ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲು ಗಣಿಗಾರಿಕೆ: ಅರ್ಜಿ ಪರಿಗಣಿಸಲು ನಿರ್ದೇಶನ

Last Updated 12 ಜನವರಿ 2022, 16:42 IST
ಅಕ್ಷರ ಗಾತ್ರ

ಬೆಂಗಳೂರು: ’ಮಂಡ್ಯ ಜಿಲ್ಲೆಯ ಬೇಬಿ ಬೆಟ್ಟದಕಾವಲು ಮತ್ತು ಚಿನಕುರಳಿ ಗ್ರಾಮಗಳಲ್ಲಿನ ಕಲ್ಲು ಗಣಿಗಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚಿಸಿರುವುದನ್ನು ರದ್ದುಪಡಿಸುವಂತೆ ಕೋರಿರುವ ಗಣಿ ಮಾಲೀಕರ ಮನವಿಯನ್ನು ಮೂರು ವಾರಗಳಲ್ಲಿ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

‘ಶ್ರೀ ಕೃಷ್ಣ ಸ್ಟೋನ್ ಕ್ರಷಿಂಗ್ ಇಂಡಸ್ಟ್ರೀಸ್’ ಸೇರಿದಂತೆ 17 ಗಣಿ ಕಂಪೆನಿಗಳ ಮಾಲೀಕರು ಸಲ್ಲಿಸಿದ್ದ ರಿಟ್‌ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಎಲ್.ಎಂ.ಚಿದಾನಂದಯ್ಯ, ‘ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಜಲಾಶಯಕ್ಕೆ ಹಾನಿಯಾಗುತ್ತಿದೆ ಎಂಬ ಕಾರಣಕ್ಕೆ ಸರ್ಕಾರ ತಾತ್ಕಾಲಿಕವಾಗಿಗಣಿ ಪರವಾನಗಿ ಅಮಾನತುಪಡಿಸಿದೆ. ವಾಸ್ತವದಲ್ಲಿ ಕಾರ್ಯಾಚರಣೆಯಿಂದ ಜಲಾಶಯಕ್ಕೆ ಯಾವುದೇ ಹಾನಿಯಾಗುತ್ತಿಲ್ಲ. ಸರ್ಕಾರದ ನಡೆ ಕಾನೂನು ಬಾಹಿರವಾಗಿದ್ದು, ಅರ್ಜಿದಾರರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ರದ್ದುಪಡಿಸಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಯಾಗಿ ಸರ್ಕಾರಿ ವಕೀಲರು, ‘ಕಲ್ಲು ಗಣಿಗಾರಿಕೆಯಿಂದಕೆಆರ್‌ಎಸ್ ಜಲಾಶಯಕ್ಕೆ ಹಾನಿಯಾಗುತ್ತಿದೆ ಎಂಬ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಲಾಗುತ್ತಿದೆ. ಆದ್ದರಿಂದ, ಅರ್ಜಿದಾರರ ಗಣಿಗಾರಿಕೆ ಘಟಕಗಳ ಕಾರ್ಯಚರಣೆ ನಿಲ್ಲಿಸಲು ಸರ್ಕಾರ ಸೂಚಿಸಿದೆ. ಅರ್ಜಿದಾರರ ಗಣಿಗಾರಿಕೆ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಪಡಿಸಲಾಗಿದೆ’ ಎಂದು ನ್ಯಾಯಪೀಠಕ್ಕೆ ಮನದಟ್ಟು ಮಾಡಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಅರ್ಜಿದಾರರು ಸರ್ಕಾರದ ನೋಟಿಸ್‌ಗೆ ಒಂದು ವಾರದೊಳಗೆ ಉತ್ತರಿಸಬೇಕು. ಸರ್ಕಾರವು ಇದನ್ನು ಪರಿಗಣಿಸಿ ಮೂರು ವಾರದೊಳಗೆ ಕಾನೂನು ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು’ ಎಂದು ನಿರ್ದೇಶಿಸಿ ಅರ್ಜಿ ವಿಲೇವಾರಿ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT