ಸೋಮವಾರ, ಸೆಪ್ಟೆಂಬರ್ 20, 2021
24 °C

ಮಂಡ್ಯ ನಗರವು 35 ವರ್ಷಗಳ ಹಿಂದೆ ಹೇಗಿತ್ತೋ ಈಗಲೂ ಹಾಗೆಯೇ ಇದೆ: ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ‘ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕನಸು ಕಂಡಿದ್ದೆ. ಆದರೆ 14 ತಿಂಗಳಿಗೆ ಅಕಾಲಿಕವಾಗಿ ನಿರ್ಗಮಿಸುವ ಪರಿಸ್ಥಿತಿ ಬಂತು, ಹೀಗಾಗಿ ಜಿಲ್ಲೆಯ ಅಭಿವೃದ್ಧಿಯ ಕನಸು ಈಡೇರಲಿಲ್ಲ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಶನಿವಾರ ನಡೆದ ಬುದ್ಧ, ಬಸವ, ಅಂಬೇಡ್ಕರ್‌ ಜಯಂತಿ ಹಾಗೂ ಎಂ.ಬಿ.ಶ್ರೀನಿವಾಸ್‌ ಅವರ ‘ದಲಿತರ ಅಂತರಾಳದ ಧ್ವನಿ’ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ನಾನು ಚಲನಚಿತ್ರಗಳ ಹಂಚಿಕೆ ವೃತ್ತಿ ಮಾಡುತ್ತಿದ್ದಾಗ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದೆ. ಮಂಡ್ಯ ನಗರವನ್ನು ನೋಡಿಕೊಂಡು ಹೋಗುತ್ತಿದ್ದೆ. ನಗರ 35 ವರ್ಷಗಳ ಹಿಂದೆ ಹೇಗಿತ್ತೋ ಈಗಲೂ ಹಾಗೆಯೇ ಇದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ನಗರದ ಅಭಿವೃದ್ಧಿಗೆ ಬಜೆಟ್‌ನಲ್ಲಿ ₹ 50 ಕೋಟಿ ಹಣ ಮೀಸಲಿಟ್ಟಿದ್ದೆ. ಆದರೆ ಈಗಿನ ಸರ್ಕಾರ ಆ ಹಣವನ್ನು ವಾಪಸ್‌ ಪಡೆದಿದೆ. ಈ ಜಲ್ಲೆಯ ಜನರು ಮುಗ್ಧರಾಗಿದ್ದು ರಾಜಕಾರಣಿಗಳು ಅವರ ಭಾವನೆಗಳ ಜೊತೆ ಆಟವಾಡುತ್ತಿದ್ದಾರೆ’ ಎಂದರು.

‘ಜಿಲ್ಲೆಯ ಅಭಿವೃದ್ಧಿ ಬಗ್ಗೆ ಆಶಾಭಾವನೆ ಇಟ್ಟುಕೊಂಡಿದ್ದೇನೆ. ಯಾವುದೇ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಜನರ ಜೊತೆ ನಿಲ್ಲುತ್ತೇನೆ. ಎಲ್ಲಾ ಸಮಾಜದ ಜನರಿಗೆ ಗೌರವ ತರುವ ಕೆಲಸ ಮಾಡುತ್ತೇನೆ, ಜನರ ಧ್ವನಿಯಾಗಿ ಇಲ್ಲಿಯ ಜನಪ್ರತಿನಿಧಿಗಳಿಗೆ ಸಹಕಾರ ನೀಡುತ್ತೇನೆ’ ಎಂದರು.

‘ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಯಾರೂ ಹುಡುಗಾಟವಾಡಬಾರದು. ಸರ್ಕಾರದ ಕೋವಿಡ್‌ ಕಾರ್ಯಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಕುಟುಂಬಕ್ಕೆ ನೆರವಾಗುವ ಜವಾಬ್ದಾರಿ ಎಲ್ಲರ ಮೇಲಿದ್ದು ಅದನ್ನು ಅರಿತು ಕೋವಿಡ್‌ ನಿಯಮಗಳನ್ನು ಪಾಲನೆ ಮಾಡಬೇಕು’ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಡಿ.ಸಿ.ತಮ್ಮಣ್ಣ, ಎಂ.ಶ್ರೀನಿವಾಸ್‌, ಸಿ.ಎಸ್‌.ಪುಟ್ಟರಾಜು, ಕೆ.ಟಿ.ಶ್ರೀಕಂಠೇಗೌಡ, ಎನ್‌.ಅಪ್ಪಾಜಿಗೌಡ, ನಗರಸಭಾ ಸದಸ್ಯ ಎಚ್.ಎಸ್‌.ಮಂಜು, ಸಾಹಿತಿ ಡಾ.ಎಚ್‌.ಎಸ್‌.ಮುದ್ದೇಗೌಡ, ಶ್ರೀನಿವಾಸ ಶೆಟ್ಟಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು