ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಸಿಇಪಿ ವಿರುದ್ಧ ಮನ್‌ಮುಲ್‌ ಹೋರಾಟ 31ರಂದು

Last Updated 29 ಅಕ್ಟೋಬರ್ 2019, 16:26 IST
ಅಕ್ಷರ ಗಾತ್ರ

ಮಂಡ್ಯ: ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದಕ್ಕೆ ಸಹಿ ಹಾಕದಂತೆ ಒತ್ತಾಯಿಸಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಮನ್‌ಮುಲ್‌) ನೇತೃತ್ವದಲ್ಲಿ ಅ. 31ರಂದು ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ’ ಎಂದು ಮನ್‌ಮುಲ್‌ ಅಧ್ಯಕ್ಷ ಬಿ.ಆರ್‌.ರಾಮಚಂದ್ರ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಅ.31ರಂದು ಬೆಳಿಗ್ಗೆ 11ಗಂಟೆಗೆ ನಗರದ ಸಿಲ್ವರ್‌ ಜ್ಯೂಬಿಲಿ ಪಾರ್ಕ್‌ನಿಂದ ಪ್ರತಿಭಟನಾ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು. ಹಾಲು ಉತ್ಪಾದಕರಿಗೆ ಮರಣ ಶಾಸನವಾಗಲಿರುವ ಆರ್‌ಸಿಇಪಿ ಒಪ್ಪಂದವನ್ನು ಪ್ರಧಾನ ಮಂತ್ರಿ ನಿರಾಕರಿಸಬೇಕು. ಒಪ್ಪಂದದಿಂದ ದೇಶದಲ್ಲಿ ಹೈನುಗಾರಿಕೆ ನಂಬಿರುವ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಲಿವೆ’ ಎಂದರು.

‘ಜಿಲ್ಲೆಯಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು, ಮಾರಾಟ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಈಗಾಗಲೇ ಆಹ್ವಾನ ನೀಡಲಾಗಿದೆ. ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ರೈತರಿಗೆ ಮನವಿ ಮಾಡಲಾಗಿದೆ’ ಎಂದರು.

‘ಹೈನೋದ್ಯಮದಲ್ಲಿ ಮುಂದಿರುವ ನ್ಯೂಜಿಲೆಂಡ್‌, ಆಸ್ಟ್ರೇಲಿಯಾ ದೇಶದಿಂದ ಯಾವುದೇ ತೆರಿಗೆ ಇಲ್ಲದೆ ಹಾಲು, ಬೆಣ್ಣೆ, ಚೀಸ್‌, ಹಾಲಿನಪುಡಿ ಉತ್ಪನ್ನಗಳು ಭಾರತಕ್ಕೆ ಭಾರೀ ಪ್ರಮಾಣದಲ್ಲಿ ಬರಲಿದ್ದು, ಇಲ್ಲಿನ ಹಾಲು ಉತ್ಪಾದಕರು ತತ್ತರಿಸಲಿದ್ದಾರೆ. ಕೃಷಿ ಹಾಗೂ ಹೈನು ಉದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಅನೇಕ ಉದ್ಯೋಗಾವಕಾಶಗಳನ್ನು ಕಸಿದುಕೊಳ್ಳುವ ಅಪಾಯ ಇದೆ. ಯಾವುದೇ ಕಾರಣಕ್ಕೂ ಸಹಿ ಹಾಕಬಾರದು’ ಎಂದು ಆಗ್ರಹಿಸಿದರು.

‘ವಿದೇಶದಿಂದ ಆಮದು ಮಾಡಿಕೊಳ್ಳುವ ಹಾಲಿಗೆ ನಾವು ಪೈಪೋಟಿ ನೀಡಲು ಸಾಧ್ಯವಿಲ್ಲ. ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಹೆಚ್ಚಿನ ಪ್ರಮಾಣದಲ್ಲಿ ಇದೆ. ಆದರೆ ಹೆಚ್ಚಾಗಿ ಖಾಲಿಯಾಗುತ್ತಿಲ್ಲ. ಬೆಂಗಳೂರು ಸೇರಿದಂತೆ ವಿವಿಧೆಡೆ ಮಾರಲಾಗುತ್ತಿದೆ’ ಎಂದರು. ನಿರ್ದೇಶಕರಾದ ಯು.ಸಿ.ಶಿವಕುಮಾರ್‌, ಬೋರೇಗೌಡ, ರವಿ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT