ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯದಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ

ವಿವಿಧೆಡೆ ಪ್ರತಿಭಟನೆ, ಕೆಲಕಾಲ ರಾಷ್ಟ್ರೀಯ ಹೆದ್ದಾರಿ ತಡೆ, ಪೊಲೀಸ್‌ ಸರ್ಪಗಾವಲು
Last Updated 5 ಡಿಸೆಂಬರ್ 2020, 13:21 IST
ಅಕ್ಷರ ಗಾತ್ರ

ಮಂಡ್ಯ: ಮರಾಠ ಅಭಿವೃದ್ಧಿ ನಿಗಮ ರಚನೆ ಕೈಬಿಡಬೇಕು ಎಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಸಾರಿಗೆ ಸಂಸ್ಥೆ ಬಸ್‌, ಆಟೊ ಸಂಚಾರ ಎಂದಿನಿಂತಿತ್ತು. ಅಂಗಡಿ ಮುಂಗಟ್ಟು, ಹೋಟೆಲ್‌ಗಳು ತೆರೆದಿದ್ದವು. ಸಾರಿಗೆ ಬಸ್‌ಗಳು ರಸ್ತೆಗೆ ಇಳಿದರೂ ನಿರೀಕ್ಷಿತ ಮಟ್ಟದಲ್ಲಿ ಪ್ರಯಾಣಿಕರು ಬಂದಿರಲಿಲ್ಲ. ಎಲ್ಲವೂ ಸಾಮಾನ್ಯ ದಿನದಂತೆ ಇದ್ದಿತು. ಮಧ್ಯಾಹ್ನದ ನಂತರ ಬಸ್‌ಗಳಲ್ಲಿ ಹೆಚ್ಚಿನ ಜನರು ಕಂಡರು. ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳೂ ಎಂದಿನಂತೆ ಕಾರ್ಯನಿರ್ವಹಿಸಿದವು.

ನಗರದ ಜಯಚಾಮರಾಜ ವೃತ್ತದಲ್ಲಿ ಜಮಾಯಿಸಿದ ಕರ್ನಾಟಕ ರಕ್ಷಣಾ ವೇದಿಕೆ, ಕರುನಾಡ ಸೇವಕರು, ಕನ್ನಡ ಸೇನೆ ಕರ್ನಾಟಕ, ರೈತ ಸಂಘ, ಜಯ ಕರ್ನಾಟಕ ಸಂಘಟನೆ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಸದಸ್ಯರು ಅರಬೆತ್ತಲೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. 10 ನಿಮಿಷಗಳ ಕಾಲ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕದಂಬ ಸೈನ್ಯ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಮಹಾವೀರ ವೃತ್ತದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕೆಲ ಹೊತ್ತು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸಂದರ್ಭದ ವಿಡಿಯೊ ಮಾಡುತ್ತಿದ್ದ ಪೊಲೀಸರು ಟೈರ್‌ಗಳಿಗೆ ಬೆಂಕಿ ಹಚ್ಚಲು ಅವಕಾಶ ನೀಡಲಿಲ್ಲ. ಕೆಲವು ಸಂಘಟನೆಗಳ ಸದಸ್ಯರು ಮಾತ್ರ ಪ್ರತಿಭಟನೆ ನಡೆಸಿದರು. ಸಾಮಾನ್ಯ ಜನರಿಂದ ಯಾವುದೇ ರೀತಿಯಲ್ಲೂ ಬೆಂಬಲ ಸಿಗಲಿಲ್ಲ. ಇದರಿಂದಾಗಿ ಬಂದ್ ಕೇವಲ ಪ್ರತಿಭಟನೆಗೆ ಸೀಮಿತವಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್‌ ಸರ್ವಗಾವಲು ಇತ್ತು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಕ್ರಮಣಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಇದನ್ನು ವಿರೋಧಿಸುವ ಕನ್ನಡಪರ ಘಟನೆಗಳ ಮುಖಂಡರನ್ನು ಆಡಳಿತ ಪಕ್ಷದ ಶಾಸಕರು ಕೀಳಾಗಿ ಆರೋಪ ಮಾಡುತ್ತಿದ್ದಾರೆ. ಕನ್ನಡಿಗರ ಮತ ಬೇಕಿಲ್ಲ ಎಂಬ ಉದ್ಧಟತನದ ಮಾತುಗಳನ್ನು ಆಡುತ್ತಿದ್ದಾರೆ. ಇದನ್ನು ವಿರೋಧಿಸಿ ಬಂದ್ ಮಾಡಲು ಮುಂದಾದರೆ ಪೊಲೀಸರನ್ನು ಬಳಸಿಕೊಂಡು ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಬೆದರಿಕೆ ತಂತ್ರವನ್ನು ಕೈಬಿಟ್ಟು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಬುದ್ಧತೆಯಿಂದ ನಡೆದುಕೊಳ್ಳಬೇಕು. ಕೂಡಲೇ ಮರಾಠ ಅಭಿವೃದ್ಧಿ ನಿಗಮ ರದ್ದುಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮರಾಠಿಗರ ಅಭಿವೃದ್ಧಿಗೆ ನಿಗಮ ಸ್ಥಾಪಿಸಿರುವುದು ಕನ್ನಡಿಗರಿಗೆ ಮಾಡಿದ ದೊಡ್ಡ ಅನ್ಯಾಯವಾಗಿದೆ. ಸರ್ಕಾರಿ ಸ್ವಾಮ್ಯದಲ್ಲಿರುವ ಸಂಸ್ಥೆಗಳ ಸಿಬ್ಬಂದಿಗೆ ಸಂಬಳ ನೀಡಲಾಗದವರು ಭಾಷೆ, ಜಾತಿ ನಿಗಮ ಮಾಡಿ ಹಣವನ್ನು ವ್ಯಯಿಸುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದೆ. ಇದರ ಬಗ್ಗೆ ಗಮನ ಹರಿಸಿ ಅಭಿವೃದ್ಧಿ ಮಾಡುವುದನ್ನು ಬಿಟ್ಟು, ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗುವ ನಿರ್ಧಾರ ಕೈಗೊಳ್ಳುವ ಮೂಲಕ ಹೋರಾಟಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಚಿದಂಬರ್, ಜಿಲ್ಲಾ ಘಟಕದ ಅಧ್ಯಕ್ಷ ಶಂಕರೇಗೌಡ, ಅಶೋಕ್, ಅಜಯ್, ಕಾಂತರಾಜು, ಕರುನಾಡ ಸೇವಕರು ಸಂಘಟನೆಯ ಎಂ.ಬಿ. ನಾಗಣ್ಣಗೌಡ, ಕನ್ನಡ ಸೇನೆ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ರೈತ ಸಂಘದ ಸುಧೀರ್ ಕುಮಾರ್, ಚಂದ್ರಶೇಖರ್, ಕದಂಬ ಸೈನ್ಯದ ಬೇಕ್ರಿ ರಮೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT