ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಆರ್‌ಎಸ್‌ ಸುತ್ತ ಗಣಿಗಾರಿಗೆ ನಿಷೇಧಕ್ಕೆ ಸಿದ್ಧ: ಆರ್‌.ಅಶೋಕ್‌

Last Updated 23 ಡಿಸೆಂಬರ್ 2019, 14:31 IST
ಅಕ್ಷರ ಗಾತ್ರ

ಮಂಡ್ಯ: ‘ಕೆಆರ್‌ಎಸ್‌ ಜಲಾಶಯದ ಆಸುಪಾಸಿನಲ್ಲಿ ಕಲ್ಲು ಗಣಿ ಚಟುವಟಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ನಮ್ಮ ಸರ್ಕಾರ ಸಿದ್ಧವಿದೆ’ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಆರ್‌.ಅಶೋಕ್‌ ಸೋಮವಾರ ಹೇಳಿದರು.

ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕಲ್ಲು ಗಣಿ ಚಟುವಟಿಕೆಯಿಂದ ಜಲಾಶಯಕ್ಕೆ ಉಂಟಾಗುತ್ತಿರುವ ಪರಿಣಾಮಗಳ ಬಗ್ಗೆ ತಿಂಗಳೊಳಗೆ ವರದಿ ನೀಡಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಅನ್ವಯ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಮೈಸೂರು ಮಹಾರಾಜರು ನಿರ್ಮಿಸಿರುವ ಜಲಾಶಯವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ’ ಎಂದರು.

ಕಾರ್ಖಾನೆಗಳು ಖಾಸಗಿ ಗುತ್ತಿಗೆಗೆ: ‘ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಹಾಗೂ ಮೈಷುಗರ್‌ ಕಾರ್ಖಾನೆ ಪುನಶ್ಚೇತನಕ್ಕೆ ಎಲ್ಲಾ ಸರ್ಕಾರಗಳು ₹ 800 ಕೋಟಿಗೂ ಹೆಚ್ಚು ಹಣ ನೀಡಿವೆ. ಆದರೆ ಅಷ್ಟೊಂದು ಹಣ ಎಲ್ಲಿಗೆ ಹೋಯಿತು ಎಂಬುದೇ ಗೊತ್ತಾಗಿಲ್ಲ. ಹೀಗಾಗಿ ಎರಡೂ ಕಾರ್ಖಾನೆಗಳನ್ನು ಖಾಸಗಿ ಗುತ್ತಿಗೆಗೆ ನೀಡಲು ನಿರ್ಧರಿಸಲಾಗಿದೆ. ಶೀಘ್ರ ಗುತ್ತಿಗೆ ಟೆಂಡರ್‌ ಕರೆಯಲಾಗುವುದು’ ಎಂದು ಹೇಳಿದರು.

ಬಿಜೆಪಿ ಪ್ರಣಾಳಿಕೆ: ‘ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್‌ ಕುತುಂತ್ರದ ರಾಜಕಾರಣ ಮಾಡುತ್ತಿದೆ. ಈ ವಿಚಾರ ಹಲವು ವರ್ಷಗಳಿಂದ ಬಿಜೆಪಿಯ ಪ್ರಣಾಳಿಕೆಯಲ್ಲೇ ಇತ್ತು. ಆಗಿನಿಂದಲೂ ಕಾಂಗ್ರೆಸ್‌ ಮುಖಂಡರು ಕಣ್ಣು ಮುಚ್ಚಿ ಕುಳಿತಿದ್ದರಾ’ ಎಂದು ಪ್ರಶ್ನಿಸಿದರು.

‘ದೇಶದ ಶೇ 80ರಷ್ಟು ಜನರು ಕಾಯ್ದೆಯ ಪರವಾಗಿದ್ದಾರೆ. ಯಾವುದೇ ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಯ್ದೆ ರೂಪಿಸಿಲ್ಲ. ರಾಜಕೀಯ ಲಾಭಕ್ಕಾಗಿ ಜನರಲ್ಲಿ ಗೊಂದಲ ಸೃಷ್ಟಿಸಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಯಾರೋ ಕೆಲವರು ಬೇಡ ಎಂದರೆ ಕಾಯ್ದೆ ಬದಲಾವಣೆ ಮಾಡಲು ಸಾಧ್ಯವಿಲ್ಲ’ ಎಂದರು.

ಮುಸ್ಲಿಂ ಮುಖಂಡರ ಸಭೆ: ನಗರದ ಪ್ರವಾಸಿ ಮಂದಿರದಲ್ಲಿ ಮುಸ್ಲಿಂ ಮುಖಂಡರ ಸಭೆ ನಡೆಸಿದ ಅಶೋಕ್‌, ಪೌರತ್ವ ತಿದ್ದುಪಡಿ ಕಾಯ್ದೆ ಮುಸ್ಲಿಮರಿಗೆ ವಿರುದ್ಧವಾಗಿಲ್ಲ. ಹೊಸದಾಗಿ ದೇಶಕ್ಕೆ ಬರುವವರಿಗೆ ಮಾತ್ರ ತೊಂದರೆಯಾಗಲಿದ್ದು ಈಗಾಗಲೇ ವಾಸ ಮಾಡುತ್ತಿರುವ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ. ಹೀಗಾಗಿ ಪ್ರತಿಭಟನೆಯನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT