ಮಂಡ್ಯ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿ ತಿರಸ್ಕೃತವಾದ ಬೆನ್ನಲ್ಲೇ, ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಜೆ.ಸಿ.ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ, ಕೂಡಲೇ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಆಗ್ರಹಿಸಿದರು.
ಆರೋಪ ಕೇಳಿಬಂದಾಗಲೇ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು. ಆದರೆ ಭಂಡರಂತೆ ವರ್ತಿಸಿರುವ ಸಿದ್ದರಾಮಯ್ಯ ಅವರು ಕಾನೂನಿಗೆ ಬೆಲೆ ಕೊಡದೇ ಸಂವಿಧಾನ ವಿರೋಧಿ ನಡೆ ಅನುಸರಿಸಿ, ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷವು ಸಂವಿಧಾನಕ್ಕೆ ಗೌರವ ಕೊಡುತ್ತದೆ ಎನ್ನುತ್ತಾರೆ. ಆದರೆ ರಾಜ್ಯಪಾಲರು ನೀಡಿರುವ ಅನುಮತಿ ವಿಚಾರವನ್ನು ಖಂಡಿಸಿ, ಅವರ ವಿರುದ್ಧವೇ ಪ್ರತಿಭಟನೆ ನಡೆಸಿದ್ದು ಅಕ್ಷಮ್ಯ ಅಪರಾಧ. ಕಾಂಗ್ರೆಸ್ ವರಿಷ್ಠರು ರಾಜ್ಯಪಾಲರ ಸ್ಥಾನಕ್ಕೆ ಗೌರವ ನೀಡಿ, ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಮಾತನಾಡಿ, ಮುಖ್ಯಮಂತ್ರಿ ಅವರ ಮೇಲ್ಮನವಿ ಅರ್ಜಿ ವಜಾ ಮಾಡಿ ಹೈಕೋರ್ಟ್ ನೀಡಿರುವ ತೀರ್ಪು ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯವಾಗಿದೆ. ಸಿದ್ದರಾಮಯ್ಯ ಅವರ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದೆ. 40 ವರ್ಷದಿಂದ ಕಪ್ಪುಚುಕ್ಕೆ ಇಲ್ಲ ಎಂದ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡಿ ಇರುವ ಗೌರವ ಉಳಿಸಿಕೊಳ್ಳಬೇಕು. ಇಲ್ಲವಾದರೆ ರಾಜೀನಾಮೆ ನೀಡುವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ವಿದೇಶದಿಂದ ನೆಲದಲ್ಲಿ ನಿಂತು ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕೂಗಿ ಕೂಗಿ ಹೇಳುತ್ತಿರುವ ರಾಹುಲ್ ಗಾಂಧಿ ಅವರು, ಸಿದ್ದರಾಮಯ್ಯನವರ ರಾಜೀನಾಮೆ ಪಡೆಯುತ್ತಾರೋ ಇಲ್ಲವೋ ಎಂಬ ಪ್ರಶ್ನೆ ಮೂಡಿದೆ. ಹತಾಶರಾದ ಜನರಿಂದ ಐವಾನ್ ಡಿಸೋಜಾ ಹೇಳಿದ ಮಾದರಿಯಲ್ಲಿ ಗಲಭೆ ಎಬ್ಬಿಸುವ ಸಂಭವವಿದ್ದು ಕೂಡಲೇ ಗೃಹ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಮುಖಂಡ ಅರವಿಂದ ಮಾತನಾಡಿ, ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿದಾಗ ಸಂವಿಧಾನ ಇದೇ ಇತ್ತು ಎಂಬುದನ್ನು ಸಿದ್ದರಾಮಯ್ಯ ಅವರು ಅರ್ಥ ಮಾಡಿಕೊಂಡು ರಾಜೀನಾಮೆ ನೀಡಬೇಕು. ಇದರಲ್ಲಿ ಯಾರ ಪಿತೂರಿಯೂ ಇಲ್ಲ, ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು. ಮೈಸೂರಿನ ಮುಡಾ ಹಗರಣದಲ್ಲಿ ಇವರು ಭಾಗಿಯಾಗಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸಮಂಜಸವಾಗಿ ಇವರ ಅರ್ಜಿ ರದ್ದು ಮಾಡಿ, ರಾಜ್ಯಪಾಲರ ಆದೇಶವನ್ನೇ ಎತ್ತಿ ಹಿಡಿದಿದೆ, ಹಾಗಾಗಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಡಾ.ಸದಾನಂದ, ಆನಂದ್, ವಿವೇಕ್, ಪೀಹಳ್ಳಿ ರಮೇಶ್, ಜವರೇಗೌಡ, ನಾಗಾನಂದ, ನಂದೀಶ್, ನಿತ್ಯಾನಂದ, ಶಂಕರ್, ಚಾಮರಾಜು, ಕೃಷ್ಣ, ಶಿವಲಿಂಗು, ಡಣಾಯನಕಪುರ ರವಿ, ಸಂತೋಷ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.