ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ | ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಶರಣ ಪ್ರಕಾಶ ಪಾಟೀಲ

Published 3 ಜುಲೈ 2024, 15:04 IST
Last Updated 3 ಜುಲೈ 2024, 15:04 IST
ಅಕ್ಷರ ಗಾತ್ರ

ಮಂಡ್ಯ: ‘ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್‌) ಆವರಣದಲ್ಲಿ ನಿರ್ಮಾಣವಾಗುತ್ತಿರುವ ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿಗಳು 3 ತಿಂಗಳೊಳಗಾಗಿ ಪೂರ್ಣಗೊಳ್ಳಬೇಕು. ಸಿವಿಲ್ ಕಾಮಗಾರಿಗಳು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಸೂಚಿಸಿದರು.

ನಗರದ ಮಿಮ್ಸ್ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಆಸ್ಪತ್ರೆಗೆ ಅವಶ್ಯಕವಿರುವ ವೈದ್ಯಕೀಯ ಉಪಕರಣಗಳು ಹಾಗೂ ಇನ್ನಿತರೆ ಟೇಬಲ್, ಚೇರ್, ಬೆಡ್ ವಿದ್ಯುತ್ ಸಂಪರ್ಕ ಇತ್ಯಾದಿ ಕೆಲಸಗಳು 3 ತಿಂಗಳೊಳಗೆ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.

ಆಸ್ಪತ್ರೆಗೆ ಬೇಕಿರುವ ವೈದ್ಯರು ಹಾಗೂ ಇನ್ನಿತರ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆದು ಕಾರ್ಯಪ್ರವೃತ್ತರಾಗಬೇಕು. ಕ್ಯಾನ್ಸರ್ ಆಸ್ಪತ್ರೆಗೆ ಅನುದಾನದ ಕೊರತೆ ಇಲ್ಲ. ಕೋಟ್ಯಂತರ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳ ಖರೀದಿಗೆ ಟೆಂಡರ್ ಆಗಿದೆ. ಈ ತಿಂಗಳಲ್ಲಿ ಉಪಕರಣಗಳು ಬರುವ ಸಾಧ್ಯತೆ ಇದೆ ಎಂದು ಹೇಳಿದರು.

ಕ್ಯಾನ್ಸರ್ ಆಸ್ಪತ್ರೆಗೆ ತಜ್ಞ ವೈದ್ಯರಿದ್ದು, ಮತ್ತೊಬ್ಬ ತಜ್ಞ ವೈದ್ಯರ ಅಗತ್ಯವಿದೆ. ಅವರ ನೇಮಕಾತಿಗೂ ಸರ್ಕಾರದಿಂದ ಮಂಜೂರಾತಿ ದೊರಕಿದೆ. ಕ್ಯಾನ್ಸರ್ ಆಸ್ಪತ್ರೆ ಕಾರ್ಯಾರಂಭಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಹಂತ ಹಂತವಾಗಿ ಅಗತ್ಯವಿರುವ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಸಿ.ಟಿ. ಸ್ಕ್ಯಾನ್‌ ಭರವಸೆ:

ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಒತ್ತಡ ಹೆಚ್ಚಿದೆ. ಇದಕ್ಕೆ ಹೆಚ್ಚಿನ ಸೌಲಭ್ಯ ನೀಡಬೇಕಾದ ಅನಿವಾರ್ಯತೆ ಇದೆ. ಸಿಟಿ ಸ್ಕ್ಯಾನ್‌ ಮತ್ತು ಎಂ.ಆರ್.ಐ. ಸ್ಯಾನ್ ನಿತ್ಯ 25ರಿಂದ 30 ಮಂದಿಗೆ ಮಾಡಬಹುದು. ಆದರೆ ಹೆಚ್ಚಿನ ಒತ್ತಡ ಇರುವ ಕಾರಣ ಮತ್ತೊಂದು ಸಿ.ಟಿ.ಯಂತ್ರ ಮಂಜೂರು ಮಾಡುವುದಾಗಿ ಭರವಸೆ ನೀಡಿದರು.

ಜಾಗದ ಕೊರತೆ:

ಆಸ್ಪತ್ರೆಗೆ ಅಗತ್ಯವಾಗಿರುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಜಾಗದ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಪಕ್ಕದಲ್ಲಿರುವ ತಮಿಳು ಕಾಲೊನಿ ನಿವಾಸಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ನ್ಯಾಯಾಲಯದ ತಡೆಯಾಜ್ಞೆ ಇದೆ. ಅದನ್ನು ಸರ್ಕಾರದ ಮಟ್ಟದಲ್ಲಿ ತೆರವು ಮಾಡಿಸುವ ಕ್ರಮಕ್ಕೆ ಮುಂದಾಗಿದ್ದೇವೆ. ತಡೆಯಾಜ್ಞೆ ತೆರವುಗೊಂಡ ಬಳಿಕ ಜಾಗವನ್ನು ವಶಕ್ಕೆ ಪಡೆದು ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತೇವೆ ಎಂದರು.

ಸಚಿವರಿಂದ ಚಾಲನೆ:

ವೈದ್ಯಕೀಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ₹2.50 ಕೋಟಿ ವೆಚ್ಚದಲ್ಲಿ ಖರೀದಿಸಲಾಗಿರುವ ಅನಾಟಮಿ ವರ್ಚುಯಲ್ ಡಿಸೆಕ್ಸನ್ ಟೇಬಲ್ (Anatomy virtual dissection table) ಗೆ ಸಚಿವರು ಚಾಲನೆ ನೀಡಿದರು.

ಶಾಸಕ ಪಿ.ರವಿಕುಮಾರ್ ಮಾತನಾಡಿ, ಬಿ.ಹೊಸೂರಿನಲ್ಲಿ ನರ್ಸಿಂಗ್, ಪ್ಯಾರ್ ಮೆಡಿಕಲ್ ಕಾಲೇಜು ಮತ್ತು ಹಾಸ್ಟಲ್ ಗೆ ಸ್ಥಳದ ವ್ಯವಸ್ಥೆ ಮಾಡಿಕೊಡಲಾಗುವುದು. ಇದಕ್ಕೆ ಯೋಜನೆ ರೂಪಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.

ವಿಧಾನ ಪರಿಷತ್‌ ಸದಸ್ಯರಾದ ಮಧು ಜಿ. ಮಾದೇಗೌಡ, ದಿನೇಶ್ ಗೂಳೀಗೌಡ, ಜಿಲ್ಲಾಧಿಕಾರಿ ಕುಮಾರ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಸುಜಾತಾ, ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ, ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ್ ಇತರರು ಇದ್ದರು.

‘ಕರ್ತವ್ಯದ ವೇಳೆ ಹೊರಗಡೆ ಚಿಕಿತ್ಸೆ ನೀಡಿದರೆ ಕ್ರಮ’

‘ನಮ್ಮ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಕರ್ತವ್ಯದ ವೇಳೆ ಖಾಸಗಿ ಚಿಕಿತ್ಸಾಲಯಗಳಲ್ಲಿ ಕೆಲಸ ಮಾಡಿದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವ ಶರಣ ಪ್ರಕಾಶ ಪಾಟೀಲ ಎಚ್ಚರಿಕೆ ನೀಡಿದರು.

ಆಸ್ಪತ್ರೆ ಕಡತಗಳು ಕಚೇರಿಯಿಂದ ಹೊರಗೆ ಹೋಗುವುದು ಅಪರಾಧ. ಅದಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದಲ್ಲಿ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕರ್ತವ್ಯದ ವೇಳೆ ಎಲ್ಲ ವೈದ್ಯರೂ ಆಸ್ಪತ್ರೆಯಲ್ಲೇ ಕೆಲಸ ಮಾಡಬೇಕಿದೆ. ತಪ್ಪಿದಲ್ಲಿ ಶಿಸ್ತು ಕ್ರಮ ಅನಿವಾರ್ಯ. ವೈದ್ಯರು ಮತ್ತು ಸಿಬ್ಬಂದಿಗಾಗಿ ಬಯೋಮೆಟ್ರಿಕ್ ಅಳವಡಿಸಿದ್ದು, ಬೆಳಿಗ್ಗೆ ಮತ್ತು ಸಂಜೆ ಮಾತ್ರ ಬಯೋಮೆಟ್ರಿಕ್ ನೀಡಲು ಅವಕಾಶವಿದೆ ಎಂದರು.

ನಾಳೆಯಿಂದ ಬೆಳಿಗ್ಗೆ 9 ಗಂಟೆಗೆ ಮಧ್ಯಾಹ್ನ 1 ಗಂಟೆ, ಮತ್ತೆ 2 ಗಂಟೆಗೆ ಹಾಗೂ ಸಂಜೆ 4 ಗಂಟೆಗೆ ಹೀಗೆ 4 ಅವಧಿಯಲ್ಲಿ ಬಯೋಮೆಟ್ರಿಕ್ ಅಳವಡಿಸುವಂತೆ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ರೇಡಿಯಾಲಜಿಸ್ಟ್‌ ಹುದ್ದೆ ಭರ್ತಿ ಮಾಡಿ’

ಎಂ.ಆರ್.ಐ ಹಾಗೂ ಸಿ.ಟಿ ಸ್ಕ್ಯಾನ್ ಆದ ನಂತರ ರೋಗಿಗಳ ವರದಿ ನೀಡಲು ಮೂರರಿಂದ ಐದು ದಿನ ಆಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದೆ. ಖಾಲಿ ಇರುವ ರೆಡಿಯಾಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿ ಟೆಲಿ ಸರ್ವಿಸ್ ಉಪಯೋಗಿಸಿಕೊಂಡು ಒಂದು ದಿನದೊಳಗಾಗಿ ವರದಿ ನೀಡುವ ವ್ಯವಸ್ಥೆ ಮಾಡಿ ಎಂದು ಸಚಿವ ಶರಣ ಪ್ರಕಾಶ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಹೊರ ಗುತ್ತಿಗೆ ಮೇಲೆ ಲ್ಯಾಬ್ ಸೇವೆ ಒದಗಿಸುತ್ತಿರುವ ಸಂಸ್ಥೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹೆಚ್ಚಿನ ದರ ವಿದಿಸುತ್ತಿದ್ದಾರೆ ಎಂದು ದೂರು ಕೇಳಿ ಬರುತ್ತಿದ್ದು, ಇದನ್ನು ಪರಿಶೀಲಿಸಿ ತಪ್ಪು ಕಂಡು ಬಂದಲ್ಲಿ ಟೆಂಡರ್ ರದ್ದುಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT