ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಂಗಪಟ್ಟಣ: ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Published 7 ಮೇ 2024, 13:45 IST
Last Updated 7 ಮೇ 2024, 13:45 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಲೈಂಗಿಕ ದೌರ್ಜನ್ಯದ ಆರೋಪಿ, ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಮಿನಿ ವಿಧಾನಸೌಧದ ಎದುರು ಅರ್ಧ ತಾಸಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಸಾಲು ಸಾಲು ಘೋಷಣೆ ಕೂಗಿದರು. ಹಲವು ಮಹಿಳೆಯರ ಜತೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಯನ್ನು ಸರ್ಕಾರ ರಕ್ಷಿಸುತ್ತಿದೆ ಎಂದು ಆರೋಪಿಸಿದರು.

ಪ್ರಜ್ವಲ್‌ ರೇವಣ್ಣ ಅವರು ಎಸಗಿರುವ ದುಷ್ಕೃತ್ಯದಿಂದಾಗಿ ರಾಜ್ಯ ಮತ್ತು ದೇಶದ ಮಾನ ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೂ ಅಪಮಾನ ಉಂಟಾಗಿದೆ. ಇಂತಹ ಗುರುತರವಾದ ಆರೋಪ ಎಸಗಿರುವ ವ್ಯಕ್ತಿಯನ್ನು ಇದುವರೆಗೆ ಬಂಧಿಸದೇ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಆರೋಪಿಯನ್ನು ತಕ್ಷಣ ಬಂಧಿಸಬೇಕು ಎಂದು ಪಿಎಸ್‌ಎಸ್‌ಕೆ ಮಾಜಿ ನಿರ್ದೇಶಕ ಪಾಂಡು ಆಗ್ರಹಿಸಿದರು.

ಮುಸ್ಲಿಂ ಸೌಹಾರ್ದ ವೇದಿಕೆ ಗೌರವಾಧ್ಯಕ್ಷ ಇಲ್ಯಾಸ್‌ ಅಹಮದ್‌ಖಾನ್‌ ಮಾತನಾಡಿ, ಪ್ರಜ್ವಲ್‌ ರೇವಣ್ಣ ಅವರು ಎಸಗಿರುವ ಕೃತ್ಯದಿಂದ ರಾಜ್ಯದ ಘನತೆಗೆ ಧಕ್ಕೆ ಬಂದಿದೆ. ಪ್ರಜ್ವಲ್‌ ರೇವಣ್ಣ ಸಂಸತ್‌ ಸದಸ್ಯ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡು ಮಹಿಳೆಯರನ್ನು ವಂಚಿಸಿದ್ದಾರೆ. ಅವರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

‘ಪೆನ್‌ಡ್ರೈವ್‌ ಮೂಲಕ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳನ್ನು ಸಾಮಾಜಿಕ ಜಾಲತಾಣ ಮತ್ತು ಸುದ್ದಿ ವಾಹಿನಿಗಳಲ್ಲಿ ಪ್ರಸಾರ ಮಾಡಲು ಕಾರಣರಾದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಎಸ್‌ಐಟಿ ಅಧಿಕಾರಿಗಳು ಪ್ರಕರಣ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು’ ಎಂದು ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರಳಾಗಾಲ ಕೃಷ್ಣೇಗೌಡ ಹೇಳಿದರು.

ತಾಲ್ಲೂಕು ಆಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರೈತ ಸಂಘದ ಗೌರವಾಧ್ಯಕ್ಷ ಬಿ.ಎಸ್‌. ರಮೇಶ್‌, ಕೃಷಿಕ ಸಮಾಜದ ಉಪಾಧ್ಯಕ್ಷ ಕಡತನಾಳು ಬಾಲಕೃಷ್ಣ, ಡಿ.ಎಂ. ಕೃಷ್ಣೇಗೌಡ, ಎಂ.ಶೆಟ್ಟಹಳ್ಳಿ ಪುರುಷೋತ್ತಮ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಗಂಜಾಂ ರವಿಚಂದ್ರ, ಅಲ್ಲಾಪಟ್ಟಣ ಕೆಂಪೇಗೌಡ, ದೊಡ್ಡಪಾಳ್ಯ ಚಂದ್ರಶೇಖರ್‌, ಜಯರಾಮೇಗೌಡ, ಕೆ.ಶೆಟ್ಟಹಳ್ಳಿ ಅಪ್ಪಾಜಿ, ತಡಗವಾಡಿ ನಿಂಗೇಗೌಡ, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಚಂದಗಾಲು ಶಂಕರ್‌, ಪ್ರಿಯಾ ರಮೇಶ್‌, ಆರ್‌. ಕುಮಾರ್‌, ಮುಂಡುಗದೊರೆ ಮೋಹನ್‌, ಕೂಡಲಕುಪ್ಪೆ ಜಯರಾಂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT