ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಬೆಳ್ಳೂರಿನಲ್ಲಿ ಗುಂಪು ಘರ್ಷಣೆ; ಬಿಗುವಿನ ವಾತಾವರಣ

Published 28 ಮೇ 2024, 8:32 IST
Last Updated 28 ಮೇ 2024, 8:32 IST
ಅಕ್ಷರ ಗಾತ್ರ

ಮಂಡ್ಯ: ನಾಗಮಂಗಲ ತಾಲ್ಲೂಕು ಬೆಳ್ಳೂರು ಪಟ್ಟಣದಲ್ಲಿ ಸೋಮವಾರ ರಾತ್ರಿ 2 ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಮುಸ್ಲಿಂ ಯುವಕರ ಗುಂಪೊಂದು ಬೆಳ್ಳೂರಿನ ಯುವಕ ಅಭಿಲಾಷ್‌ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬೆಳ್ಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಖಂಡಿಸಿ ನೂರಾರು ಜನರು ಸೋಮವಾರ ರಾತ್ರಿಯೇ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪಟ್ಟುಹಿಡಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಯಿತು.

ಘಟನೆಯ ವಿವರ: ಮೇ 25ರಂದು ಅಭಿಷೇಕ್‌ ಬೈಕ್‌ನಲ್ಲಿ ತೆರಳುತ್ತಿದ್ದಾಗ ಯುವಕರ ಗುಂಪು ವೇಗವಾಗಿ ಬೈಕ್‌ನಲ್ಲಿ ಬಂದಿದೆ. ಅಭಿಲಾಷ್‌ ಬೈಕ್‌ಗೆ ಸ್ಪರ್ಶಿಸಿ ಮುಂದೆ ತೆರಳಿದ್ದಾರೆ. ಇದನ್ನು ಪ್ರಶ್ನಿಸಿದ ಕಾರಣಕ್ಕೆ ಅವರು ಅಭಿಲಾಷ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ಗುಂಪು ಕಟ್ಟಿಕೊಂಡು ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಮುಸ್ಲಿಂ ಯುವಕರು ಕೂಡ ಅಭಿಲಾಷ್‌ ಹಾಗೂ ಇತರರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಿ ದೂರು ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ಅಭಿಲಾಷ್‌ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೆಡಿಎಸ್‌ ಮುಖಂಡ ಸುರೇಶ್‌ಗೌಡ ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ‘ಕಾಂಗ್ರೆಸ್‌ ಸರ್ಕಾರ ರಚನೆಯಾದ ನಂತರ ಹಿಂದೂ ಯುವಕರ ಮೇಲೆ ಹಲ್ಲೆ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆಲ್ಲಾ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ’ ಎಂದು ಆರೋಪಿಸಿದರು.

ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಅಮಿತ್‌ ಸಿಂಗ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ದೂರು– ಪ್ರತಿದೂರು ದಾಖಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT