ಮಂಗಳವಾರ, ಮೇ 11, 2021
26 °C
ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ; ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಸೂಚನೆ

ಕುಡಿಯುವ ನೀರು: ಕಾಮಗಾರಿಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ‘ಬೇಸಿಗೆ ತೀವ್ರಗೊಳ್ಳುತ್ತಿದ್ದು, ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗಾಗಿ ಯಾವುದೇ ಸಮಸ್ಯೆ ಎದುರಾಗಬಾರದು. ಕುಡಿಯುವ ನೀರಿನ ಕಾಮಗಾರಿಗಳನ್ನು ಅಧಿಕಾರಿಗಳು ಸಮರೋಪಾದಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ಹಣದ ಕೊರತೆ ಇಲ್ಲ. ಹಳ್ಳಿಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಈ ಕುರಿತು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಅಗತ್ಯ ಸೂಚನೆ ನೀಡಬೇಕು. ಗ್ರಾಮೀಣ ಜನರಿಂದ ಯಾವುದೇ ದೂರು ಬಾರದಂತೆ ಆದ್ಯತೆಯ ಮೇರೆಗೆ ಸಮಸ್ಯೆ ಬಗೆಹರಿಸಬೇಕು’ ಎಂದರು.

‘ನಾಗಮಂಗಲ, ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ನೀರಿನ ಕೊರತೆ ಉಂಟಾಗುವ ಹಳ್ಳಿಗಳ ಬಗ್ಗೆ ಈಗಲೇ ಮಾಹಿತಿ ಪಡೆಯಬೇಕು. ನೀರು ಸರಬರಾಜು ಮಾಡಲು ವಿದ್ಯುತ್‌ ಪೂರೈಕೆಯಲ್ಲಿ ಸಮಸ್ಯೆ ಉಂಟಾದರೆ ಕೆಇಬಿ ಅಧಿಕಾರಿಗಳು ಅದನ್ನು ಕೂಡಲೇ ಬಗೆಹರಿಸಬೇಕು, ವಿನಾಕಾರಣ ತಡ ಮಾಡಬಾರದು. ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು’ ಎಂದು ಸೂಚಿಸಿದರು.

‘ಹಾಲಿ, ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿರುವ ಗ್ರಾಮಗಳ ಕುರಿತು ಮಾಹಿತಿ ಕಲೆ ಹಾಕಬೇಕು. ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಸುತ್ತಿರುವ ಗ್ರಾಮಗಳಿಗೆ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆ ಆಲಿಸಬೇಕು. ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ಗ್ರಾಮಸ್ಥರ ಜೊತೆ ಚರ್ಚಿಸಬೇಕು. ಮತ್ತೆ ನೀರಿನ ಕೊರತೆ ಸಮಸ್ಯೆ ಉಂಟಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು. ಅವಶ್ಯವಿದ್ದ ಕಡೆ ಕೊಳವೆ ಬಾವಿ ಹಾಕಿಸಲು ಕ್ರಮ ಕೈಗೊಳ್ಳಬೇಕು’ ಎಂದರು.

‘ಕಳೆದ ಮೂರು ವರ್ಷದಿಂದ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಉಂಟಾದ ತೊಂದರೆಗಳನ್ನು ಪರಿಗಣಿಸಿ ಇಂತಹ ಸಮಸ್ಯೆಗಳು ಮುಂದೆ ಆಗದ ರೀತಿಯಲ್ಲಿ ಕೆಲಸ ಮಾಡಬೇಕು. ಕಳೆದ ವರ್ಷ ಉಂಟಾದ ನೀರಿನ ಸಮಸ್ಯೆ ಪುನರಾವರ್ತನೆಯಾಗಬಾರದು. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ನಲ್ಲಿಗಳನ್ನು ಸರಿಪಡಿಸಲು ಕೂಡಲೇ ಕ್ರಮ ವಹಿಸಬೇಕು. ಸಾರ್ವಜನಿಕರಿಂದ ಬಂದ ದೂರು ಬಗೆಹರಿಸಲು ತಡ ಮಾಡಿದರೆ ಅಂಥ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಗ್ರಾಮೀಣ ಭಾಗದಲ್ಲಿ ನೀರು ಸರಬರಾಜು ಮಾಡುವ ಪೈಪ್‌ಗಳು ಒಡೆದು ಹೋದ ಪ್ರಕರಣಗಳನ್ನು ಸರಿಪಡಿಸಲು ಅಧಿಕಾರಿಗಳು ಯಾವುದೇ ಕಾರಣಕ್ಕೂ ತಡ ಮಾಡಬಾರದು. ಈ ಕುರಿತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು ಆದ್ಯತೆಯ ಮೇರೆಗೆ ಪೈಪ್‌ಲೈನ್‌ ಸರಿಪಡಿಸಬೇಕು. ಪೈಪ್‌ಲೈನ್‌ ಪರಿಶೀಲಿಸಲು ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕು. ದೂರು ಬಂದ ಕೂಡಲೇ ಸಮಸ್ಯೆ ಸರಿಪಡಿಸಬೇಕು. ನೀರು ಪೋಲಾಗುವುದನ್ನು ತಡೆಯಬೇಕು. ಬೇಸಿಗೆಯಲ್ಲಿ ಹನಿ ನೀರಿಗೂ ಮಹತ್ವ ನೀಡಬೇಕು’ ಎಂದು ಸೂಚಿಸಿದರು.

‘ಕೊಳವೆಗಳಿಗೆ ಸಂಬಂಧಿಸಿದಂತೆ ಕಳಪೆ ಕಾಮಗಾರಿಗಳ ಕುರಿತು ಜನರಿಂದ ದೂರುಗಳು ಬರುತ್ತಿವೆ. ಕಳಪೆ ಕಾಮಗಾರಿ ಮಾಡಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಕಳಪೆ ಕೆಲಸ ಮಾಡಿದ ಗುತ್ತಿಗೆದಾರರಿಗೆ ಬಿಲ್‌ ಮಾಡಬಾರದು. ಅಂಥವರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಸಮಸ್ಯೆಗಳು ಶೀಘ್ರವೇ ಪರಿಹಾರವಾಗಬೇಕು’ ಎಂದು ಹೇಳಿದರು.

ಶಾಸಕರಾದ ಸಿ.ಎಸ್‌.ಪುಟ್ಟರಾಜು, ಎಂ.ಶ್ರೀನಿವಾಸ್, ಕೆ.ಟಿ ಶ್ರೀಕಂಠೇಗೌಡ, ಎನ್.ಅಪ್ಪಾಜಿಗೌಡ, ಜಿಲ್ಲಾಧಿಕಾರಿ ಎಸ್‌.ಅಶ್ವಥಿ, ಜಿಲ್ಲಾ ಪಂಚಾಯಿತಿ ಸಿಇಒ ಜುಲ್ಫಿಕರ್‌ ಉಲ್ಲಾ, ಹೆಚ್ಚುವರಿ ಜಿಲ್ಲಾಧಿಕಾರಿ ಶೈಲಜಾ, ಉಪ ವಿಭಾಗಾಧಿಕಾರಿ ಐಶ್ವರ್ಯಾ ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು