ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅನುದಾನ ಕೋರಿ ಕುಮಾರಸ್ವಾಮಿಗೆ ಪತ್ರ: ಚಲುವರಾಯಸ್ವಾಮಿ

ಕಾವೇರಿ ಸಮಸ್ಯೆಗೆ ಪರಿಹಾರ ಹುಡುಕಲಿ: ಚಲುವರಾಯಸ್ವಾಮಿ
Published 19 ಜೂನ್ 2024, 13:46 IST
Last Updated 19 ಜೂನ್ 2024, 13:46 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಎಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ದೊಡ್ಡ ಖಾತೆ ಹೊಂದಿದ್ದು, ಜಿಲ್ಲೆಯ ಅಭಿವೃದ್ಧಿ ಮತ್ತು ಕಾವೇರಿ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಅವರಿಗೆ ಸುದೀರ್ಘ ಪತ್ರ ಬರೆಯುತ್ತೇನೆ ಎಂದು ಸಚಿವ ಎನ್‌. ಚಲುವರಾಯಸ್ವಾಮಿ ತಿಳಿಸಿದರು.

ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾವೇರಿ ನದಿ ನೀರಿನ ವಿಷಯ ಮೂರ್ನಾಲ್ಕು ದಶಕಗಳಿಂದ ನನೆಗುದಿಗೆ ಬಿದ್ದಿದೆ ಎಂದು ಅವರೇ ಹೇಳಿದ್ದಾರೆ. ಈ ವಿಷಯದಲ್ಲಿ ನನಗೆ ಗೊತ್ತಿರುವ ಮಾಹಿತಿ ಸಂಗ್ರಹಿಸಿ ಅವರಿಗೆ ಕೊಡುತ್ತೇನೆ. ಕಾವೇರಿ ನದಿ ನೀರಿನ ಸಮಸ್ಯೆಗೆ ಅವರು ಪರಿಹಾರ ಹುಡಕಬೇಕು. ಮೇಕೆದಾಟು ಯೋಜನೆಗೆ ಅವರು ನಾಳೆ ಅನುಮತಿ ಕೊಡಿಸಿದರೆ ಸರ್ಕಾರ ನಾಡಿದ್ದೇ ಟೆಂಡರ್‌ ಕರೆಯುತ್ತದೆ ಎಂದು ಹೇಳಿದರು.

ಮಂಡ್ಯದ ಮೈಷುಗರ್‌ ಕಾರ್ಖಾನೆಗೆ ಕುಮಾರಸ್ವಾಮಿ ಅವರು ಕೇಂದ್ರದಿಂದ ಅನುದಾನ ಕೊಡಿಸಿದರೆ ಅವರನ್ನು ಅಭಿನಂದಿಸುತ್ತೇನೆ. ಜಿಲ್ಲೆಯಲ್ಲಿ, ಕಾವೇರಿ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಆಗಬೇಕಾದ ಕೆಲಸಗಳು ಸಾಕಷ್ಟಿವೆ. ಅದಕ್ಕಾಗಿ ಕೇಂದ್ರ ಸರ್ಕಾರದಿಂದ ₹5 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿಸುವಂತೆ ಕುಮಾರಸ್ವಾಮಿ ಹಾಗೂ ಕೇಂದ್ರದ ಜಲ ಸಂಪನ್ಮೂಲ ಸಚಿವರಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದಿಂದ ಆಗಬೇಕಾದ ಕಾರ್ಯಗಳ ಬಗ್ಗೆ ಕುಮಾರಸ್ವಾಮಿ ಅವರು ಪತ್ರ ಬರೆದರೆ ಅಥವಾ ಮಾಧ್ಯಮದ ಮೂಲಕ ತಿಳಿಸಿದರೂ ಸ್ಪಂದಿಸುತ್ತೇನೆ. ಅವರ ಎಲ್ಲ ಜನಪರ ಕಾರ್ಯಗಳಿಗೆ ನನ್ನ ಮತ್ತು ಜಿಲ್ಲೆಯ ಶಾಸಕರ ಸಹಕಾರ ಇರುತ್ತದೆ ಎಂದು ಸಚಿವರು ಹೇಳಿದರು.

ಎಚ್‌ಎಎಲ್‌, ಬಿಇಎಲ್‌ ಇನ್ನಿತರ ಕೇಂದ್ರ ಸರ್ಕಾರದ ಉದ್ಯಮಗಳಲ್ಲಿ 10 ಸಾವಿರ ಮಂದಿಗೆ ಕುಮಾರಸ್ವಾಮಿ ಅವರು ಕೆಲವೇ ದಿನಗಳಲ್ಲಿ ಕೆಲಸ ಕೊಡಿಸಲಿದ್ದು, ಪಟ್ಟಿ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅವರ ಕಡೆಯವರು ಹೇಳುತ್ತಿದ್ದಾರೆ. ಹಾಗಾದರೆ ನಮಗೂ ಸಂತೋಷ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT