ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ‘ಮಂಡ್ಯ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಭಾಗವಹಿಸಿದ್ದರು
ಬಡವರ ಕ್ಷೇಮಾಭಿವೃದ್ಧಿಗೆ ಶ್ರಮ
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ ‘ಕಾರ್ಮಿಕ ಇಲಾಖೆಯು ಶ್ರಮಜೀವಿಗಳಿಗೆ ಅನೇಕ ಸೌಲಭ್ಯಗಳನ್ನು ಜಾರಿಗೆ ತಂದಿದ್ದು ಇಲಾಖೆಯವರೇ ಜಿಲ್ಲೆಗಳಿಗೆ ಬಂದು ಯೋಜನೆ ಸೌಲಭ್ಯಗಳ ಬಗ್ಗೆ ಕಾರ್ಮಿಕರಿಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ. ಕೋವಿಡ್ ಕಾಲದಿಂದ ಇಲ್ಲಿಯವರೆಗೂ ಜನರ ಕ್ಷೇಮಾಭಿವೃದ್ಧಿಗಾಗಿ ಸರ್ಕಾರ ಶ್ರಮಿಸಿದೆ. ಸರ್ಕಾರ ಎಲ್ಲಾ ಸಮುದಾಯಗಳ ಪರವಾಗಿದ್ದು ಬಡವರಿಗಾಗಿ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರ ಎಲ್ಲಾ ಇಲಾಖೆಗಳಿಗೂ ಜವಾಬ್ದಾರಿಗಳನ್ನು ನೀಡಿದ್ದು ಪ್ರತಿ ಇಲಾಖೆಯೂ ಬಡವರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಶೀಘ್ರದಲ್ಲಿ ಹಕ್ಕುಪತ್ರ ವಿತರಣೆ’
ಮಂಡ್ಯ ಜಿಲ್ಲೆಯಲ್ಲಿ ಹಕ್ಕುಪತ್ರ ಸಮಸ್ಯೆ ಪರಿಹರಿಸಿದ್ದು ಮುಖ್ಯಮಂತ್ರಿ ಅವರ ಅನುಮತಿ ಮೇರೆಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಯೋಜಿಸಲಾಗುವುದು. ಮನೆ ಇಲ್ಲದವರಿಗಾಗಿ ನಿವೇಶನ ನೀಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ನಿವೇಶನ ಗುರುತಿಸಲಾಗಿದೆ’ ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.