ಸೋಮವಾರ, ಮೇ 10, 2021
19 °C
ಬೆಂಗಳೂರು– ಮೈಸೂರು ಹೆದ್ದಾರಿ ವೃತ್ತದಲ್ಲಿ ನಡೆದ ಪ್ರತಿಭಟನೆ

ಶ್ರೀರಂಗಪಟ್ಟಣ: ಜಾರಕಿಹೊಳಿ ಬಂಧಿಸಲು ಕಾಂಗ್ರೆಸ್‌ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀರಂಗಪಟ್ಟಣ: ಡಿ.ಕೆ.ಶಿವಕಮಾರ್‌ ಅವರ ಕಾರಿನ ಮೇಲೆ ದಾಳಿ ನಡೆಸಿರುವ ರಮೇಶ ಜಾರಕಿಹೊಳಿ ಬೆಂಬಲಿಗರು ಮತ್ತು ರಮೇಶ ಜಾರಕಿಹೊಳಿ ಅವರನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಬೆಂಗಳೂರು– ಮೈಸೂರು ಹೆದ್ದಾರಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು. ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡ ನೇತೃತ್ವದಲ್ಲಿ ಒಂದು ತಾಸು ಪ್ರತಿಭಟನೆ ನಡೆಯಿತು.

ಬಿಜೆಪಿ ಸರ್ಕಾರ, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸತೀಶ್‌ ಜಾರಕಿಹೊಳಿ ವಿರುದ್ಧ ಘೋಷಣೆ ಕೂಗಿದರು. ವಾಹನಗಳನ್ನು ತಡೆದು ದರಿಂದಾಗಿ ಬೆಂಗಳೂರು– ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮೇಲೆ ರಮೇಶ ಜಾರಕಿಹೊಳಿ ಬೆಂಲಿಗರು ಅನಾಗರಿಕರಂತೆ ದಾಳಿ ನಡೆಸಿದ್ದಾರೆ. ರಾಷ್ಟ್ರೀಯ ಪಕ್ಷವೊಂದರ ರಾಜ್ಯ ಘಟಕದ ಅಧ್ಯಕ್ಷರ ಮೇಲೆ ದೌರ್ಜನ್ಯ ನಡೆದಿದೆ. ಇಷ್ಟಾದರೂ ಸರ್ಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಅಸಹಾಯಕರಂತೆ ವರ್ತಿಸುತ್ತಿದ್ದಾರೆ. ಜಾರಕಿಹೊಳಿ ವಿರುದ್ಧ ಗಂಭೀರ ಪ್ರಕರಣಗಳು ದಾಖಲಾಗಿದ್ದರೂ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ರಮೇಶ ಬಂಡಿಸಿದ್ದೇಗೌಡ ಗುಡುಗಿದರು.

ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎನ್‌.ಪ್ರಕಾಶ್‌ ಮಾತನಾಡಿ, ‘ಸಂತ್ರಸ್ತ ಯುವತಿ ರಕ್ಷಣೆ ಕೋರಿ ಹೈಕೋರ್ಟ್‌ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಪಾಲನೆ ಆಗುತ್ತಿಲ್ಲ. ಅಧಿಕಾರಸ್ಥರು ಕಾನೂನು ಉಲ್ಲಂಘಿಸಿದ್ದರೂ ಕ್ರಮ ಕೈಗೊಳ್ಳದಿದ್ದರೆ ಏನರ್ಥ?’ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಸದಸ್ಯ ಎನ್‌.ಗಂಗಾಧರ್‌, ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಿತ್ರ ರಮೇಶ್‌, ಯುವ ಕಾಂಗ್ರೆಸ್‌ ಅಧ್ಯಕ್ಷರಾದ ಜಯಕುಮಾರ್‌, ಸಂಜಯ್‌, ಗುಣವಂತ, ಮುಖಂಡರಾದ ಪಿ.ಎಚ್‌.ಚಂದ್ರಶೇಖರ್‌, ಎಂ.ಎಲ್‌.ದಿನೇಶ್‌, ದರ್ಶನ್‌, ಉದಯಕುಮಾರ್‌, ಅರಕೆರೆ ಶಶಾಂಕ್‌, ಪಿಕಾರ್ಡ್‌ ಮಾಜಿ ಅಧ್ಯಕ್ಷರಾದ ಗುರುಪ್ರಸಾದ್‌, ಮಹದೇವು, ಹೊಸಹಳ್ಳಿ ಕೃಷ್ಣಮೂರ್ತಿ, ತಾ.ಪಂ.ಸದಸ್ಯ ಕಾಳೇಗೌಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು