ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಟ್ಟೆ, ಲೋಟ ಬಡಿದು ಸರ್ಕಾರದ ವಿರುದ್ಧ ಆಕ್ರೋಶ

6ನೇ ದಿನಕ್ಕೆ ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರ, ರಾಜ್ಯಪಾಲರು ಮಧ್ಯಪ್ರವೇಶಕ್ಕೆ ಒತ್ತಾಯ
Last Updated 12 ಏಪ್ರಿಲ್ 2021, 13:02 IST
ಅಕ್ಷರ ಗಾತ್ರ

ಮಂಡ್ಯ: ಆರನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವಂತೆ ಒತ್ತಾಯಿಸಿ ಸಾರಿಗೆ ಸಂಸ್ಥೆ ಸಿಬ್ಬಂದಿ ನಡೆಸುತ್ತಿರುವ ಮುಷ್ಕರ 6ನೇ ದಿನಕ್ಕೆ ತಲುಪಿದ್ದು ಸೋಮವಾರ ಚಾಲಕರು, ನಿರ್ವಾಹಕರು ಹಾಗೂ ಅವರ ಕುಟುಂಬ ಸದಸ್ಯರು ತಟ್ಟೆ, ಲೋಟ ಬಡಿಯುವ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವಿವಿಧ ತಾಲ್ಲೂಕುಗಳಿಂದ ಬಂದಿದ್ದ ನೂರಾರು ಮಂದಿ ಸಿಬ್ಬಂದಿ, ಮಕ್ಕಳು, ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವರ ಹೋರಾಟಕ್ಕೆ ವಿವಿಧ ಸಂಘಟನೆಗಳ ಮುಖಂಡರು ಬೆಂಬಲ ನೀಡಿದರು. ‘ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ದಿಕ್ಕಾರ’ ಎಂದು ಕೂಗುತ್ತಾ ತಟ್ಟೆ, ಲೋಟ ಬಡಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಜಿಲ್ಲಾಧಿಕಾರಿ ಕಚೇರಿ ಎದುರು ಪಾತ್ರೆಗಳ ಸದ್ದು ಮೊಳಗಿತು.

ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆ ಸಿಬ್ಬಂದಿ ವಿರುದ್ಧ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕಳೆದೊಂದು ವಾರದಿಂದ ಮುಷ್ಕರ ನಡೆಸುತ್ತಿದ್ದರೂ ಸಿಬ್ಬಂದಿಯ ಬೇಡಿಕೆ ಈಡೇರಿಸುವ ಬಗ್ಗೆ ಮಾತನಾಡುತ್ತಿಲ್ಲ. ಸರ್ಕಾರದ ಹಠಮಾರಿ ಧೋರಣೆಯಿಂದ ಸಾರ್ವಜನಿಕರು ಪರಿತಪಿಸುವಂತಾಗಿದೆ. ಸರ್ಕಾರ ನೀಡುತ್ತಿರುವ ವೇತನದಿಂದ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಮಾತಿಗೆ ತಪ್ಪಿದ್ದು ಬಡ ನೌಕರರ ಮೇಲೆ ಚಾಟಿ ಬೀಸುತ್ತಿದೆ ಎಂದು ಆರೋಪಿಸಿದರು.

ಕಳೆದ ಡಿಸೆಂಬರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಮೂರು ತಿಂಗಳೊಳಗೆ ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. 8 ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವರು ಉತ್ತರ ನೀಡಿದ್ದರು. ಆದರೆ ಈಗ ಬೇಡಿಕೆ ಈಡೇರಿಸುವಲ್ಲಿ ವಿಫಲವಾಗಿರುವ ಸರ್ಕಾರ ನೌಕರರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ನ್ಯಾಯ ಕೇಳಲು ಹೋದ ನೌಕರರನ್ನು ಬೇರೆಡೆ ವರ್ಗಾವಣೆ ಮಾಡುತ್ತಿದೆ. ಸಾರಿಗೆ ಸಂಸ್ಥೆಯ ಅಧಿಕಾರಿಗಳು ಅಧಿಕಾರ ದುರುಪಯೋಗ ಮಾಡಿಕೊಂಡು ಬಡ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.

ರಾಜ್ಯದಾದ್ಯಂತ ಹಲವು ತರಬೇತಿ ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ನೌಕರರ ವಸತಿ ಗೃಹ ಖಾಲಿ ಮಾಡುವಂತೆ ನೋಟಿಸ್‌ ನೀಡಲಾಗಿದೆ. ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿರುವ ಸರ್ಕಾರ ನೌಕರರ ಬದುಕು ಕಸಿದುಕೊಳ್ಳುತ್ತಿದೆ. ಸಂಬಳ ಕಡಿತ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ಇದರಿಂದ ಮನನೊಂದ ನೂರಾರು ಸಿಬ್ಬಂದಿ ಈಗಾಗಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುಂದೆ ಏನೇ ಅಪಾಯ ಸಂಭವಿಸಿದರೂ ಅದರ ಹೊಣೆಯನ್ನು ಸರ್ಕಾರ ಹೊರಬೇಕು ಎಂದು ಎಚ್ಚರಿಕೆ ನೀಡಿದರು.

ಹೋರಾಟ ಹತ್ತಿಕ್ಕುತ್ತಿರುವ ರಾಜ್ಯ ಸರ್ಕಾರ ನೌಕರರ ವಿರುದ್ಧ ಕ್ರಮ ಜರುಗಿಸುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ ಬಡ ನೌಕರರಿಗೆ ನ್ಯಾಯ ಕೊಡಿಸಬೇಕು. ವರ್ಗಾವಣೆ ಮಾಡಿರುವ ಸಿಬ್ಬಂದಿಯನ್ನು ಅವರವರ ಸ್ಥಳಕ್ಕೆ ಮರು ನಿಯೋಜನೆ ಮಾಡಬೇಕು. ಸಿಬ್ಬಂದಿ ನೀಡಿರುವ ನೋಟಿಸ್‌ಗಳನ್ನು ವಾಪಸ್‌ ಪಡೆಯಬೇಕು. ಕೂಡಲೇ ಸಬ್ಬಂದಿಯ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT