ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಪ್ರತಿಭೆಗಳು ಆಡಳಿತ ವ್ಯವಸ್ಥೆಗೆ ಬರಲಿ: ಡಿಸಿ ಡಾ.ಎಂ.ವಿ. ವೆಂಕಟೇಶ್

Last Updated 28 ಆಗಸ್ಟ್ 2020, 11:05 IST
ಅಕ್ಷರ ಗಾತ್ರ

ಮಂಡ್ಯ: ‘ಗ್ರಾಮೀಣ ಭಾಗದ ಯುವ ಪ್ರತಿಭೆಗಳು ಹೆಚ್ಚಿನ ಸಂಖ್ಯೆಯಲ್ಲಿ ಆಡಳಿತ ವ್ಯವಸ್ಥೆಗೆ ಬರಬೇಕು. ಹಳ್ಳಿ ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರಿಗೆ ಉತ್ತಮ ಆಡಳಿತ ನೀಡಲು ಸಾಧ್ಯವಾಗುತ್ತದೆ’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಹೇಳಿದರು.

ಸಂಸದೆ ಸುಮಲತಾ ಅವರ ಜನ್ಮದಿನ ಅಂಗವಾಗಿ ಗುರುವಾರ ನಗರದ ಅಂಬೇಡ್ಕರ್‌ ಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

‘ರೈತರು ಎದುರಿಸುತ್ತಿರುವ ಸಮಸ್ಯೆಗಳು ರೈತ ಕುಟುಂಬದಿಂದ ಬಂದವರಿಗೆ ಮಾತ್ರ ತಿಳಿದಿರುತ್ತವೆ. ಮಂಡ್ಯ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು ಜನರು ಸ್ವಾಭಿಮಾನಿಗಳಾಗಿದ್ದಾರೆ. ಇಲ್ಲಿಯ ಜನರು ತಮ್ಮ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಪ್ರೋತ್ಸಾಹ ನೀಡಬೇಕು. ಆಡಳಿತ ವ್ಯವಸ್ಥೆಯಲ್ಲಿ ಕೆಲಸ ಮಾಡಿ ಸಾಧನೆ ಮಾಡಬೇಕು’ ಎಂದು ಹೇಳಿದರು.

‘ಮಳವಳ್ಳಿ ತಾಲ್ಲೂಕಿನ ಮಾರಗೌಡನಹಳ್ಳಿಯ ಅಭಿಷೇಕ್‌ ಗೌಡ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತರ ರ‍್ಯಾಂಕಿಂಗ್‌ ಪಡೆದು ಆಡಳಿತ ವ್ಯವಸ್ಥೆಯತ್ತ ಬರುತ್ತಿದ್ದಾರೆ. ಗ್ರಾಮೀಣ ಶಾಲೆಯಲ್ಲಿ ಓದಿ ಉನ್ನತ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವುದು ದೊಡ್ಡ ಸಾಧನೆಯಾಗಿದೆ. ಇವರು ಜಿಲ್ಲೆಯ ಯುವ ಪ್ರತಿಭೆಗಳಿಗೆ ಮಾದರಿಯಾಗಬೇಕು’ ಎಂದು ಹೇಳಿದರು.

‘ಸುಮಲತಾ ಅವರ ಜನ್ಮದಿನದಂದು ಪ್ರತಿಭೆಗಳಿಗೆ ಅಭಿನಂದಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಸುಮಲತಾ ಅವರು ಸ್ವಾಭಿಮಾನದ ಹೆಸರಿನಲ್ಲಿ ಜಿಲ್ಲೆಯ ಸಂಸದರಾಗಿದ್ದಾರೆ. ಅವರು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಸಂವೇದನಾಶೀಲತೆಯಿಂದ ರೈತರು, ಮಹಿಳೆಯರ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದಾರೆ’ ಎಂದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ್‌, ಜಿಲ್ಲಾ ಪಂಚಾಯಿತಿ ಸಿಇಒ ಜುಲ್ಫಿಕರ್‌ ಉಲ್ಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT