ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ | ಚಿತ್ರರಂಗದಿಂದ ದರ್ಶನ್‌ಗೆ ನಿಷೇಧ ಹೇರಲು ರಾಜ್ಯ ರೈತ ಸಂಘದ ಒತ್ತಾಯ

Published 13 ಜೂನ್ 2024, 13:11 IST
Last Updated 13 ಜೂನ್ 2024, 13:11 IST
ಅಕ್ಷರ ಗಾತ್ರ

ಮಂಡ್ಯ: ‘ರೇಣುಕಸ್ವಾಮಿ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಮತ್ತು ಚಿತ್ರರಂಗದಿಂದ ದರ್ಶನ್‌ ಅವರಿಗೆ ನಿಷೇಧ ಹೇರಬೇಕು ಹಾಗೂ ಅವರ ಎಲ್ಲಾ ಸಿನಿಮಾಗಳನ್ನು ಬಹಿಷ್ಕರಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘದ (ರೈತ ಬಣ) ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಬೆಂಗಳೂರು- ಮೈಸೂರು ಹೆದ್ದಾರಿ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ನಟ ದರ್ಶನ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ಮಾತನಾಡಿ, ‘ದರ್ಶನ್ ಒಬ್ಬ ಪ್ರಭಾವಿ ನಟ. ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಈತ ಭಾಗಿಯಾಗಿರುವ ಕಾರಣ, ಬಲಾಢ್ಯರು, ಪ್ರಭಾವಿಗಳು, ಪ್ರಕರಣವನ್ನು ಮುಚ್ಚಿಹಾಕುವ ಸಂಶಯ ಇರುವುದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ರೇಣುಕಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ. ಆತ ತಪ್ಪು ಮಾಡಿದ್ದರೆ ಪೊಲೀಸರಿಗೆ ದೂರು ನೀಡಲು ಅವಕಾಶವಿತ್ತು. ಆದರೆ, ಕಾನೂನು ಕೈಗೆತ್ತಿಕೊಂಡಿರುವ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.

ಪೊಲೀಸರು ಆರೋಪಿಗಳನ್ನು ಬಂಧಿಸಿ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ, ಮುಂದೆ ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡುವುದು ಸರಿಯಲ್ಲ, ಮುಖ್ಯಮಂತ್ರಿ, ಗೃಹಸಚಿವರು ಈ ನಿಟ್ಟಿನಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು. ಕಾನೂನು ಎಲ್ಲರಿಗೂ ಒಂದೇ. ದರ್ಶನ್ ಅವರ ಪ್ರಭಾವಕ್ಕೆ ಸರ್ಕಾರ ಮತ್ತು ಪೊಲೀಸರು ಮಣಿಯಬಾರದು. ನಟ ದರ್ಶನ್ ಮೇಲೆ ಈ ಹಿಂದೆಯೂ ಹಲವು ಪ್ರಕರಣಗಳು ದಾಖಲಾಗಿವೆ. ಅವರ ಮೇಲೆ ರೌಡಿ ಶೀಟರ್ ಓಪನ್ ಮಾಡಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ದರ್ಶನ್‌ ಅವರು ರೇವ್ ಪಾರ್ಟಿಯಲ್ಲಿ ಭಾಗವಹಿಸಿ ಡ್ರಗ್ಸ್ ಸೇವಿಸಿ ಮೈಸೂರಿನಲ್ಲಿ ಕಾರು ಅಪಘಾತ ಮಾಡಿದ್ದರು. ಆಗಲೇ ಇವರ ವಿರುದ್ಧ ಕ್ರಮ ಕೈಗೊಂಡು ಬುದ್ಧಿ ಕಲಿಸಿದ್ದರೆ ಇಂತಹ ಕೃತ್ಯ ನಡೆಯುತ್ತಿರಲಿಲ್ಲ. ಸಿನಿಮಾ ಮಾಧ್ಯಮ ಸಮಾಜದಲ್ಲಿ ಬದಲಾವಣೆ ತರುವಂತಹುದ್ದು. ಇದಕ್ಕೆ ರಾಜಕುಮಾರ್‌, ವಿಷ್ಣುವರ್ಧನ್‌, ಅಂಬರೀಶ್‌, ಪುಟ್ಟಣ್ಣ ಕಣಗಾಲ್‌ ಸೇರಿದಂತೆ ಹಲವು ದಿಗ್ಗಜರು ಕಟ್ಟಿ ಬೆಳೆಸಿದ ಕನ್ನಡ ಚಿತ್ರರಂಗವು ಇಂತಹ ಘಟನೆಗಳಿಂದ ತಲೆತಗ್ಗಿಸುವಂತಾಗಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ದರ್ಶನ್‌ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಹೆಮ್ಮಿಗೆ ಚಂದ್ರಶೇಖರ್, ಕೆಂಪರಾಜು, ಲಕ್ಷ್ಮಮ್ಮ, ಬಸವರಾಜು, ರಜಿನಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT