ಮಂಗಳವಾರ, ಡಿಸೆಂಬರ್ 1, 2020
17 °C
ಪಾಂಡವಪುರ ತಾಲ್ಲೂಕು, ತಿರುಮಲಾಪುರದಲ್ಲಿ ಮರ್ಯಾದೆಗೇಡು ಹತ್ಯೆ ಆರೋಪ

ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ಪಾಂಡವಪುರ ತಾಲ್ಲೂಕಿನ ತಿರುಮಲಾಪುರದಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು, ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ, ರೈತ ಸಂಘದ ಸದಸ್ಯರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತರು ಜಿಲ್ಲಾಡಳಿತ, ಪೊಲೀಸ್‌ ಇಲಾಖೆಯ ವೈಫಲ್ಯ ಖಂಡಿಸಿದರು. ಪರಿಶಿಷ್ಟ ಜಾತಿ ಹೆಣ್ಣು ಎಂದು ತಿಳಿದು ಮರ್ಯಾದೆಗೇಡು ಹತ್ಯೆ ಮಾಡಿರುವ ತಿರುಮಲಾಪುರದ ಟಿ.ಕೆ.ಸ್ವಾಮಿ ಮತ್ತು ಅವರ ಕುಟುಂಬದ ಮೇಲೆ ಎಸ್‌ಸಿ, ಎಸ್‌ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು. ತಾಯಿ ದೂರು ನೀಡಿದರೂ ಆರೋಪಿಗಳನ್ನು ಬಂಧಿಸದೇ ಅವರನ್ನು ರಕ್ಷಣೆ ಮಾಡಲು ಮುಂದಾದ ಶ್ರೀರಂಗಪಟ್ಟಣ ಡಿವೈಎಸ್‌ಪಿ ಅರುಣ್‌ನಾಗೇಗೌಡ ಅವರನ್ನು ಅಮಾನತು ಮಾಡಬೇಕು. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ನೇತೃತ್ವದಲ್ಲಿ 5 ಅಧಿಕಾರಿಗಳ ತಂಡ ರಚಿಸಿ ಶೀಘ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಮಳವಳ್ಳಿ ತಾಲೂಕಿನ ನಂಜೇಗೌಡನದೊಡ್ಡಿ ಗ್ರಾಮದ ಮಹದೇವಮ್ಮ ಅವರ ಪುತ್ರಿ, ಪಾಂಡವಪುರ ತಾಲೂಕಿನ ತಿರುಮಲಾಪುರ ಗ್ರಾಮದ ಯುವಕ 2015ರಲ್ಲಿ ಮದುವೆಯಾಗಿದ್ದಾರೆ. ನಂತರ ಗ್ರಾಮಕ್ಕೆ ಬಂದಾಗ ಯುವತಿಯ ಜಾತಿ ತಿಳಿದು ಕುಟುಂಬಸ್ಥರು ಕೊಲೆ ಮಾಡಿದ್ದಾರೆ. ಆಕೆಯ ಶವ ಕಾಲುವೆಗೆ ಬಿಸಾಡಿದ್ದು, ಪೊಲೀಸರು ಶವ ಸಂಸ್ಕಾರ ಮಾಡಿದ್ದಾರೆ. ಅನಾಥ ಶವದ ಫೋಟೋ ಗುರುತಿಸಿ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ದೂರು ನೀಡಿದರೂ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಾದ್ಯಂತ ಮರ್ಯಾದೆಗೇಡು ಹತ್ಯೆ ತಡೆಯಲು ಸರ್ಕಾರ ಕಠಿಣ ಕಾನೂನು ಜಾರಿ ಮಾಡಬೇಕು. ಸಾವಿಗೆ ಕಾರಣರಾದವರ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಸಂತ್ರಸ್ತ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ದಸಂಸ ರಾಜ್ಯ ಘಟಕದ ಸಂಚಾಲಕ ಎಂ.ಬಿ.ಶ್ರೀನಿವಾಸ್, ರೈತ ನಾಯಕಿ ಸುನಂದಾ ಜಯರಾಂ, ಇಂಡುವಾಳು ಚಂದ್ರಶೇಖರ್‌, ದಸಂಸ ಪದಾಧಿಕಾರಿಗಳಾದ ಸಂತೋಷ್‍ಕುಮಾರ್, ಮಹಾದೇವಪ್ಪ, ಎನ್.ಪರಮೇಶ್, ಚುಂಚಯ್ಯ, ಹುರುಗಲವಾಡಿ ರಾಮಯ್ಯ, ಪವನ್‍ಕುಮಾರ್, ದೇವರಾಜು ಬೇವಿನಕುಪ್ಪೆ, ಯತೀಶ್, ಧಮಾತ್ಮ ಎಂ.ಬೆಟ್ಟಹಳ್ಳಿ, ವೈರಮುಡಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.