಚಾಯಿತಿ ಸಿಇಒ ಅವರು 15 ದಿನಗಳೊಳಗೆ ಜಿಲ್ಲೆಯಲ್ಲಿರುವ ಆಸ್ಪತ್ರೆಗಳು, ಕ್ಲಿನಿಕ್‌ಗಳು, ಸ್ಕ್ಯಾನಿಂಗ್ ಸೆಂಟರ್, ಲ್ಯಾಬ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸೂಚಿಸಿದ್ದಾರೆ. ಪರವಾನಗಿ ಸೇರಿದಂತೆ ಎಲ್ಲ ರೀತಿಯ ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಾರೆ. ಅನಧಿಕೃತ ಕ್ಲಿನಿಕ್‌ಗಳು ಕಂಡು ಬಂದರೆ ಮುಲಾಜಿಲ್ಲದೆ ಕಟ್ಟುನಿಟ್ಟಿನ ಕಠಿಣ ಕಾನೂನು ಕ್ರಮ ಕೈಗೊಂಡು ಬಂದ್ ಮಾಡುವಂತೆ ತಿಳಿಸಿದ್ದೇನೆ’ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯರಾದ ದಿನೇಶ್‌ ಗೂಳಿಗೌಡ, ಮಧು ಜಿ.ಮಾದೇಗೌಡ, ಶಾಸಕ ಪಿ.ರವಿಕುಮಾರ್‌ಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಎಲ್‌.ನಾಗರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌. ಡಿಎಚ್‌ಒ ಡಾ.ಕೆ.ಮೋಹನ್‌ ಭಾಗವಹಿಸಿದ್ದರು.

ಆರೋಗ್ಯ ಸಚಿವರ ಭೇಟಿ:

‘ಭ್ರೂಣ ಹತ್ಯೆಯು ಅತ್ಯಂತ ಕ್ರೂರ ವ್ಯವಸ್ಥೆ. ಇದರಲ್ಲಿ ಭಾಗಿಯಾದವರಿಗೆ ದೊಡ್ಡ ಮಟ್ಟದ ಶಿಕ್ಷೆ ವಿಧಿಸಬೇಕು. ಪ್ರಕರಣದ ಗಂಭೀರತೆ ಅರಿತು ಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಪ್ರಕರಣದ ಕೇಂದ್ರ ಬಿಂದುವಾಗಿರುವ ತಾಲ್ಲೂಕಿನ ಹುಲ್ಲೇನಹಳ್ಳಿಯ ಆಲೆಮನೆಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ವೈದ್ಯರಿಂದಷ್ಟೇ ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಾಧ್ಯವಿಲ್ಲ. ಪ್ರಕರಣವನ್ನು ತಾರ್ಕಿಕವಾಗಿ ಅಂತ್ಯಗೊಳಿಸಲು ಪೊಲೀಸ್‌ ಮತ್ತು ಆರೋಗ್ಯ ಇಲಾಖೆಗಳು ಒಟ್ಟಾಗಿ ಕೆಲಸ ಮಾಡಬೇಕು’ ಎಂದರು. ಶಾಸಕರಾದ ಕೆ.ಎಂ.ಉದಯ್‌, ದರ್ಶನ್‌ ಪುಟ್ಟಣ್ಣಯ್ಯ ಇದ್ದರು.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ ಮಂಡ್ಯ: ‘ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಮಾಡುವ ಜಾಲ ದೊಡ್ಡ ಮಟ್ಟದಲ್ಲಿ ವಿಸ್ತರಿಸಿದ್ದು ಸಮಗ್ರ ತನಿಖೆ ನಡೆಸಿ ಇದರ ಮೂಲವನ್ನು ಪತ್ತೆ ಹಚ್ಚಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು’ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು. ತಾಲ್ಲೂಕಿನ ಹಾಡ್ಯ ಗ್ರಾಮಗಳ ನಡುವೆ ಇರುವ ಆಲೆಮನೆಗೆ ಗುರುವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ‘ಪ್ರಕರಣದ ಗಂಭೀರತೆಯನ್ನು ಅರಿತು ಆರೋಗ್ಯ ಇಲಾಖೆ ಮುನ್ನಚ್ಚರಿಕೆ ಕ್ರಮ ವಹಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯು ಸುತ್ತಮುತ್ತಲ ಪ್ರದೇಶದಲ್ಲಿ ಯಾವ ಚಟುವಟಿಕೆಗಳು ನಡೆಯುತ್ತಿವೆ ಎಂಬುದರ ಬಗ್ಗೆ ಗಮನ ಹರಿಸಬೇಕು’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT