ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಪಿಎಲ್‌ ಕುಟುಂಬಕ್ಕೆ ₹10 ಸಾವಿರ ಹಣ ಕೊಡಿ: ಶಾಸಕ ರವೀಂದ್ರ ಶ್ರೀಕಂಠಯ್ಯ

Last Updated 2 ಮೇ 2021, 6:43 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ‘ಕೊರೊನಾ ಸೋಂಕು ತಂದೊಡ್ಡಿರುವ ವಿಷಮ ಸ್ಥಿತಿಯಲ್ಲಿ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ರಾಜ್ಯದ ಎಲ್ಲ ಬಿಪಿಎಲ್‌ ಕುಟುಂಬಗಳಿಗೆ ತಲಾ ₹ 10 ಸಾವಿರ ನೆರವು ನೀಡಬೇಕು’ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಆಗ್ರಹಿಸಿದರು.

ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ಶನಿವಾರ ಕೋವಿಡ್‌ ಕೇರ್‌ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸದ್ಯದ ಸಾಮಾಜಿಕ, ಆರ್ಥಿಕ ದುಃಸ್ಥಿತಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳೇ ಹೊಣೆ. ಕೊರೊನಾ ಸೋಂಕು ಉಲ್ಬಣಿಸುತ್ತದೆ ಎಂಬ ವಿಷಯವನ್ನು ತಜ್ಞರು ಹೇಳಿದರೂ ಕಿವಿಗೆ ಹಾಕಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಜೀವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಈ ಸರ್ಕಾರಗಳ ಜನ ನಿಷ್ಕಾಳಜಿಯಿಂದಾಗಿ ವಿಶ್ವದ ಮುಂದೆ ದೇಶದ ಮಾನ ಹರಾಜಾಗಿದೆ. ಇನ್ನಾದರೂ ಎಚ್ಚೆತ್ತುಕೊಂಡು ಜನರ ಜೀವ ಉಳಿಸಲು, ಅವರ ಬದುಕು ಸುಧಾರಿಸಲು ಕಟಿಬದ್ಧರಾಗಿ ಕೆಲಸ ಮಾಡಬೇಕು’ ಎಂದು ಒತ್ತಾಯಿಸಿದರು.

‘ಡಯಾಲಿಸಿಸ್ ಕೇಂದ್ರಗಳಲ್ಲಿ ಕೆಲಸ ಮಾಡುವವರಿಗೆ ಸರ್ಕಾರ ಹಣ ಕೊಟ್ಟಿಲ್ಲ. ಸರ್ಕಾರದ ಖರೀದಿ ಕೇಂದ್ರಕ್ಕೆ ಭತ್ತ ಮಾರಾಟ ಮಾಡಿದ ರೈತರಿಗೂ ಹಣ ನೀಡಿಲ್ಲ. ತಕ್ಷಣ ಹಣ ಬಿಡುಗಡೆ ಮಾಡಬೇಕು’ ಎಂದು ಅವರು ಆಗ್ರಹಿಸಿದರು.

‘ತಾಲ್ಲೂಕಿನಲ್ಲಿ ಆಕ್ಸಿಜನ್‌ ಸಿಲಿಂಡರ್‌ ಕೊರತೆ ಇದೆ ಎಂಬುದನ್ನು ಮನಗಂಡು 30 ಸಿಲಿಂಡರ್‌ಗಳನ್ನು ವೈಯಕ್ತಿಕವಾಗಿ ಕೊಡಿಸಿದ್ದೇನೆ. ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಪೌರಕಾರ್ಮಿಕರಿಗೆ ಪಿಪಿಇ ಕಿಟ್‌ ಕೊಡಲಾಗಿದೆ. ಸೇವೆ ಮಾಡಬೇಕು ಎನ್ನುವವರು ಈ ತುರ್ತು ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸಬೇಕು. ಸಂಘ, ಸಂಸ್ಥೆಗಳು ಕ್ರಿಯಾಶೀಲವಾಗಬೇಕು’ ಎಂದು ಹೇಳಿದರು.

ತಹಶೀಲ್ದಾರ್‌ ಎಂ.ವಿ. ರೂಪಾ, ಜಿ.ಪಂ. ಮಾಜಿ ಸದಸ್ಯ ಎ.ಆರ್‌. ಮರೀಗೌಡ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT