ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕೆ ದುರುಪಯೋಗವಾಗಿದ್ದರೆ ತನಿಖೆ: ಸಚಿವ

ತಪ್ಪು ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ, ಲಸಿಕೆ ಸಮಸ್ಯೆ ಶೀಘ್ರ ಇತ್ಯರ್ಥ
Last Updated 10 ಮೇ 2021, 4:00 IST
ಅಕ್ಷರ ಗಾತ್ರ

ಮಂಡ್ಯ: ‘ಕೋವಿಡ್‌ ಲಸಿಕೆ ನೀಡುವಲ್ಲಿ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಲೋಪ ಎಸಗಿದ್ದರೆ ಅವರ ವಿರುದ್ಧ ತನಿಖೆ ನಡೆಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಭಾನುವಾರ ಹೇಳಿದರು.

‘ವೈದ್ಯರು ಹಾಗೂ ಇತರ ಸಿಬ್ಬಂದಿ ಲಸಿಕೆ ದುರುಪಯೋಗ ಮಾಡಿಕೊಂಡಿದ್ದಾರೆ. ಬೇಕಾದವರಿಗೆ ಮಾತ್ರ ನೀಡುತ್ತಿದ್ದಾರೆ, ಸಾರ್ವಜನಿಕರಿಗೆ ಲಸಿಕೆ ಹಾಕುವಲ್ಲಿ ತಪ್ಪೆಸಗಿದ್ದಾರೆ ಎಂಬ ದೂರುಗಳಿವೆ. ಅವುಗಳನ್ನು ಪರಿಶೀಲಿಸಿ ತನಿಖೆಗೆ ಆದೇಶ ಮಾಡಲಾಗುವುದು. ಶೀಘ್ರ ಎಲ್ಲರಿಗೂ ಲಸಿಕೆ ದೊರೆಯುವಂತೆ ಕ್ರಮ ಕೈಗೊಳ್ಳಲಾವುದು’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸರ್ಕಾರ ನಿಗದಿ ಮಾಡಿರುವ ಪ್ರಮಾಣಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೆಲವು ಕಡೆ ಕೋವಿಶೀಲ್ಡ್, ಕೋವ್ಯಾಕ್ಸಿನ್ ಕೊಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ. ಕೆಲವು ಕಡೆ ಆರೋಗ್ಯ ಇಲಾಖೆ ಸಿಬ್ಬಂದಿ ಮನೆಗೆ ಕೊಂಡೊಯ್ದು ಕುಟುಂಬ ಸದಸ್ಯರಿಗೆ ನೀಡಿದ್ದಾರೆ ಎಂಬ ದೂರುಗಳೂ ಬಂದಿವೆ. ಈ ಬಗ್ಗೆ ಮೂರು ಇಲಾಖೆಗಳ ಅಧಿಕಾರಿಗಳ ತಂಡಕ್ಕೆ ತನಿಖೆ ನಡೆಸಲು ಸೂಚಿಸಲಾಗಿದೆ. ಒಂದು ವೇಳೆ ವ್ಯತ್ಯಾಸಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು’ ಎಂದರು.

‘ಆಮ್ಲಜನಕ ಸಮಸ್ಯೆ ನೀಗಿಸಲು ಮಿಮ್ಸ್ ಹಾಗೂ ಮಳವಳ್ಳಿ ತಾಲೂಕು ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಘಟಕ ಸ್ಥಾಪನೆಗೆ ಸರ್ಕಾರ ಮುಂದಾಗಿದ್ದು ಉಳಿದ 5 ತಾಲ್ಲೂಕು ಕೇಂದ್ರಗಳಲ್ಲೂ ಘಟಕ ಸ್ಥಾಪನೆಗೆ ಕ್ರಮ ವಹಿಸಲಾಗುವುದು. ಜಿಲ್ಲೆಯಲ್ಲಿ ಸಾವಿರಾರು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳ ರೋಗಿಗಳೂ ಮಂಡ್ಯ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದರು.

‘ಜಿಲ್ಲೆಗೆ ಅಗತ್ಯವಿರುವಷ್ಟು ರೆಮ್‌ಡಿಸಿವಿರ್‌ ಲಸಿಕೆ ಬಂದಿವೆ. ಕೋವಿಶೀಲ್ಡ್, ಕೋವಾಕ್ಸಿನ್ ಲಸಿಕೆ ನಾಳೆಯೇ ಬರಲಿದೆ. ಎಲ್ಲವನ್ನೂ ಒಟ್ಟುಗೂಡಿಸಿ ತಾಲ್ಲೂಕುಗಳಿಗೆ ಹಂಚಿಕೆ ಮಾಡಲಾಗುವುದು’ ಎಂದರು.

‘ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಮಂಡ್ಯ ಜಿಲ್ಲೆಗೆ 100 ಜಂಬೋ ಸಿಲಿಂಡರ್‌ ಕೊಡುಗೆಯಾಗಿ ನೀಡಿದ್ದಾರೆ. 50 ಸಿಲಿಂಡರ್‌ಗಳು ಈಗಾಗಲೇ ಬಂದಿದ್ದು ಅವುಗಳನ್ನು ಆರೋಗ್ಯ ಇಲಾಖೆಗೆ ಹಸ್ತಾಂತರ ಮಾಡಲಾಗುವುದು. 10 ಸಾವಿರ ಮಾಸ್ಕ್‌ಗಳನ್ನೂ ಅವರು ಕೊಟ್ಟಿದ್ದಾರೆ. ಜಿಲ್ಲೆಯ ಜನತೆ ಪರವಾಗಿ ಅವರಿಗೆ ಅಭಿನಂದಿಸುತ್ತೇನೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜೆ.ವಿಜಯಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT